Karnataka Weather: ಮಾಯವಾಯ್ತು ಮಳೆ.. ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಚಳಿ ಮುನ್ಸೂಚನೆ
Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಆವರಿಸಿಬಿಟ್ಟಿದೆ. ಈ ನಡುವೆಯೆ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಇಂದು (ಡಿಸೆಂಬರ್ 7) ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವೇ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಳದೆಡೆ ಬೆಳಗ್ಗೆ ಹಾಗೂ ಸಂಜೆ ವೇಳೆ ಮಂಜಿನ ಜೊತೆ ಚಳಿ ಇರಲಿದ್ದು, ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್ 7) ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, ಮಂಜಿನ ಜೊತೆ ಭೀಕರ ಚಳಿ ಮುಂದುವರೆದಿದೆ. ಇನ್ನೂ ನಗರದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ತಿಳಿಸಿದೆ. ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ತಾಪಮಾನ 11 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಬಹುತೇಕ ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಮೋಡ ಕವಿದ ವಾತಾವರಣದ ಜೊತೆ ಮಂಜು ಆವರಿಸಿದೆ. ಈ ನಡುವೆಯೇ ಭಾನುವಾರ ದಕ್ಷಿಣ ಒಳನಾಡಿನ ಕೆಲವೇ ಭಾಗಗಳಲ್ಲಿ ತುಂತುತು ಮಳೆ ಆಗಲಿದ್ದು, ಉಳಿದ ಭಾಗಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಾಮರಾಜನಗರ, ಚಿಕ್ಕಮಗಳೂರಿನಲ್ಲಿ ಅಲ್ಲಲ್ಲಿ ಪ್ರತ್ಯೇಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಿಗೆ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ. ಬದಲಿಗೆ ಬೆಳಗ್ಗೆ ಹಾಗೂ ಸಂಜೆ ವೇಳೆ ಮೋಡ ಕವಿದ ವಾತಾವರಣ ಇರಲಿದ್ದು, ಒಳಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.
ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಭಾಗಗಳಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರ ಇದ್ದು, ಇಂದು ಕೂಡ ಇದೇ ರೀತಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ.
ಅಲ್ಲದೆ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಕೂಡ ಒಣಹವೆ ವಾತಾವರಣ ಇರಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಭಾಗಗಳಲ್ಲೂ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.
ಈಗಾಗಲೇ ದಿತ್ವಾ ಚಂಡಮಾರುತ ಪರಿಣಾಮ ಭೀಕರ ಚಳಿ ನಡುವೆಯೂ ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಿದೆ. ಉಳಿದ ಜಿಲ್ಲೆಗಳಲ್ಲಿ ಒಳಹವೆ ಮುಂದುವರೆದಿದೆ. ಬೆಳಗ್ಗೆ ಹಾಗೂ ಸಂಜೆ ವೇಳೆ ಮಂಜು ಮುಸುಕಿದ ವಾತಾವರಣ ಚಳಿ ಮುಂದುವರೆದಿದೆ. ಹಲವು ಭಾಗಗಳಲ್ಲಿ ಭೀಕರ ಚಳಿಗೆ ಜನರು ತತ್ತರಿಸಿ ಹೋಗಿದ್ದಾರೆ.
ಅದರಲ್ಲೂ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಭೀಕರ ಚಳಿ ವಾತಾವರಣ ಮುಂದುವರೆದಿದ್ದು, ಇಲ್ಲಿನ ಜನರು ಕೂಡ ಬೆಳಗ್ಗೆ 9 ಗಂಟೆಯಾದರೂ ಸಹ ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿ ಮುಂದುವರೆದಿದೆ. ಮುಂದಿನ ದಿನಗಳಲ್ಲಿ ಚಳಿ ಪ್ರಮಾಣ ಮತ್ತಷ್ಟು ಹೆಚ್ಚಳ ಆಗುವ ಮುನ್ಸೂಚನೆಯನ್ನೂ ಕೂಡ ಹವಾಮಾನ ಇಲಾಖೆ ನೀಡಿದೆ.












Click it and Unblock the Notifications