Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ
Karnataka Weather: ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಹಾಗೆಯೇ ಹಲವು ದಿನಗಳವರೆಗೆ ಈ ಜಿಲ್ಲೆಗಳಲ್ಲಿ ಭೀಕರ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜನವರಿ 08) ಬೆಳಗ್ಗೆ 09 ಗಂಟೆಯಾದರೂ ಮಂಜು ಮುಚ್ಚಿದ ವಾತಾವರಣದ ಜೊತೆ ಚಳಿಯ ಪ್ರಮಾಣ ಇದೆ. 10 ಗಂಟೆಯಾದರೂ ಚಳಿ ಮುಂದುವರೆಯುತ್ತಿರುವ ಹಿನ್ನೆಲೆ ಜನರು ಮನೆಯಿಂದ ಹೊರಗಡೆ ಬರಲು ಭಯ ಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಮಧ್ಯಾಹ್ನ ಬಿಸಿಲಿನ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಅದೇ ಆಡಿದ್ದೇ ಆಟ ಎಂಬಂತೆ ಚಳಿ ಮುಂದುವರೆಯಲಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಚಳಿಯ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಇನ್ನು ಮುಂದಿನ 2 ದಿನಗಳಲ್ಲಿ ಬೀದರ್, ವಿಜಯಪುರ, ಧಾರವಾಡ, ಹಾವೇರಿ, ರಾಯಚೂರು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಪ್ರಮಾಣದಲ್ಲಿ ಮತ್ತಷ್ಟು ಇಳಿಕೆಯಾಗಲಿದ್ದು, ಚಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಆಗಿಲ್ಲ. ಇನ್ನು ಮುಂದಿನ ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಮತ್ತೆ ಏರಿಕೆ ಆಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೆಲವೆಡೆ ದಟ್ಟ ಮಂಜು ಕವಿದ ವಾತಾವರಣ ಇರುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಕಡಿಮೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ತಿಳಿಸಿದೆ.
ವಿಜಯಪುರದಲ್ಲಿ 10.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ತಾಪಮಾನ ದಾಖಲಾಗಿದೆ. ಎಚ್ಎಎಲ್ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ಬೆಂಗಳೂರು ನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ದಾಖಲಾಗಿದೆ
ಕಾರವಾರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರಿನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications