Karnataka Rain: ಮುಂದಿನ ನಾಲ್ಕು ದಿನಗಳಲ್ಲಿ ಈ ಭಾಗಗಳಲ್ಲಿ ಭಾರಿ ಮಳೆ ಸಾಧ್ಯತೆ
ಕರ್ನಾಟಕ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಹಾರಾಷ್ಟ್ರದ ಪಶ್ಚಿಮ ಭಾಗದಿಂದ ರಾಜ್ಯದತ್ತ ಗಾಳಿ ಬೀಸುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಬಹುದು ಎಂದು ತಿಳಿಸಿದೆ.
ದಕ್ಷಿಣ ಒಳನಾಡಿನ ಭಾರಿ ಮಳೆಯಾಗುತ್ತದೆ ಎಂದು ಮುನ್ಸೂಚನೆ ನೀಡಲಾಗಿದೆ. ಏಪ್ರಿಲ್ 30 ರಂದು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಏಪ್ರಿಲ್ ಏಪ್ರಿಲ್ 29 ಮತ್ತು 30ರಂದು ಹೆಚ್ಚಿನ ಮಳೆ ನಿರೀಕ್ಷೆ ಮಾಡಲಾಗಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 30 ರಂದು ರಾಜಧಾನಿ ಬೆಂಗಳೂರು, ಕೋಲಾರ, ಹಾಸನ, ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 30-40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಿದ್ದು, ಗುಡುಗು-ಮಿಂಚು ಸಹಿತ ಮಳೆಯಾಗುವುದರಿಂದ ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.
ದೇಶದ ವಿವಿಧ ಭಾಗಗಳಲ್ಲಿ ಮಳೆ ಮುನ್ಸೂಚನೆ
ಮುಂದಿನ ಮೂರು ದಿನಗಳ ದೇಶದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಂಧ್ರ ಪ್ರದೇಶ, ಕೇರಳ, ತಮಿಳುನಾಡು, ಪುದುಚೆರಿ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಏಪ್ರಿಲ್ 29 ಮತ್ತು 30 ರಂದು ಲಕ್ಷದ್ವೀಪದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಏಪ್ರಿಲ್ 30ರವರೆಗೆ ತೆಲಂಗಾಣದ ಹಲವು ಭಾಗಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಧ್ಯಪ್ರದೇಶ, ಛತ್ತೀಸ್ ಗಢ, ಗುಜರಾತ್, ಮಹಾರಾಷ್ಟ್ರ ರಾಜ್ಯದ ವಿವಿಧ ಭಾಗಗಳಲ್ಲಿ ಕೂಡ ಹೆಚ್ಚಿನ ಮಳೆಯ ಮುನ್ಸೂಚನೆ ನೀಡಿದೆ. ವಿದರ್ಭ ಪ್ರದೇಶದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೂಡ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಗಂಗಾನದಿ ತೀರದಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.












Click it and Unblock the Notifications