Get Updates
Get notified of breaking news, exclusive insights, and must-see stories!

Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ನೀಡಿದೆ. ಈ ವಾರವಿಡೀ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಮಾರ್ಚ್‌ 17 ಹಾಗೂ 18ರಂದು ರಾಜಧಾನಿ ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಬೀದರ್ ಜಿಲ್ಲೆಯಲ್ಲಿ ಗರಿಷ್ಠ 4 ಸೆಂ.ಮೀ ಮಳೆ ದಾಖಲಾಗಿದೆ. ಉಳಿದಂತೆ ಬಾಗಲಕೋಟೆಯ ಇಳಕಲ್ ಹಾಗೂ ಚಿಕ್ಕಮಗಳೂರಿನ ಕಳಸದಲ್ಲಿ ತಲಾ 2 ಸೆಂ.ಮೀ, ಕೊಡಗಿನ ಭಾಗಮಂಡಲ ಮತ್ತು ಉತ್ತರ ಕನ್ನಡದ ಮುಂಡಗೋಡಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ ಸೇರಿದಂತೆ ವಿವಿಧೆಡೆ ತುಂತುರು ಮಳೆಯಾಗಿದೆ.

Karnataka Weather

ಯಾವ ಜಿಲ್ಲೆಗಳಲ್ಲಿ ಮಳೆ?

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಸಮಯದಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಂಭವವಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಜಿಲ್ಲೆಯ ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಇಲ್ಲೂ ಸಹ 30-40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನ ಇರಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಪಮಾನದ ವಿಚಾರವಾಗಿ ನೋಡುವುದಾದರೆ, ಕಲಬುರಗಿಯಲ್ಲಿ ರಾಜ್ಯದ ಗರಿಷ್ಠ 38.6 ಡಿಗ್ರಿ ತಾಪಮಾನ ದಾಖಲಾಗಿದ್ದರೆ, ದಾವಣಗೆರೆಯಲ್ಲಿ ಕನಿಷ್ಠ 18 ಡಿಗ್ರಿ ತಾಪಮಾನ ದಾಖಲಾಗಿದೆ. ಮಳೆ ಮತ್ತು ಗಾಳಿಯ ಮುನ್ಸೂಚನೆ ಇರುವ ಜಿಲ್ಲೆಗಳಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಕೋರಲಾಗಿದೆ.

ತಾಪಮಾನ ಏರಿಕೆ

ರಾಜ್ಯದ ಹವಾಮಾನದಲ್ಲಿ ಪ್ರಮುಖ ಏರಿಳಿತಗಳು ಕಂಡುಬರುತ್ತಿದ್ದು, ಕರಾವಳಿ ಕರ್ನಾಟಕದ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3.0 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಳವಾಗಿದೆ. ಇದಕ್ಕೆ ವ್ಯತಿರಿಕ್ತವಾಗಿ, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1.5 ಡಿಗ್ರಿ ಸೆಲ್ಸಿಯಸ್‌ವರೆಗೆ ಕುಸಿತ ಕಂಡಿದೆ. ಉಳಿದ ಪ್ರದೇಶಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯ ಸ್ಥಿತಿಯಲ್ಲಿದೆ. ಮಳೆಯ ಮುನ್ಸೂಚನೆಯ ನಡುವೆಯೇ ತಾಪಮಾನದ ಈ ವ್ಯತ್ಯಯ ಕಂಡುಬಂದಿದೆ.

ಕನಿಷ್ಠ ತಾಪಮಾನದ ವಿಚಾರಕ್ಕೆ ಬಂದರೆ, ಉತ್ತರ ಒಳನಾಡಿನ ಹಲವೆಡೆ ಹಾಗೂ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1.6-3.0 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗಿದೆ. ಆದರೆ, ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತಲೂ ಗಣನೀಯವಾಗಿ ಅಂದರೆ -3.1-5.0 ಡಿಗ್ರಿ ಸೆಲ್ಸಿಯಸ್‌ವರೆಗೆ ಇಳಿಕೆಯಾಗಿದ್ದು, ಚಳಿಯ ವಾತಾವರಣ ಕಂಡುಬಂದಿದೆ. ಉತ್ತರ ಒಳನಾಡಿನಲ್ಲೂ ಕೆಲವೆಡೆ ಸಾಮಾನ್ಯಕ್ಕಿಂತ 3.0 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಇಳಿಕೆಯಾಗಿದೆ. ಉಳಿದಂತೆ ರಾಜ್ಯದ ಇತರ ಭಾಗಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯ ಸ್ಥಿತಿಯಲ್ಲಿದೆ.

ಕರಾವಳಿಯ ಕಾರವಾರದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಿದ್ದರೆ, ಮಂಡ್ಯದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ಭಾರಿ ಬದಲಾವಣೆ ಕಂಡುಬಂದಿಲ್ಲ. ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 3-5 ಡಿಗ್ರಿ ಸೆಲ್ಸಿಯಸ್‌ವರೆಗೆ ಕುಸಿತ ಕಂಡಿರುವುದು ವಿಶೇಷ.

ಮಹಾರಾಷ್ಟ್ರದ ಮರಾಠವಾಡದಿಂದ ಕರ್ನಾಟಕದ ಒಳನಾಡಿನ ಮೂಲಕ ಹಾದು ತಮಿಳುನಾಡಿನವರೆಗೆ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಟ್ರಫ್‌ ನಿರ್ಮಾಣವಾಗಿದೆ. ಆಗ್ನೇಯ ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪದ ಸುತ್ತಮುತ್ತಲ ಪ್ರದೇಶದಲ್ಲಿ ಸಮುದ್ರ ಮಟ್ಟದಿಂದ 3.1 ಕಿ.ಮೀ ನಿಂದ 5.8 ಕಿ.ಮೀ ಎತ್ತರದಲ್ಲಿ ಮೇಲ್ಮೈ ಸುಳಿ ಗಾಳಿ ಸಕ್ರಿಯವಾಗಿದೆ. ನೈಋತ್ಯ ಬಂಗಾಳ ಕೊಲ್ಲಿಯಿಂದ ಮನ್ನಾರ್ ಕೊಲ್ಲಿಯವರೆಗೆ ಮತ್ತೊಂದು ಟ್ರಫ್‌ ಸಕ್ರಿಯವಾಗಿದ್ದು, ಇದು ದಕ್ಷಿಣ ಭಾರತದ ಹವಾಮಾನದ ಮೇಲೆ ಪರಿಣಾಮ ಬೀರುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+