Karnataka Water Crisis: ಅರ್ಧ ಕರ್ನಾಟಕದಲ್ಲಿ ನೀರಿನ ಸಮಸ್ಯೆ: 16 ಜಿಲ್ಲೆಗಳಲ್ಲಿ ಕುಡಿಯುವ ನೀರಿಗೂ ಸಂಕಷ್ಟ!
ಕರ್ನಾಟಕದಲ್ಲಿ ಮುಂಗಾರು ಕೈಕೊಟ್ಟ ಪರಿಣಾಮ ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದೆ. ರಾಜ್ಯದ ಎಲ್ಲಾ ಜಲಾಶಯಗಳಗಲ್ಲಿ ನೀರಿನ ಮಟ್ಟ ತೀವ್ರ ಕಡಿಮೆಯಾಗಿದೆ. ಜೂನ್ ತಿಂಗಳಲ್ಲಿ ವಾಡಿಕೆಗಿಂತ ಶೇಕಡಾ 61ರಷ್ಟು ಮಳೆ ಕಡಿಮೆಯಾಗಿದೆ. ಇನ್ನು ಮುಂದಿನ ದಿನಗಳಲ್ಲಿ ಸಮಸ್ಯೆ ತೀವ್ರವಾಗುವ ಆತಂಕವಿದ್ದು, ಕುಡಿಯುವ ನೀರಿನ ಸಮಸ್ಯೆಯನ್ನು ನಿಭಾಯಿಸಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಅಧಿಕಾರಿಗಳ ಜೊತೆ ಈ ಬಗ್ಗೆ ಸಭೆ ನಡೆಸಲಾಗಿದ್ದು, ಬರದ ರೀತಿಯ ಪರಿಸ್ಥಿತಿಯನ್ನು ನಿಭಾಯಿಸಲು ಸಿದ್ಧವಾಗಿರುವಂತೆ ಅಧಿಕಾರಿಗಳಿ ಸೂಚನೆ ನೀಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ (RDPR) ಸಚಿವ ಪ್ರಯಾಂಕ್ ಖರ್ಗೆ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡರು. ಮಳೆಯ ಪ್ರಮಾಣ ಕಡಿಮೆಯಾಗಿರುವುದೇ ಕುಡಿಯುವ ನೀರಿನ ಸಮಸ್ಯೆಗೆ ಕಾರಣ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವ ಪ್ರಿಯಾಂಕ್ ಖರ್ಗೆ, ಕುಡಿಯುವ ನೀರು, ಸ್ಥಳೀಯ ಜಲಸಂಪನ್ಮೂಲಗಳನ್ನು ರಕ್ಷಣೆ ಮಾಡಲು ಮತ್ತು ಕೆಲವು ಜಿಲ್ಲೆಗಳಲ್ಲಿ ಎದುರಾಗುವ ಕುಡಿಯುವ ನೀರಿನ ಪರಿಸ್ಥಿತಿಯ ಜೊತೆ ಬರ ಪರಿಸ್ಥಿತಿಯನ್ನು ಎದುರಿಸಲು, ಕಂದಾಯ ಇಲಾಖೆಯ ಸಹಕಾರದೊಂದಿದೆ ಎರಡು ತಿಂಗಳ ಆಕಸ್ಮಿಕ ಯೋಜನೆ ಸಿದ್ಧಪಡಿಸಲು ಸೂಚನೆ ನೀಡಿದ್ದಾರೆ.
ಒಂದು ದಶಕದಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿತ
ರಾಜ್ಯದ 16 ಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ಅದರಲ್ಲೂ ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟದಲ್ಲಿ ಕುಸಿತ ಕಂಡಿರುವುದು ಭಾರಿ ಆತಂಕಕ್ಕೆ ಕಾರಣವಾಗಿದೆ.
"ರಾಜ್ಯದ 99 ತಾಲ್ಲೂಕುಗಳ 501 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸದ್ಯ ಪರಿಸ್ಥಿತಿ ಸುಧಾರಿಸಿದೆ. ಅಲ್ಲಿ ಎರಡು ದಿನಗಳಿಂದ ಮಳೆಯಾಗುತ್ತಿದೆ ಎಂದು ಹೇಳಿದರು. ರಾಜ್ಯದ ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಶೇಕಡಾ 68-80 ರಷ್ಟು ಮಳೆ ಕೊರತೆ ಉಂಟಾಗಿದೆ. ಒಟ್ಟು 27 ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ ಎಂದು ಮಾಹಿತಿ ನೀಡಿದರು.
24 ಜಿಲ್ಲೆಗಳ 424 ಗ್ರಾಮಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಿದ್ದು, ನೀರು ಪೂರೈಕೆ ಮಾಡಲು 365 ಟ್ಯಾಂಕರ್ ಗಳನ್ನು ನಿಯೋಜಿಸಲಾಗಿದೆ. 357 ಗ್ರಾಮಗಳಲ್ಲಿ 431 ಖಾಸಗಿ ಬೋರ್‌ವೆಲ್ ಬಾಡಿಗೆ ಪಡೆದುಕೊಂಡಿದ್ದು, ಅವುಗಳ ಮೂಲಕ ನೀರು ಪೂರೈಕೆ ಮಾಡುತ್ತಿದ್ದೇವೆ ಎಂದು ಹೇಳಿದರು.
50 ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಮಳೆ ಪ್ರಮಾಣ ಇಷ್ಟು ಕಡಿಮೆಯಾಗಿದೆ. ಆದರೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವ ಕಾರಣ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಸುಧಾರಣೆಯಾಗುವ ವಿಶ್ವಾಸವಿದೆ ಎಂದು ಸಚಿವರು ಹೇಳಿದ್ದಾರೆ.
ಕೃಷ್ಣರಾಜ ಸಾಗರ (ಕೆಆರ್ ಎಸ್) ಡ್ಯಾಂನಲ್ಲಿ ಕೂಡ ನೀರು ಕಡಿಮೆಯಾಗಿದ್ದು ಬೆಂಗಳೂರು ನಗರಕ್ಕೂ ನೀರಿನ ಸಮಸ್ಯೆ ಎದುರಾಗುವ ಆತಂಕ ಎದುರಾಗಿದೆ. ಆಲಮಟ್ಟಿ, ಭದ್ರಾ, ಲಿಂಗನಮಕ್ಕಿ ಸೇರಿದಂತೆ ರಾಜ್ಯದಲ್ಲಿರುವ ಹಲವರು ಜಲಾಶಯಗಳಲ್ಲಿ ನೀರಿನ ಪ್ರಮಾಣ ತೀವ್ರ ಕುಸಿತ ಕಂಡಿದೆ.












Click it and Unblock the Notifications