Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಏರಿಕೆಯ ಬೆನ್ನಲ್ಲೇ ಈಗ ಹವಾಮಾನ ಇಲಾಖೆಯು ಮಳೆಯ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಯಾವ ಜಿಲ್ಲೆಗಳಲ್ಲಿ ಮಳೆ?
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹವಾಮಾನ ವೈಪರಿತ್ಯ ಉಂಟಾಗುವ ಸಾಧ್ಯತೆಯಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಹಾಸನ ಮತ್ತು ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಮುನ್ಸೂಚನೆ ಇರುವ ಜಿಲ್ಲೆಗಳಲ್ಲಿ ಗಾಳಿಯ ವೇಗ ಹೆಚ್ಚಿರುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸುವುದು ಅಗತ್ಯ.
ಮಳೆಯ ಸಮಯದಲ್ಲಿ ಸಿಡಿಲು ಮತ್ತು ಗುಡುಗಿನ ಅಬ್ಬರವಿರುವ ಸಾಧ್ಯತೆ ಇರುವುದರಿಂದ ಮರದ ಕೆಳಗೆ ಅಥವಾ ತೆರೆದ ಪ್ರದೇಶಗಳಲ್ಲಿ ನಿಲ್ಲದಂತೆ ಸೂಚಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿರುವವರು ಮತ್ತು ವಾಹನ ಸವಾರರು ಮಳೆಯ ಮುನ್ಸೂಚನೆಯನ್ನು ಗಮನದಲ್ಲಿಟ್ಟುಕೊಂಡು ಜಾಗರೂಕರಾಗಿರಲು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಹವಾಮಾನದಲ್ಲಿ ಏರುಪೇರು ಮುಂದುವರಿದಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಲ ಧಗೆ ಹೆಚ್ಚಾಗಿದ್ದರೆ, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾದ ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ಒಣ ಹವೆ ಇತ್ತು. ರಾಜ್ಯದ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ 3 ಸೆಂ.ಮೀ ಮಳೆಯಾಗಿದೆ.
ಬೀದರ್‌ನಲ್ಲಿ ಗರಿಷ್ಠ ತಾಪಮಾನ
ಉತ್ತರ ಕರ್ನಾಟಕದಲ್ಲಿ ಸೂರ್ಯನ ಅಬ್ಬರ ಜೋರಾಗಿದ್ದು, ಬೀದರ್‌ನಲ್ಲಿ 43.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಇದು ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನವಾಗಿದೆ. ರಾಜ್ಯದಾದ್ಯಂತ ಗರಿಷ್ಠ ತಾಪಮಾನವು 33-43.6 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ಕಂಡುಬಂದಿದೆ. ಕಾರವಾರದಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಗದಗ ಮತ್ತು ಬೀದರ್‌ನಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿದೆ. ಬೀದರ್‌ನಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಬಹಳಷ್ಟು ಹೆಚ್ಚಾಗಿರುವುದು ಕಂಡುಬಂದಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಸಾಮಾನ್ಯ ತಾಪಮಾನ ದಾಖಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳೇನೂ ಕಂಡುಬಂದಿಲ್ಲ.
ಹವಾಮಾನ ಇಲಾಖೆಯ ವಿಶ್ಲೇಷಣೆಯ ಪ್ರಕಾರ, ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ವಿದರ್ಭದಿಂದ ತೆಲಂಗಾಣ, ರಾಯಲಸೀಮಾ ಮತ್ತು ಒಳ ತಮಿಳುನಾಡು ಮಾರ್ಗವಾಗಿ ಕೊಮೊರಿನ್ ಪ್ರದೇಶದವರೆಗೆ ಉತ್ತರ-ದಕ್ಷಿಣದ ಗಾಳಿಯ ಒತ್ತಡದ ಸುಳಿ ಕಂಡುಬಂದಿದೆ. ಇದರ ಪರಿಣಾಮವಾಗಿ ರಾಜ್ಯದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುತ್ತಿದ್ದರೆ, ಇನ್ನು ಕೆಲವು ಕಡೆ ತಾಪಮಾನ ಏರಿಕೆಯಾಗುತ್ತಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಹವಾಮಾನ ಬದಲಾವಣೆಯಾಗುವ ಮುನ್ಸೂಚನೆ ಇದೆ. ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ನಗರದ ಕೆಲವು ಭಾಗಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ. ಗರಿಷ್ಠ ತಾಪಮಾನವು 35 ಡಿಗ್ರಿ ಮತ್ತು ಕನಿಷ್ಠ ತಾಪಮಾನವು 21 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ.












Click it and Unblock the Notifications