Karnataka Weather: ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ; ಕರಾವಳಿ, ಉತ್ತರ ಒಳನಾಡಿಗೆ ಭಾರಿ ಮಳೆ ಮುನ್ಸೂಚನೆ!
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯ ಸಾಧ್ಯತೆ ಇದೆ. ಕೆಲವೆಡೆ ಬಲವಾದ ಮೇಲ್ಮೈ ಗಾಳಿಯೂ ಬೀಸುವ ಮುನ್ಸೂಚನೆ ನೀಡಲಾಗಿದೆ.
ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಇದರೊಂದಿಗೆ ಗಂಟೆಗೆ 30ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆ ಇದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಕರಾವಳಿ ಕರ್ನಾಟಕದಲ್ಲಿ ಇಂದು ಗುಡುಗು-ಮಿಂಚು ಹಾಗೂ ಬಲವಾದ ಗಾಳಿಯ ಎಚ್ಚರಿಕೆ ಇದ್ದು, ಆಗಸ್ಟ್ 23 ಮತ್ತು 24ರಂದು ಭಾರಿ ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲೂ ಇದೇ ಅವಧಿಯಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಇಂದು 30ರಿಂದ 40 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಸಮುದ್ರದಲ್ಲಿ ಗಾಳಿ ವೇಗ ಹೆಚ್ಚಿರುವ ಹಿನ್ನೆಲೆಯಲ್ಲಿ ಮೀನುಗಾರರು ಕಡಲಿಗೆ ಇಳಿಯದಂತೆ ಸೂಚಿಸಲಾಗಿದೆ. ವಿಜಯಪುರ, ಕಲಬುರಗಿ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಜೊತೆಗೆ ಮಳೆಯಾಗುವ ನಿರೀಕ್ಷೆಯಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆ ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.
ಇನ್ನೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಜಿಟಿಜಿಟಿ ಮಳೆಯಾಗುವ ಸಾಧ್ಯತೆ ಇದೆ. ಇತ್ತ ಮಲೆನಾಡು ಭಾಗದ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ತಂಪಾದ ವಾತಾವರಣ ಮುಂದುವರಿಯಲಿದ್ದು, ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬಲವಾದ ಗಾಳಿಯ ಹಿನ್ನೆಲೆಯಲ್ಲಿ ಸಾರ್ವಜನಿಕರು, ವಾಹನ ಸವಾರರು ಹಾಗೂ ಪ್ರಯಾಣಿಕರು ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.
ಒಟ್ಟಾರೆ ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಚುರುಕಾಗಿದ್ದು, ಬೆಂಗಳೂರು ಸೇರಿದಂತೆ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಮುಂದುವರಿದಿದೆ. ಹಲವು ಜಿಲ್ಲೆಗಳಲ್ಲಿ ಮಳೆ ಹಾಗೂ ಬಲವಾದ ಗಾಳಿಯ ಸಾಧ್ಯತೆ ಇರುವುದರಿಂದ ಜನರು ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಗಳನ್ನು ಪಾಲಿಸುವುದು ಅಗತ್ಯವಾಗಿದೆ.


Click it and Unblock the Notifications
