Karnataka Weather: ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ
ಹಲವು ದಿನಗಳಿಂದ ರಾಜ್ಯದಲ್ಲಿ ಬಿಡುವು ನೀಡಿದ್ದ ಮಳೆ ಮತ್ತೆ ಚುರುಕುಗೊಂಡಿದೆ. ಶನಿವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಮುಂಜಾನೆಯಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಸಂಜೆ ವೇಳೆಗೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿಜಾಪುರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಗುಲ್ಬರ್ಗ, ರಾಯಚೂರು, ಉಡುಪಿ, ಉತ್ತರ ಕನ್ನಡ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜೊತೆಗೆ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆಯಲ್ಲಿ ತಿಳಿಸಿದೆ.

ಜುಲೈ ತಿಂಗಳಲ್ಲಿ ಉತ್ತಮ ಮಳೆಯಾದ ಬಳಿಕ, ಕಳೆದ 20 ದಿನಗಳಿಂದ ಮಳೆ ಸಂಪೂರ್ಣವಾಗಿ ಕೈಕೊಟ್ಟಿತ್ತು. ಆಗಸ್ಟ್ 20 ರ ಬಳಿಕ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು, ಅದಕ್ಕೂ ಮುನ್ನವೇ ರಾಜ್ಯದಲ್ಲಿ ಮಳೆಯಾಗುತ್ತಿದೆ.
ರಾಜ್ಯದ ಜಿಲ್ಲೆಗಳ ಮಳೆ ಮುನ್ಸೂಚನೆ
ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಮನಗರ, ಗದಗ, ಧಾರವಾಡ, ಹಾಸನ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಮೈಸೂರು, ಕಲಬುರಗಿ, ವಿಜಯಪುರ, ಬೆಂಗಳೂರು ನಗರ, ಹಾವೇರಿ, ತುಮಕೂರು, ಕೊಪ್ಪಳ, ಯಾದಗಿರಿ, ರಾಯಚೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗಲಿದೆ.
ಬಳ್ಳಾರಿ, ಮಂಡ್ಯ, ಕೋಲಾರ, ಬೀದರ್, ಬಾಗಲಕೋಟೆ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಕೂಡ ಶನಿವಾರ ಸಂಜೆ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಮೋಡ ಕವಿದ ವಾತಾವರಣ ಇದ್ದು, ರಾತ್ರಿ ಚದುರಿದಂತೆ ಹಲವು ಸ್ಥಳಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಮುನ್ಸೂಚನೆಯಲ್ಲಿ ತಿಳಿಸಿದೆ.
ಆಗಸ್ಟ್ 19ರಂದು ಬೆಳಗ್ಗೆ 8.30ಕ್ಕೆ ಕೊನೆಯಾದಂತೆ ರಾಮನಗರ ಜಿಲ್ಲೆಯ ಮೈಲನಾಯಕನಹಳ್ಳಿಯಲ್ಲಿ 53 ಮಿಮೀ ಮಳೆಯಾಗಿದ್ದು ಉತ್ತಮ ಮಳೆಯಾದ ಪ್ರದೇಶ ಎನಿಸಿಕೊಂಡಿದೆ.











Click it and Unblock the Notifications