ಮೇ 20ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಶೇ. 25ರಷ್ಟು ವೇತನ ಹೆಚ್ಚಳಕ್ಕೆ ಪಟ್ಟು

ಬೆಂಗಳೂರು: ರಾಜ್ಯ ಸರ್ಕಾರದ ಏಕಪಕ್ಷೀಯ ನಿರ್ಧಾರವನ್ನು ಖಂಡಿಸಿ ಹಾಗೂ ಶೇ. 25ರಷ್ಟು ವೇತನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಈ ನಿರ್ಧಾರವನ್ನು ಪ್ರಕಟಿಸಿದ್ದು, ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿದೆ.

ಬುಧವಾರ ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷೆ ಜ್ಯೋತಿ ಅನಂತಸುಬ್ಬರಾವ್ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಮುಷ್ಕರದ ನಿರ್ಣಯ ಕೈಗೊಳ್ಳಲಾಗಿದೆ. ಸಭೆಯ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜ್ಯೋತಿ ಅನಂತಸುಬ್ಬರಾವ್, ವಿಜಯ್ ಭಾಸ್ಕರ್ ಡಿ.ಎ., ಮತ್ತು ಬಿ. ಜಯದೇವರಾಜೇ ಅರಸು ಅವರು ಸರ್ಕಾರದ ಮಲತಾಯಿ ಧೋರಣೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Karnataka Transport Workers

ಮೂಲ ವೇತನವನ್ನು ಶೇ. 25ರಷ್ಟು ಹೆಚ್ಚಳ ಮಾಡಬೇಕು ಎಂಬುದು ನೌಕರರ ಪ್ರಮುಖ ಬೇಡಿಕೆಯಾಗಿದೆ. ಆದರೆ, ಸರ್ಕಾರವು ಕಾರ್ಮಿಕ ಸಂಘಟನೆಗಳ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಕೇವಲ ಶೇ. 12.5ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಿದೆ. ಸರ್ಕಾರಿ ನೌಕರರಿಗೆ ನಾಲ್ಕು ವರ್ಷಗಳ ಹಿಂದೆಯೇ 7ನೇ ವೇತನ ಆಯೋಗದ ಶಿಫಾರಸಿನಂತೆ ಶೇ. 27.5ರಷ್ಟು ವೇತನ ಹೆಚ್ಚಿಸಿರುವ ರಾಜ್ಯ ಸರ್ಕಾರವು, ಸಾರಿಗೆ ನೌಕರರ ವಿಷಯದಲ್ಲಿ ತಾರತಮ್ಯದ ನಿಲುವು ತಳೆದಿದೆ ಎಂದು ಮುಖಂಡರು ಆರೋಪಿಸಿದ್ದಾರೆ.

ಕಳೆದ ಫೆಬ್ರವರಿ 18ರಂದು ಸರ್ಕಾರ ಹೊರಡಿಸಿರುವ ಆದೇಶವನ್ನು ತಕ್ಷಣವೇ ತಿದ್ದುಪಡಿ ಮಾಡಬೇಕು ಹಾಗೂ 2025ರ ಜನವರಿ 1ರ ಬದಲಾಗಿ 2024ರ ಜನವರಿ 1ರಿಂದಲೇ ಅನ್ವಯವಾಗುವಂತೆ ವೇತನ ಹೆಚ್ಚಳ ಮಾಡಬೇಕು ಎಂದು ನೌಕರರು ಆಗ್ರಹಿಸಿದ್ದಾರೆ. ಇದಲ್ಲದೆ, ಚಾಲ್ತಿಯಲ್ಲಿರುವ ಕೈಗಾರಿಕಾ ಒಪ್ಪಂದಗಳ ಪ್ರಕಾರ 2022ರಲ್ಲಿದ್ದ ಶೇ. 31ರಷ್ಟು ತುಟ್ಟಿಭತ್ಯೆಯನ್ನು (DA) ಮೂಲ ವೇತನದಲ್ಲಿ ವಿಲೀನಗೊಳಿಸಬೇಕು. ವಾರ್ಷಿಕ ಬಡ್ತಿಯನ್ನು 2024ರ ಬೇಡಿಕೆಯ ಪಟ್ಟಿಯಲ್ಲಿರುವಂತೆ ಹೆಚ್ಚಿಸಿ, ವೇತನ ಶ್ರೇಣಿ ರಚಿಸಬೇಕು ಎಂದು ಒತ್ತಾಯಿಸಲಾಗಿದೆ.

ಬಾಟಾ ಮತ್ತು ಇತರೆ ಭತ್ಯೆಗಳನ್ನು ವೈಜ್ಞಾನಿಕವಾಗಿ ಹೆಚ್ಚಿಸಬೇಕು, 12 ತಿಂಗಳ ಬಾಕಿ ಹಣವನ್ನು ಪ್ರಸ್ತುತ ಕರ್ತವ್ಯದಲ್ಲಿರುವ ಹಾಗೂ ನಿವೃತ್ತರಾದ ಸಿಬ್ಬಂದಿಗೆ ಪಾವತಿಸಬೇಕು ಮತ್ತು 26 ತಿಂಗಳ ಬಾಕಿ ಹಣವಾದ 1,272 ಕೋಟಿ ರೂಪಾಯಿಗಳನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಬೇಕು ಎಂದು ಜಂಟಿ ಸಮಿತಿ ಪಟ್ಟು ಹಿಡಿದಿದೆ.

ಮೇ 20ರ ಮುಷ್ಕರದ ರೂಪುರೇಷೆಗಳ ಬಗ್ಗೆ ಚರ್ಚಿಸಲು ಮೇ 15ರಂದು ಮಧ್ಯಾಹ್ನ 3 ಗಂಟೆಗೆ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, "ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಕುರಿತು ಸರ್ಕಾರದ ತೀರ್ಮಾನದ ಮಾಹಿತಿಯನ್ನು ಈಗಾಗಲೇ ನೀಡಲಾಗಿದೆ. ಅದಕ್ಕೂ ಒಪ್ಪದೆ ನೌಕರರು ಮುಷ್ಕರ ಆರಂಭಿಸಿದರೆ, ಆ ಮೇಲೆ ನಮ್ಮ ನಿರ್ಧಾರವನ್ನು ನಾವು ಪ್ರಕಟಿಸುತ್ತೇವೆ" ಎಂದು ಎಚ್ಚರಿಕೆ ನೀಡಿದ್ದಾರೆ. ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಎನ್.ಆರ್. ದೇವರಾಜೇ ಅರಸು, ಎಚ್.ಡಿ. ರೇವಪ್ಪ, ಎಚ್.ಎಸ್. ಮಂಜುನಾಥ್, ವೆಂಕಟರವಣಪ್ಪ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+