Karnataka Weather: ಬೆಂಗಳೂರು, ಮೈಸೂರು ಸೇರಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ರಾಜ್ಯದ ಹಲವು ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರು ಚುರುಕು ಪಡೆದುಕೊಂಡಿದ್ದು, ಕಳೆದ ಎರಡು ದಿನಗಳಲ್ಲಿ ಉತ್ತಮ ಮಳೆಯಾಗುತ್ತಿದೆ, ಅದರಲ್ಲೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬುಧವಾರ ಕೂಡ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕಳೆದ 24 ಗಂಟೆಗಳಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಮೈಸೂರು ಮತ್ತು ಹಾಸನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ.

ರಾಮನಗರ ಜಿಲ್ಲೆಯಲ್ಲಿ 113.5 ಮಿಮೀ ಮಳೆಯಾಗಿದ್ದು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಹೆಚ್ಚು ಮಳೆಯಾದ ಪ್ರದೇಶ ಎನಿಸಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆ 94 ಮಿಮೀ, ಮೈಸೂರು 93 ಮಿಮೀ, ಕೊಡಗು 84 ಮಿಮೀ, ಮಂಡ್ಯ 71.5 ಮಿಮೀ, ಉಡುಪಿ 64.5 ಮಿಮೀ, ಚಾಮರಾಜನಗರ 62.5 ಮಿಮೀ, ಕೋಲಾರ ಜಿಲ್ಲೆಯಲ್ಲಿ 53 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಮನಗರ ಜಿಲ್ಲೆಯ ಚಾಕನಹಳ್ಳಿಯಲ್ಲಿ 113.5 ಮಿಮೀ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳಂದೂರು, ಮೈಸೂರು ಜಿಲ್ಲೆಯ ಕೆಸ್ತೂರು, ಹರವೆ, ಕೊಡಗು ಜಿಲ್ಲೆಯ ಬಡಗದಲ್ಲಿ ಉತ್ತಮ ಮಳೆಯಾಗಿದೆ.
ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ವ್ಯಾಪಕ ಮಳೆ
ಬುಧವಾರ ಮತ್ತು ಗುರುವಾರ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ರಾಮನಗರ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಎರಡು ದಿನಗಳ ಬಳಿಕ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.
ಮೋಡ ಕವಿದ ವಾತಾವರಣ
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರುತ್ತದೆ. ಬುಧವಾರ ಮತ್ತು ಗುರುವಾರ ರಾತ್ರಿ ವೇಳೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಕೂಡ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇದ್ದು ಸಂಜೆ ವೇಳೆ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಂಗಳವಾರ ರಾತ್ರಿ ಕೂಡ ಬೆಂಗಳೂರು ನಗರದ ಹಲವು ಕಡೆಗಳಲ್ಲಿ ಉತ್ತಮ ಮಳೆಯಾದ ಕಾರಣ ರಸ್ತೆಗಳು ಜಲಾವೃತವಾಗಿದ್ದು ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ಉತ್ತಮ ಮಳೆಯಾಗುತ್ತಿದೆ. ಪುತ್ತೂರು, ಸುಳ್ಯ, ಬಂಟ್ವಾಳ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಂಗಳವಾರ ರಾತ್ರಿ ಉತ್ತಮ ಮಳೆಯಗಿದೆ.












Click it and Unblock the Notifications