Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳ ಜನ ಅಲರ್ಟ್ ಆಗಿ: ಇಂದು ಆರ್ಭಟಿಸಲಿದೆ ಮಳೆ
ಬೆಂಗಳೂರು: ಕರ್ನಾಟಕದಲ್ಲಿ ನೈರುತ್ಯ ಮುಂಗಾರು (Southwest Monsoon) ಸದ್ಯ ಕೊಂಚ ಕ್ಷೀಣಿಸಿದೆ. ಆದರೆ ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದರೆ, ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಿರುವುದಾಗಿ ಹವಾಮಾನ ಇಲಾಖೆ ವರದಿ ಮಾಡಿದೆ. ಕಳೆದ 24 ಗಂಟೆಗಳಲ್ಲಿ ಕರಾವಳಿ ಮತ್ತು ಮಲೆನಾಡಿನ ಭಾಗದಲ್ಲಿ ಉತ್ತಮ ಮಳೆ ದಾಖಲಾಗಿದ್ದು, ಮುಂಬರುವ ದಿನಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಅತ್ಯಧಿಕ ಮಳೆ ದಾಖಲಾಗಿದೆ. ಗೋಕರ್ಣ, ಆಗುಂಬೆ (ಶಿವಮೊಗ್ಗ), ಅಂಕೋಲಾ, ಗೇರುಸೊಪ್ಪ, ಮಂಕಿ, ಕಾರ್ಕಳ, ಕುಂದಾಪುರ, ಸಿದ್ದಾಪುರ, ಮಾಣಿ, ಶಕ್ತಿನಗರ ಮತ್ತು ಪೊನ್ನಂಪೇಟೆ, ಬನವಾಸಿ, ಬೆಳ್ತಂಗಡಿ, ಮಂಗಳೂರು ವಿಮಾನ ನಿಲ್ದಾಣ, ತಾಳಗುಪ್ಪ ಮತ್ತು ವಿಜಯಪುರ ಭಾಗಗಳಲ್ಲಿ ಭಾರೀ ಮಳೆ ವರದಿಯಾಗಿದೆ.

ಇಂದು ಎಲ್ಲೆಲ್ಲಿ ಮಳೆ?
ಇಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸುವ ಬಲವಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಹಲವು ಭಾಗಗಳಲ್ಲಿ ಮಳೆಯಾಗಲಿದೆ.
ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರೀ ಮಳೆ
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮುಂಗಾರು ಮಳೆಯ ಚಟುವಟಿಕೆಗಳ ನಡುವೆಯೇ ಹವಾಮಾನ ಇಲಾಖೆಯು ಕರಾವಳಿ ಭಾಗದ ಮೀನುಗಾರರಿಗೆ ಭಾರಿ ಮುನ್ನೆಚ್ಚರಿಕೆ ನೀಡಿದೆ. ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ಪ್ರಮುಖ ಬದಲಾವಣೆ ಇರುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಕರ್ನಾಟಕದ ಕರಾವಳಿ ತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಜುಲೈ 1ರವರೆಗೆ ಕರ್ನಾಟಕದ ಕರಾವಳಿ ತೀರ ಮತ್ತು ಸಮುದ್ರ ಭಾಗದಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಕೆಲವು ಸಂದರ್ಭಗಳಲ್ಲಿ ಇದರ ವೇಗ ಬರೋಬ್ಬರಿ 60 ಕಿಲೋಮೀಟರ್‌ಗೆ ತಲುಪುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಮೀನುಗಾರರು ಜುಲೈ 1ರ ವರೆಗೆ ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಇನ್ನು ರಾಜಧಾನಿ ಬೆಂಗಳೂರು ಹಾಗೂ ಅದರ ಆಸುಪಾಸಿನ ಪ್ರದೇಶಗಳಲ್ಲಿ ಬೆಳಗ್ಗೆಯಿಂದ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಸಂಪೂರ್ಣವಾಗಿ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಲಿದೆ. ನಗರದ ಹಲವೆಡೆ ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ.












Click it and Unblock the Notifications