Karnataka Rain: ಕರ್ನಾಟಕದಲ್ಲಿ ಮುಂಗಾರು ಚುರುಕು: ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆ
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ಬಹುತೇಕ ಭಾಗಗಳು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆ ಮುನ್ಸೂಚನೆ ನೀಡಲಾಗಿದೆ. ಕೊಡಗಿನ ಭಾಗಮಂಡಲದಲ್ಲಿ ಈಗಾಗಲೇ 15 ಸೆಂ.ಮೀ ಮಳೆ ದಾಖಲಾಗಿದ್ದು, ರಾಜ್ಯದ ಹಲವೆಡೆ ವರುಣನ ಆರ್ಭಟ ಮುಂದುವರಿಯುವ ನಿರೀಕ್ಷೆಯಿದೆ.
ಕರ್ನಾಟಕದಲ್ಲಿ ಮತ್ತೆ ಮುಂಗಾರು ಮತ್ತೆ ಜೋರಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರದ ಮುನ್ಸೂಚನೆಯ ಪ್ರಕಾರ, ಆಗಸ್ಟ್ 26 ಮತ್ತು 27ರಂದು ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ.

ಕರಾವಳಿ ಕರ್ನಾಟಕದಲ್ಲಿ ಮಳೆ ಮುಂದುವರೆದಿದ್ದು, ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 27ರಂದು ಕೂಡ ಇದೇ ರೀತಿಯ ಹವಾಮಾನ ಮುಂದುವರಿಯುವ ನಿರೀಕ್ಷೆಯಿದೆ. ಕರಾವಳಿ ಕರ್ನಾಟಕದಲ್ಲಿ ಮುಂಗಾರು ಸಾಮಾನ್ಯವಾಗಿದ್ದು, ಹಲವು ಪ್ರದೇಶಗಳಲ್ಲಿ ಈಗಾಗಲೇ ಮಳೆಯಾಗಿದೆ. ಮುಂದಿನ ಎರಡು ದಿನಗಳಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 15 ಸೆಂ.ಮೀ ಮಳೆ ದಾಖಲಾಗಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.ಉತ್ತರ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆ
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರ ಮಳೆಯ ಮುನ್ಸೂಚನೆ ನೀಡಲಾಗಿದೆ.
ಆಗಸ್ಟ್ 27ರಂದು ಕೂಡ ಉತ್ತರ ಒಳನಾಡಿನ ಈ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಈ ಭಾಗದಲ್ಲಿ ಮುಂಗಾರು ತುಸು ದುರ್ಬಲವಾಗಿದ್ದರೂ, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಆಗಸ್ಟ್ 26ರಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ.
ಆಗಸ್ಟ್ 27ರಂದು ಕೂಡ ದಕ್ಷಿಣ ಒಳನಾಡಿನ ಬಹುತೇಕ ಇದೇ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಮುಂಗಾರು ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಕೆಲವು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯನ್ನೂ ಹವಾಮಾನ ಇಲಾಖೆ ಸೂಚಿಸಿದೆ.
ಇನ್ನೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಮಳೆ ಮುನ್ಸೂಚನೆ ಇರುವ ಜಿಲ್ಲೆಗಳ ಜನರು ಸ್ಥಳೀಯ ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.


Click it and Unblock the Notifications
