Karnataka Weather: ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಮುನ್ಸೂಚನೆ
Karnataka Weather: ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಮುಂದುವರೆದಿದೆ. ಹಾಗೆಯೇ ಎರಡು ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಶಾಂತವಾಗಿದ್ದ ಮಳೆರಾಯನ ಆರ್ಭಟ ಮತ್ತೆ ಚುರುಕುಗೊಂಡಿದೆ. ಮುಂದಿನ ಎರಡು ದಿನ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎರಡು ದಿನ ಎಲ್ಲೆಲ್ಲಿ ಮಳೆ?
ಕರಾವಳಿ ಭಾಗದಲ್ಲಿ ವರುಣನ ಆರ್ಭಟ ತುಸು ಹೆಚ್ಚಿರಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಪೈಕಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ದಕ್ಷಿಣ ಒಳನಾಡಿನ ಹವಾಮಾನ ವರದಿ
ದಕ್ಷಿಣ ಒಳನಾಡಿನ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ತಿಳಿಸಿದೆ.
ಉತ್ತರ ಒಳನಾಡಿನಲ್ಲಿ ವಾತಾವರಣ ಹೇಗಿರಲಿದೆ?
ಇನ್ನೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದಂತೆ ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿರು ಬಿಸಿಲಿನ ವಾತಾವರಣ, ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮಳೆ ಕಡಿಮೆಯಾಗಲು ಕಾರಣವೇನು?
ಕರ್ನಾಟಕದಲ್ಲಿ ಮುಂಗಾರು ಮಳೆ ಕ್ಷೀಣಿಸಲು ಮತ್ತು ಹಲವು ಜಿಲ್ಲೆಗಳಲ್ಲಿ ಬಿಸಿಲ ವಾತಾವರಣ ಹೆಚ್ಚಾಗಲು ಪ್ರಮುಖ ಹವಾಮಾನ ಬದಲಾವಣೆಗಳೇ ಕಾರಣ ಎಂದು ತಿಳಿದುಬಂದಿದೆ. ಪ್ರಮುಖವಾಗಿ ಪೆಸಿಫಿಕ್ ಮಹಾಸಾಗರದಲ್ಲಿ ಸೃಷ್ಟಿಯಾಗಿರುವ ಬೃಹತ್ ಚಂಡಮಾರುತಗಳು ಹಾಗೂ ಉತ್ತರ ಭಾರತದಿಂದ ಬೀಸುತ್ತಿರುವ ಗಾಳಿಯ ದಿಕ್ಕು ಈ ಬಾರಿ ಮಳೆಯ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಾಯಿಸಿವೆ.
ಪೆಸಿಫಿಕ್ ಮಹಾಸಾಗರದಲ್ಲಿ ಪ್ರಬಲ ಚಂಡಮಾರುತಗಳು ರೂಪುಗೊಂಡಿದ್ದು, ಇವು ಬಂಗಾಳಕೊಲ್ಲಿಯಲ್ಲಿದ್ದ ಅಪಾರ ಪ್ರಮಾಣದ ತೇವಾಂಶಭರಿತ ಗಾಳಿ ಮತ್ತು ಮೋಡಗಳನ್ನು ಸೆಳೆದುಕೊಳ್ಳುತ್ತಿವೆ. ಪರಿಣಾಮ ದಕ್ಷಿಣ ಭಾರತ ಹಾಗೂ ಕರ್ನಾಟಕಕ್ಕೆ ತೇವಾಂಶದ ಕೊರತೆ ಎದುರಾಗಿದ್ದು, ಮುಂಗಾರು ಮಾರುತಗಳು ದುರ್ಬಲಗೊಂಡಿವೆ.
ಮುಂದುವರೆದ ಒಣಹವೆ, ತಗ್ಗಿದ ಮಳೆ
ಮತ್ತೊಂದೆಡೆ ಉತ್ತರ ಭಾರತದ ಕಡೆಯಿಂದ ಒಣ ಹಾಗೂ ಬಿಸಿಹವೆಯು ರಾಜ್ಯದ ಕಡೆಗೆ ವೇಗವಾಗಿ ನುಸುಳುತ್ತಿವೆ. ಈ ಒಣಹವೆಯು ವಾತಾವರಣದಲ್ಲಿರುವ ಸ್ವಲ್ಪಮಟ್ಟಿನ ತೇವಾಂಶವನ್ನೂ ಇಂಗಿಸಿ, ಮೋಡಗಟ್ಟದಂತೆ ತಡೆಯುತ್ತಿದೆ. ಇದರಿಂದಾಗಿ ರಾಜ್ಯದ ಹಲವು ಭಾಗಗಳಲ್ಲಿ ಮಳೆ ನಿಂತು, ಒಣಹವೆ ಮತ್ತು ತಾಪಮಾನ ಹೆಚ್ಚಾಗುತ್ತಿದೆ.
ಯಾವ ಜಿಲ್ಲೆಗಳ ಮೇಲೆ ಹೆಚ್ಚು ಪ್ರಭಾವ?
ವಿಶೇಷವಾಗಿ ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಯಾದಗಿರಿ ಹಾಗೂ ಕೊಪ್ಪಳ ಭಾಗಗಳಲ್ಲಿ ಈ ಒಣಹವೆ ಹೆಚ್ಚಾಗಿದ್ದು, ಗರಿಷ್ಠ ತಾಪಮಾನ ಏರಿಕೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿಯೂ ಮಳೆಯ ಪ್ರಮಾಣ ಗಣನೀಯವಾಗಿ ತಗ್ಗಿದ್ದು, ಅಲ್ಲಲ್ಲಿ ಮಳೆಯಾಗುತ್ತಿದೆ ಅಷ್ಟೆ.
ಹವಾಮಾನ ಇಲಾಖೆಯ ಪ್ರಕಾರ, ಪೆಸಿಫಿಕ್ ಭಾಗದಲ್ಲಿ ಚಂಡಮಾರುತಗಳ ಪ್ರಭಾವ ತಗ್ಗಿ, ಬಂಗಾಳಕೊಲ್ಲಿಯಲ್ಲಿ ಮತ್ತೆ ಹೊಸ ವಾಯುಭಾರ ಕುಸಿತವಾಗುವವರೆಗೆ ರಾಜ್ಯದಲ್ಲಿ ತೇವಾಂಶ ಕೊರತೆ ಮುಂದುವರಿಯಲಿದೆ. ಒಂದು ಬೇಳೆ ಚಂಡಮಾರುತ ಕುಸಿತ ಕಂಡರೆ ಮಾತ್ರ ಭಾರಿ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಒಟ್ಟಿನಲ್ಲಿ ಮಳೆಗಾಗಿ ಹಲವು ಜಿಲ್ಲೆಗಳ ಜನರು ಕಾತರದಿಂದ ಕಾದು ಕುಳಿತಿರುವುದಂತೂ ನಿಜ.


Click it and Unblock the Notifications
