Karnataka Rain: ಹವಾಮಾನ ವೈಪರಿತ್ಯ; ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ!
ಬೆಂಗಳೂರು,ಏಪ್ರಿಲ್28: ಮುಂಗಾರು ಆರಂಭಕ್ಕೆ ಇನ್ನೂ ಕೆಲ ವಾರಗಳು ಮಾತ್ರ ಬಾಕಿ ಉಳಿದಿದೆ. ಅಷ್ಟರಲ್ಲಾಗಲೇ ಬದಲಾಗುತ್ತಿರುವ ಹವಾಮಾನ ವೈಪರಿತ್ಯ ಪರಿಣಾಮವಾಗಿ ಕರ್ನಾಟಕದಲ್ಲಿ ಈ ವಾರಪೂರ್ತಿ ಧಾರಾಕಾರವಾಗಿ ಮಳೆ ಬರುವ ಸಾಧ್ಯತೆ ಇದೆ.
ಹೌದು, ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ತಮಿಳುನಾಡಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇರುವ ಕಾರಣ ಕರ್ನಾಟಕದ ಹವಾಮಾನದಲ್ಲೂ ಸಾಕಷ್ಟು ಬದಲಾವಣೆಗಳಾಗುತ್ತಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲ ಜಿಲ್ಲೆಗಳಿಗೆ ಈಗಾಗಲೇ ಯೆಲ್ಲೋ ಅಲರ್ಟ್ ನ್ನ ಘೋಷಣೆ ಮಾಡಲಾಗಿದೆ
ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಶಿವಮೊಗ್ಗ, ರಾಮನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇತ್ತ ಕಲಬುರಗಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ರಾತ್ರಿ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನೂ ಸುಬ್ರಹ್ಮಣ್ಯ, ಭಾಗಮಂಡಲ, ಶೃಂಗೇರಿ, ಬಾಳೆಹೊನ್ನೂರು, ಉಪ್ಪಿನಂಗಡಿ, ಸುಳ್ಯ, ಹಾರಂಗಿ, ನಿಡಿಗೆ, ಮಾಣಿ, ತ್ಯಾಗರ್ತಿ, ಕಳಸ, ಅಜ್ಜಂಪುರ, ಹಾಸನದಲ್ಲಿ ಮಳೆಯಾಗಿದ್ದು, ಎಚ್ಎಎಲ್ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications