Karnataka Weather: ವಾಯುಭಾರ ಕುಸಿತ, ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ: ಐಎಂಡಿ
Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮತ್ತೆ ಚುರುಕು ಪಡೆದಿದೆ. ಇಂದು (ಜುಲೈ 19) ರಾಜಧಾನಿ ಬೆಂಗಳೂರು ಸೇರಿದಂತೆ ಈ ಭಾಗಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ (ಜುಲೈ 19) ಮೋಡ ಕವಿದ ವಾತಾವರಣ ಇದ್ದು, ಹಲವೆಡೆ ಮಳೆ ಮುಂದುವರೆದಿದೆ. ಈಗಾಗಲೇ ಶನಿವಾರ ನಗರದ ಹಲವೆಡೆ ವರುಣ ಆರ್ಭಟಿಸಿರುವ ಬಗ್ಗೆ ವರದಿಯಾಗಿದೆ. ಹಾಗೆಯೇ ಇಂದು ಕೂಡ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನ ತಾಪಮಾನದ ವಿವರ
ಬೆಂಗಳೂರಿನಲ್ಲಿ ಇಂದು (ಜುಲೈ 19) ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆಯೇ ನಗರದಲ್ಲಿಂದು ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.
ಎಲ್ಲೆಲ್ಲಿ ಮಳೆ?
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಜುಲೈ 19ರ ಭಾನುವಾರ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡು ಭಾಗದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮಳೆ ಬೀಳಲಿದೆ. ಮುಂದಿನ ಒಂದು ವಾರದವರೆಗೂ ಈ ಭಾಗಗಳಲ್ಲಿ ಸಾಧಾರಣ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಶನಿವಾರ ರಾಜ್ಯದ ಹಲವೆಡೆ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ ಎಂದು ತಿಳಿದುಬಂದಿದೆ.
ಜಲಾಶಯಗಳಿಗೆ ಜೀವಕಳೆ
ಶನಿವಾರ ಸುರಿದ ಮಳೆಗೆ ಹಲವೆಡೆ ಪ್ರಮುಖ ಜಲಾಶಯಗಳ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ರೈತರ ಮುಖದಲ್ಲಿ ಮಾಯವಾಗಿದ್ದ ಮಂದಹಾಸ ಮತ್ತೆ ಚಿಗುರೊಡೆದಂತಾಗಿದೆ. ಈಗಾಗಲೇ ಕೆಲವು ದಿನಗಳ ಹಿಂದೆ ಸುರಿದಿದ್ದ ಭಾರಿ ಮಳೆಯಿಂದಾಗಿ ಪ್ರಮುಖ ಜಲಾಶಯಗಳ ಒಳಹರಿವಿನ ಪ್ರಮಾಣ ಹೆಚ್ಚಾಗಿತ್ತು. ಮತ್ತೆ ತಗ್ಗಿದ್ದ ಮಳೆರಾಯನ ಆರ್ಭಟ ಇದೀಗ ಮುಂದುವರೆದಿದೆ.
ಎಲ್ ನಿನೊ ಎಫೆಕ್ಟ್‌ನಿಂದ ತಗ್ಗಿದ ಮುಂಗಾರು
ಆದರೂ ರಾಜ್ಯದಲ್ಲಿ ಈ ಬಾರಿ ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಮಳೆಯ ಪ್ರಮಾಣ ಭಾರಿ ಕುಸಿತ ಕಂಡಿದೆ. ಎಲ್ ನಿನೊ ಎಫೆಕ್ಟ್‌ನಿಂದ ಮುಂಗಾರು ಮತ್ತಷ್ಟು ಕ್ಷೀಣಿಸಿದೆ ಎಂದು ಹವಾಮಾನ ಇಲಾಖೆ ಇತ್ತೀಚೆಗಷ್ಟೇ ಮಾಹಿತಿ ಹೊರಹಾಕಿತ್ತು. ಈ ನಡುವೆಯೇ ಇದೀಗ ಹಲವೆಡೆ ಮಳೆ ಚುರುಕು ಪಡೆದಿದ್ದು, ರೈತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ.












Click it and Unblock the Notifications