Karnataka Weather: ಶೀತಗಾಳಿ ನಡುವೆ ರಾಜ್ಯದ 9 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
Karnataka Weather: ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿ ಪ್ರಮಾಣ ಹೆಚ್ಚಾಗುತ್ತಿದ್ದು, ಕೆಲವೆಡೆ ಮಾತ್ರ ಕಡಿಮೆ ಆಗಿದೆ. ಈ ನಡುವೆಯೇ ತಮಿಳುನಾಡಿನ ಕರಾವಳಿಯಲ್ಲಿ ಚಂಡಮಾರುತ ಪರಿಣಾಮ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜನವರಿ 17) ಬೆಳಗ್ಗೆ ದಟ್ಟ ಮಂಜಿನ ಜೊತೆ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ನಗರದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಎಲ್ಲೆಲ್ಲಿ ಮಳೆ?: ತಮಿಳುನಾಡಿನ ಕರಾವಳಿಯಲ್ಲಿ ಚಂಡಮಾರುತ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.
ಎಲ್ಲೆಲ್ಲಿ ಚಳಿ?: ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭಾರೀ ಚಳಿ ಜೊತೆ ಒಣಹವೆ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಮೂರು ದಿನದ ಮುನ್ಸೂಚನೆ: ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ತುಮಕೂರು, ಮೈಸೂರು, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾಸನ, ಚಿಕ್ಕಮಗಳೂರು, ಕೊಡಗು, ವಿಜಯನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಜೊತೆ ಚಳಿ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ, ಗದಗ, ಕಲಬುರಗಿ, ಧಾರವಾಡ, ಕೊಪ್ಪಳ, ಬಳ್ಳಾರಿ, ರಾಯಚೂರಿನಲ್ಲಿ ಭಾರೀ ಚಳಿ ಮುಂದುವರೆಯಲಿದೆ. ಸದ್ಯ ಈ ಭಾಗಗಳಿಗೆ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ. ಮುಂದಿನ ದಿನಗಳಲ್ಲಿ ಈ ಭಾಗಗಳ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಕರಾವಳಿ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ತಿಳಿಸಿದೆ.
ಈಗಾಗಲೇ ಭಾರೀ ಚಳಿಯಿಂದಾಗಿ ಹಲವು ಜಿಲ್ಲೆಗಳಲ್ಲಿ ಜನರು ತತ್ತರಿಸಿ ಹೋಗಿದ್ದಾರೆ. ಬೆಳಗ್ಗೆ ಹಾಗೂ ಸಂಜೆ ವೇಳೆಯೇ ಭಾರೀ ಶೀತಗಾಳಿ ವಾತಾವರಣ ಮುಂದುರೆಯುತ್ತಿದೆ. ಅದರಲ್ಲೂ ಬೀದರ್, ಕಲಬುರಗಿ, ರಾಯಚೂರು, ಜಿಲ್ಲೆಗಳಲ್ಲೇ ಹೆಚ್ಚು ಚಳಿ ಮುಂದುವರೆದಿದೆ. ಪರಿಣಾಮ ಈ ಭಾಗಗಳ ಜನರು ಅಕ್ಷರಸಃ ನಲುಗಿಹೋಗಿದ್ದಾರೆ.












Click it and Unblock the Notifications