Karnataka Weather: ರಾಜ್ಯದಲ್ಲಿ ಮುಂದುವರಿದ ವರುಣನ ಅಬ್ಬರ: ಕರಾವಳಿ, ಮಲೆನಾಡಿಗೆ ಹೈ ಅಲರ್ಟ್, ಬೆಂಗಳೂರಿನ ಹವಾಮಾನ ಹೇಗಿದೆ?
ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಮತ್ತೆ ತೀವ್ರಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ ವರದಿಯ ಪ್ರಕಾರ, ಇಂದು (ಜುಲೈ 24) ರಾಜ್ಯಾದ್ಯಂತ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಅಗತ್ಯ ಮುನ್ನೆಚ್ಚರಿಕೆಗಳನ್ನ ವಹಿಸುವಂತೆ ಸೂಚಿಸಲಾಗಿದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಹೈ ಅಲರ್ಟ್
ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡದಲ್ಲಿ ಭಾರೀ ಪ್ರಮಾಣದ ಮಳೆಯಾಗುವ ಎಚ್ಚರಿಕೆಯನ್ನ ನೀಡಿದೆ. ಈ ಭಾಗಗಳಲ್ಲಿ ಸಮುದ್ರದ ಮೇಲ್ಮೈಯಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಮುಂದಿನ ಕೆಲವು ದಿನಗಳ ಕಾಲ ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.

ಅದೇ ರೀತಿ, ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ. ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುವ ಅಪಾಯವಿರುವುದರಿಂದ, ರಾತ್ರಿ ವೇಳೆ ಪ್ರಯಾಣವನ್ನು ಆದಷ್ಟು ಮುಂದೂಡುವುದು ಸೂಕ್ತ. ಕೊಡಗಿನ ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆ ಇದೆ.
ಉತ್ತರ ಒಳನಾಡಿನ ಹವಾಮಾನ
ಉತ್ತರ ಒಳನಾಡಿನಲ್ಲೂ ಮುಂಗಾರು ಸಾಕಷ್ಟು ಚುರುಕಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ನಿರೀಕ್ಷೆಯಿದೆ.
ಬೆಂಗಳೂರು ಹಾಗೂ ದಕ್ಷಿಣ ಒಳನಾಡಿನ ವರದಿ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬಹುತೇಕ ಮೋಡ ಕವಿದ ತಂಪಾದ ವಾತಾವರಣ ಮುಂದುವರಿಯಲಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಹಗಲು ಹಾಗೂ ರಾತ್ರಿ ವೇಳೆ ಆಗಾಗ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯ ಸ್ವಲ್ಪ ಇರಲಿದೆ. ಬಳ್ಳಾರಿ, ದಾವಣಗೆರೆ, ಮೈಸೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಸಹ ಸಾಧಾರಣದಿಂದ ತುಸು ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ.
ಮುನ್ನೆಚ್ಚರಿಕಾ ಕ್ರಮಗಳನ್ನಾ ಗಮನಿಸಿ: ಮಳೆಯ ತೀವ್ರತೆ ಹೆಚ್ಚಿರುವ ಕಾರಣ, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಲು ಜಿಲ್ಲಾಡಳಿತಗಳು ಸೂಚನೆ ನೀಡಿವೆ. ಪ್ರವಾಸಿಗರು ಜಲಪಾತಗಳು, ನದಿಗಳು ಮತ್ತು ಅಪಾಯಕಾರಿ ಗುಡ್ಡಗಾಡು ಪ್ರದೇಶಗಳಿಗೆ ಭೇಟಿ ನೀಡದಂತೆ ನಿರ್ಬಂಧ ವಿಧಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆಯ ಈ ಮುನ್ಸೂಚನೆಯನ್ನಾ ನೋಡಿದ್ರೆ ಮುಂದಿನ ಎರಡು-ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇದೇ ರೀತಿ ಮುಂದುವರಿಯಲಿದೆ . ಇದು ಕೃಷಿ ಕ್ಷೇತ್ರಕ್ಕೆ ಆಶಾಭಾವನೆ ತಂದಿದ್ದರೂ, ದಿನನಿತ್ಯದ ಜನಜೀವನದ ಮೇಲೆ ಸ್ವಲ್ಪ ಮಟ್ಟಿನ ಪರಿಣಾಮ ಬೀರುವ ಸಾಧ್ಯತೆಯಿದೆ.


Click it and Unblock the Notifications
