Karnataka Weather: ಬೆಂಗಳೂರು ಸೇರಿ ರಾಜ್ಯದ ಈ 9 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; ಕರಾವಳಿಯಲ್ಲಿ ಬಿರು ಬಿಸಿಲ
ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಇಂದು (ಸೆಪ್ಟೆಂಬರ್ 14, 2026) ಕರ್ನಾಟಕದ ಹವಾಮಾನದಲ್ಲಿ ಸ್ವಲ್ಪ ಬದಲಾವಣೆಗಳಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆ ಕಡಿಮೆಯಾಗಿದೆ. ಆದ್ರೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ವಿಶೇಷವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಸುಮಾರು 9 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ.

ಮತ್ತೊಂದೆಡೆ ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಇರಲಿದ್ದು, ಬಿಸಿಲ ಝಳ ಹೆಚ್ಚಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಸಹಿತ ಮಳೆ
ಸೆಪ್ಟೆಂಬರ್ 14ರಂದು ದಕ್ಷಿಣ ಒಳನಾಡಿನ ಆಯ್ದ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದರೊಂದಿಗೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಪ್ರಮುಖವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಈ ಭಾಗದ ಜನರು ಸಂಜೆ ಅಥವಾ ರಾತ್ರಿಯ ವೇಳೆ ಪ್ರಯಾಣ ಮಾಡುವಾಗ ಎಚ್ಚರಿಕೆ ವಹಿಸುವುದು ಸೂಕ್ತ.
ಸೆಪ್ಟೆಂಬರ್ 15 ಮತ್ತು 16ರಂದು ಮಳೆಯ ಪ್ರಮಾಣ ಕೊಂಚ ಹೆಚ್ಚಾಗುವ ಸಾಧ್ಯತೆಯಿದ್ದು, ಚಾಮರಾಜನಗರ, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಿಗೂ ಇದೆ ವಾತಾವರಣ ವಿಸ್ತರಿಸುವ ಮುನ್ಸೂಚನೆ ಇದೆ.
ರಾಜಧಾನಿ ಬೆಂಗಳೂರಿನ ಹವಾಮಾನ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬಹುತೇಕ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಹಗಲಿನಲ್ಲಿ ಕೊಂಚ ಬಿಸಿಲಿನ ದರ್ಶನವಾದರೂ, ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಇನ್ನೂ ಈ ತಾಪಮಾನದ ವಿಚಾರಕ್ಕೆ ಬಂದರೆ, ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ ಸುಮಾರು 31 ಡಿಗ್ರಿ ಸೆಲ್ಸಿಯಸ್ ರಿಂದ 32 ಡಿಗ್ರಿ ಸೆಲ್ಸಿಯಸ್‌ವರೆಗೆ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ದಾಖಲಾಗುವ ಸಾಧ್ಯತೆಯಿದೆ.
ಮುಂದಿನ 48 ಗಂಟೆಗಳಲ್ಲಿ ಈ ಮಳೆಯ ವಾತಾವರಣ ಮುಂದುವರಿಯಲಿದ್ದು, ಐಟಿ-ಬಿಟಿ ಉದ್ಯೋಗಿಗಳು ಹಾಗೂ ದೈನಂದಿನ ಪ್ರಯಾಣಿಕರು ಮಳೆಗಾಲದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಒಳಿತು.
ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ
ಕರಾವಳಿ ಕರ್ನಾಟಕದ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಸಂಪೂರ್ಣವಾಗಿ ತಗ್ಗಿದೆ. ಸೋಮವಾರ ಇಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದ್ದು, ಬಿಸಿಲಿನ ತಾಪಮಾನ ಏರಿಕೆಯಾಗಲಿದೆ.
ಅದೇ ರೀತಿ, ಉತ್ತರ ಒಳನಾಡಿನಲ್ಲಿ ಕೂಡ ಮುಂಗಾರು ತಗ್ಗಿದ್ದು, ಬಹುತೇಕ ಕಡೆ ಒಣಹವೆ ಮುಂದುವರಿಯಲಿದೆ. ಬೀದರ್, ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಾತ್ರ ಹಗುರ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಸದ್ಯಕ್ಕೆ ಭಾರಿ ಮಳೆಯ ಯಾವುದೇ ಮುನ್ಸೂಚನೆ ಇಲ್ಲ.
ಭರ್ತಿಯಾದ ಆಲಮಟ್ಟಿ ಜಲಾಶಯ: ರೈತರಲ್ಲಿ ಹರ್ಷ
ಹವಾಮಾನ ವೈಪರೀತ್ಯದ ಮಧ್ಯೆಯೂ ಉತ್ತರ ಕರ್ನಾಟಕದ ಪಾಲಿಗೆ ಒಂದು ಸಂತಸದ ಸುದ್ದಿ ಇದೆ. ಮಳೆಯ ಕೊರತೆಯ ನಡುವೆಯೂ ಉತ್ತರ ಕರ್ನಾಟಕದ ಜೀವನಾಡಿ ಎಂದೇ ಕರೆಸಿಕೊಳ್ಳುವ 'ಆಲಮಟ್ಟಿ ಜಲಾಶಯ' ಶನಿವಾರ ರಾತ್ರಿಯೇ ಸಂಪೂರ್ಣವಾಗಿ ಭರ್ತಿಯಾಗಿದೆ.
519.60 ಮೀಟರ್ ಎತ್ತರದಲ್ಲಿ 123.081 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಆಲಮಟ್ಟಿ ಡ್ಯಾಂ ಗರಿಷ್ಠ ಮಟ್ಟ ತಲುಪಿದ್ದು, ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರು ಹಾಗೂ ನೀರಾವರಿ ಅವಲಂಬಿತ ಜನರಲ್ಲಿ ಮಂದಹಾಸ ಮೂಡಿಸಿದೆ.
ಜಲಾಶಯ ಭರ್ತಿಯಾಗಿರುವುದರಿಂದ ಮುಂಗಾರು ಬೆಳೆಗಳಿಗೆ ನೀರಿನ ಲಭ್ಯತೆಯ ಕುರಿತು ರೈತರಲ್ಲಿ ವಿಶ್ವಾಸ ಹೆಚ್ಚಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ.


Click it and Unblock the Notifications
