ರಾಜ್ಯದಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ: ಕರಾವಳಿಗೆ IMD ಎಚ್ಚರಿಕೆ, ಬೆಂಗಳೂರಲ್ಲಿ ಹೇಗಿರಲಿದೆ ವಾತಾವರಣ?
ಬೆಂಗಳೂರು: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಮಳೆ ಸಕ್ರಿಯವಾಗಿದ್ದು, ಇಂದು (ಜುಲೈ 22) ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಜತೆಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಹೆಚ್ಚಿರುವುದರಿಂದ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದ್ದು, ಸಾರ್ವಜನಿಕರು ಹಾಗೂ ಮೀನುಗಾರರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಹೆಚ್ಚಿನ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಕೆಲವು ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆ ದಾಖಲಾಗುವ ಸಾಧ್ಯತೆಯಿದೆ. ಇದರ ಜತೆಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಮೇಲ್ಮೈ ಗಾಳಿ ಬೀಸಲಿದೆ. ಮಲೆನಾಡು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲೂ ಮುಂಗಾರು ಮಳೆ ಮುಂದುವರಿಯಲಿದೆ. ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪದಲ್ಲಿ 16 ಸೆಂ.ಮೀ, ಜಗಲಬೆಟ್‌ನಲ್ಲಿ 14 ಸೆಂ.ಮೀ, ಶಿವಮೊಗ್ಗ ಜಿಲ್ಲೆಯ ಅಗುಂಬೆಯಲ್ಲಿ 8 ಸೆಂ.ಮೀ ಹಾಗೂ ಉಡುಪಿಯ ಕೊಲ್ಲೂರು, ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ತಲಾ 7-8 ಸೆಂ.ಮೀಗೂ ಅತ್ಯಧಿಕ ಮಳೆ ದಾಖಲಾಗಿದೆ.

ಉತ್ತರ ಹಾಗೂ ದಕ್ಷಿಣ ಒಳನಾಡಿನ ಸ್ಥಿತಿಗತಿ
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಪ್ರಮಾಣದ ಮಳೆಯಾಗಲಿದೆ. ಈ ಭಾಗದಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.
ರಾಜಧಾನಿ ಬೆಂಗಳೂರಿನ ಹವಾಮಾನ
ರಾಜಧಾನಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದು ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ. ನಗರದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ತಂಪಾದ ವಾತಾವರಣ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನವು ಸುಮಾರು 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ. ನಗರದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ.
ಭಾರಿ ಮಳೆಯ ಪರಿಣಾಮವಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಹಾಗೂ ಸಂಚಾರ ಅಡಚಣೆಯಾಗುವ ಸಾಧ್ಯತೆಯಿದೆ. ಕರಾವಳಿ ತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಮನವಿ ಮಾಡಿದೆ. ಮಲೆನಾಡು ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಪ್ರಯಾಣಿಸುವಾಗ ಹಠಾತ್ ಮಳೆ ಮತ್ತು ಭೂಕುಸಿತದ ಅಪಾಯವಿರುವ ಜಾಗಗಳಲ್ಲಿ ಎಚ್ಚರಿಕೆ ವಹಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ.


Click it and Unblock the Notifications
