Karnataka Weather Update: ಮಳೆ ದುರ್ಬಲ, ಹಲವೆಡೆ ಬಿಸಿಲಿನ ಅಬ್ಬರ; ಈ ಜಿಲ್ಲೆಗಳಿಗೆ ಮಾತ್ರ ಭಾರೀ ಮಳೆ
ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ದುರ್ಬಲವಾಗಿದೆ. ಒಳನಾಡು ಮತ್ತು ಕರಾವಳಿಯ ಒಂದೆರಡು ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರೀ ಮಳೆ ಆಗಲಿದೆ. ಉಳಿದಂತೆ ಇತರ ಎಲ್ಲ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ ರಾಜ್ಯದ ಗರಿಷ್ಠ ತಾಪಮಾನ ಕಂಡು ಬಂದಿದ್ದು, ಹಲವು ಜಿಲ್ಲೆಗಳಲ್ಲಿ ಉರಿಬಿಸಿಲಿನ ವಾತಾವರಣ ನಿರ್ಮಾಣವಾಗಿದೆ.
ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ಕಳೆದ 24ಗಂಟೆಗಳಲ್ಲಿ ಕರಾವಳಿ, ಮಲೆನಾಡು ಸೇರಿದಂತೆ ಕೆಲವು ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಧರಣ ಮಳೆ ಆಗಿದೆ. ಅಕ್ಟೋಬರ್ 22 ರಿಂದ 24ರವರೆಗೆ ಮೂರು ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡು (ಮಲೆನಾಡು) ಒಂದೆರಡು ಜಿಲ್ಲೆಗಳಲ್ಲಿ ಮಾತ್ರವೇ ಮಳೇ ಆಗಲಿದ್ದು, ಉಳಿದಂತೆ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದ್ದು, ಈಗಾಗಲೇ ವಿವಿಧಡೆ ಭಾರೀ ತಾಪಮಾನ ಕಂಡು ಬಂದಿದೆ.

ಗುಡುಗು ಸಹಿತ ಭಾರೀ ಮಳೆ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ, ಚಾಮರಾಜನಗರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ) ಮತ್ತು ಕೋಲಾರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಹಗುರ ಮಳೆ ನಿರೀಕ್ಷಿಸಬಹುದು.
ಈ ಜಿಲ್ಲೆಗಳಿಗೆ ಒಣಹವೆ ಎಚ್ಚರಿಕೆ
ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಕಂಡು ಬರಲಿದೆ. ಇಲ್ಲಿ ಬಿಸಿಲಿನ ಅಬ್ಬರ ಹೆಚ್ಚಿರಲಿದೆ.
ಇನ್ನೂ ಬೆಂಗಳೂರು ನಗರದಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣವಿರುತ್ತದೆ. ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ ಸುಮಾರು 30°C ಮತ್ತು 21°C ಇರುವ ಸಾಧ್ಯತೆಯಿದೆ.
ಅತ್ಯಧಿಕ ತಾಪಮಾನದ ಜಿಲ್ಲೆಗಳು
ಕಲಬುರಗಿಯಲ್ಲಿ ಅತ್ಯಧಿಕ ಗರಿಷ್ಠ 36.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಉಳಿದಂತೆ ಬೀದರ್, ರಾಯಚೂರು, ವಿಜಯಪುರ ದಲ್ಲಿ ತಲಾ 34 ಡಿಗ್ರಿ ಸೆಲ್ಸಿಯಸ್ ತಾಪಮಾನ, ಧಾರವಾಡ, ಹಾವೇರಿ, ಕೊಪ್ಪಳ, ಗದಗ, ಬಾಗಲಕೋಟೆ, ಚಿತ್ರದುರ್ಗ, ಬಳ್ಳಾರಿ ಭಾಗದಲ್ಲಿ 33 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇನ್ನುಳಿದ ಜಿಲ್ಲೆಗಳಲ್ಲೂ ವಾಡಿಕೆಗಿಂತ ಹೆಚ್ಚಿನ ಉಷ್ಣಾಂಶ ಕಂಡು ಬಂದಿದೆ ಎಂದು ಐಎಂಡಿ ವರದಿ ತಿಳಿಸಿದೆ.


Click it and Unblock the Notifications
