ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು: ಹಲವು ಜಿಲ್ಲೆಗಳಲ್ಲಿ ಮಳೆ, ಯೆಲ್ಲೋ ಅಲರ್ಟ್ ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ಆಗಸ್ಟ್ 14ರಂದು ಹಾಗೂ ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಳೆಯೊಂದಿಗೆ ಕೆಲವೆಡೆ ಗಂಟೆಗೆ 30ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ಸಂದರ್ಭದಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಮುಂದಿನ ಕೆಲವು ದಿನಗಳೂ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಬಿಸಿಲು, ಮೋಡ ಹಾಗೂ ದಿನದ ವೇಳೆ ಅಲ್ಲಲ್ಲಿ ಎರಡು-ಮೂರು ಬಾರಿ ಸಾಮಾನ್ಯ ಮಳೆಯಾಗುವ ಮುನ್ಸೂಚನೆ ಇದೆ. ಸುಳ್ಯ ಹಾಗೂ ಘಟ್ಟದ ಕೆಳಭಾಗಗಳಲ್ಲಿ ಮಧ್ಯಾಹ್ನದ ನಂತರ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು. ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ.
ಇದೇ ವೇಳೆ ದಾವಣಗೆರೆ, ವಿಜಯನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿಗೂ ಮಳೆ ಸಾಧ್ಯತೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಮುಂದಿನ ಎರಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಳೆಯೊಂದಿಗೆ ನಗರದಲ್ಲಿ ತಂಪಾದ ವಾತಾವರಣ ನಿರ್ಮಾಣವಾಗುವ ನಿರೀಕ್ಷೆಯಿದೆ. ಇನ್ನೂ ಹವಾಮಾನ ಪರಿಸ್ಥಿತಿಯನ್ನು ಗಮನಿಸಿದರೆ, ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳ ಕಾಲ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳು ಕಂಡುಬರುತ್ತಿವೆ.
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಉಂಟಾಗಿರುವ ವಾಯುಮಂಡಲದ ತಿರುಗುವಿಕೆಯ ಪರಿಣಾಮ ರಾಜ್ಯದಲ್ಲಿ ಸಾಮಾನ್ಯ ಮಳೆ ಮುಂದುವರಿಯಲು ಪೂರಕ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ. ಮಳೆ ಹಾಗೂ ಬಿರುಗಾಳಿ ಸಂದರ್ಭದಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವುದು ಸೂಕ್ತ. ಮರಗಳು, ವಿದ್ಯುತ್ ಕಂಬಗಳು ಹಾಗೂ ದುರ್ಬಲ ಕಟ್ಟಡಗಳ ಸಮೀಪ ನಿಲ್ಲದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.


Click it and Unblock the Notifications
