ರಾಜ್ಯದಲ್ಲಿ ಮಳೆ ಕೊರತೆ: ಕರಾವಳಿ, ದಕ್ಷಿಣ ಒಳನಾಡಿಗೆ ಸಾಧಾರಣ ಮಳೆ, ಬೆಂಗಳೂರಲ್ಲಿ ಹೇಗಿರಲಿದೆ ಹವಾಮಾನ?

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಸಾಕಷ್ಟು ಕಡಿಮೆಗೊಂಡಿದೆ. ಸೆಪ್ಟೆಂಬರ್ ಆರಂಭದಿಂದಲೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗಿದ್ದು, ಮಳೆಯ ಕೊರತೆ ಎದ್ದು ಕಾಣುತ್ತಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ಸೋಮವಾರ (ಸೆಪ್ಟೆಂಬರ್ 7) ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಸುಡು ಬಿಸಿಲು ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

Karnataka Weather Forcast Sept 7 Dry Spell Hits State As Monsoon Weakens Coastal Rains Expected

ಹವಾಮಾನ ಇಲಾಖೆಯ ಮಾಹಿತಿಯಂತೆ, ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೂ, ಯಾವುದೇ ಜಿಲ್ಲೆಗೂ ರೆಡ್ ಅಥವಾ ಆರೆಂಜ್ ಅಲರ್ಟ್ ಘೋಷಿಸಲಾಗಿಲ್ಲ.

ಸಮುದ್ರದಲ್ಲಿ ಗಂಟೆಗೆ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ದಕ್ಷಿಣ ಮತ್ತು ಉತ್ತರ ಒಳನಾಡಿನ ಹವಾಮಾನ

ದಕ್ಷಿಣ ಒಳನಾಡಿನ ಮೈಸೂರು, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ. ಅದೇ ರೀತಿ ಮಲೆನಾಡು ಭಾಗದ ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಿರಲಿದ್ದು, ಇದರ ಜೊತೆಗೆ ಬಲವಾದ ಗಾಳಿ ಬೀಸಲಿದೆ.

ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಯಾವುದೇ ಗಮನಾರ್ಹ ಮಳೆಯ ಮುನ್ಸೂಚನೆ ಇಲ್ಲ. ಈ ಜಿಲ್ಲೆಗಳಲ್ಲಿ ದಿನದ ಹೊತ್ತಿನಲ್ಲಿ ಸುಡು ಬಿಸಿಲು ಇರಲಿದ್ದು, ಆಗಾಗ ಮೋಡ ಕವಿದ ವಾತಾವರಣ ಕಂಡುಬಂದರೂ ಮಳೆಯಾಗುವ ಸಾಧ್ಯತೆ ತೀರಾ ವಿರಳವಾಗಿದೆ. ಆದಾಗ್ಯೂ, ಸಂಜೆಯ ವೇಳೆಗೆ ಬಿರುಗಾಳಿ ಬೀಸುವ ಎಚ್ಚರಿಕೆಯನ್ನು ನೀಡಲಾಗಿದೆ.

ಬೆಂಗಳೂರು ಹವಾಮಾನ ವರದಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ಮುಂಗಾರು ತುಂಬ ಕಡಿಮೆಯಾಗಿದೆ. ಸೆಪ್ಟೆಂಬರ್ 7ರಂದು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಸಾಧಾರಣ ತುಂತುರು ಮಳೆಯಾಗುವ ಸಾಧ್ಯತೆಯಿದೆ.

ಹವಾಮಾನ ಇಲಾಖೆಯ ವರದಿ ಪ್ರಕಾರ, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ವರೆಗೆ ತಲುಪಲಿದ್ದು, ಇದು ಸೆಪ್ಟೆಂಬರ್ ತಿಂಗಳ ಆರಂಭಕ್ಕೆ ಹೋಲಿಸಿದರೆ ಸಾಮಾನ್ಯಕ್ಕಿಂತ ಕೊಂಚ ಹೆಚ್ಚಾಗಿದೆ. ರಾತ್ರಿಯ ವೇಳೆಗೆ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಲಿದ್ದು, ತಂಪಾದ ವಾತಾವರಣ ಇರಲಿದೆ.

ನಗರದಲ್ಲಿ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವುದರಿಂದ ವಾಹನ ಸವಾರರು ಮತ್ತು ಪಾದಚಾರಿಗಳು ಎಚ್ಚರ ವಹಿಸುವುದು ಸೂಕ್ತ.

ಮುಂಗಾರು ಮಳೆ ದುರ್ಬಲಗೊಂಡಿರುವುದು ಕೃಷಿ ಕ್ಷೇತ್ರದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಈಗಾಗಲೇ ಬಿತ್ತನೆ ಮಾಡಿರುವ ಬೆಳೆಗಳಿಗೆ ನೀರಿನ ಕೊರತೆ ಎದುರಾಗಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ. ಪ್ರಮುಖ ಜಲಾಶಯಗಳ ನೀರಿನ ಮಟ್ಟವೂ ನಿರೀಕ್ಷಿತ ಮಟ್ಟದಲ್ಲಿ ಏರಿಕೆಯಾಗುತ್ತಿಲ್ಲ.

ಮುಂದಿನ ದಿನಗಳಲ್ಲಿ ವರುಣ ಕೃಪೆ ತೋರದಿದ್ದರೆ ಕೃಷಿ ಚಟುವಟಿಕೆಗಳು ಹಾಗೂ ಕುಡಿಯುವ ನೀರಿನ ಪೂರೈಕೆಗೆ ತೀವ್ರ ಹಿನ್ನಡೆಯಾಗುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+