Karnataka Weather: ಮುಂಗಾರು.. ರಾಜ್ಯದ ಈ ಜಿಲ್ಲೆಗಳಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ

Karnataka Monsoon Rains: ರಾಜ್ಯಕ್ಕೆ ವಾಡಿಕೆಯಂತೆ ಜೂನ್ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಟ್ಟಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ಭಾರೀ ಮಳೆಯಾಗುತ್ತಿದ್ದು, ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆ ಮುಂದುವರೆದಿದೆ. ಇದೀಗ ಮುಂದಿನ ಒಂದು ವಾರ ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ವರುಣ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜೂನ್ 14) ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆಯಾಗುವ ಮುನ್ಸೂಚನೆ ಇದೆ. ನಗರದಲ್ಲಿಂದು ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather Update Heavy Rain Forecast for Next One Week In These Districts IMD Alert

ಒಂದು ವಾರ ಭಾರಿ ಮಳೆ ಮುನ್ಸೂಚನೆ

ಈಗಾಗಲೇ ಶನಿವಾರ (ಜೂನ್ 13) ಬೆಂಗಳೂರಿನ ಹಲವೆಡೆ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಹಾಗೆಯೇ ಮುಂದಿನ ಒಂದು ವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ

ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ವರ್ಷ ರಾಜ್ಯದಲ್ಲಿ ಮುಂಗಾರು ಆರ್ಭಟ ಕ್ಷೀಣಿಸಿದೆ. ಕೆಲವೆಡೆ ಮಾತ್ರ ಮಳೆರಾಯನ ಆರ್ಭಟ ಮುಂದುವರೆದಿದೆ. ಈ ನಡುವೆಯೇ ಇದೀಗ ಮುಂದಿ ಒಂದು ವಾರ ರಾಜ್ಯಾದ್ಯಂತ ಅಲ್ಲಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗಾಳಿಯ ವೇಗ ಕೂಡ ಹೆಚ್ಚಿರಲಿದೆ ಎನ್ನುವ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಕರಾವಳಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಭಾಗಗಳಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಮತ್ತೊಂದೆಡೆ ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಾಧಾರಣ ಮಳೆ

ದಕ್ಷಿಣ ಒಳನಾಡಿನ ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮಳೆ ಸುರಿಯಲಿದೆ. ಚಾಮರಾಜನಗರ, ಮಂಡ್ಯ, ರಾಮನಗರ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ. ಈ ಭಾಗಗಳಲ್ಲಿ ಮುಂದಿನ ಎರಡು ದಿನಗಳರವರೆಗೆ ಗಾಳಿ ವೇಗ ಗಂಟೆಗೆ 30- 40 ಕಿಲೋ ಮೀಟರ್ ಇರಲಿದೆ ಎಂದು ತಿಳಿಸಿದೆ.

ಉತ್ತರ ಒಳನಾಡಿನ ಹವಾಮಾನ ಮುನ್ಸೂಚನೆ

ಉತ್ತರ ಒಳನಾಡಿನ ಹಾವೇರಿ, ಗದಗ, ಬಳ್ಳಾರಿ, ರಾಯಚೂರು, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಬೀದರ್ ಮತ್ತು ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಮುಂದಿನ 2 ದಿನಗಳ ಕಾಲ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶನಿವಾರ ರಾಜ್ಯದ ಹಲವೆಡೆ ಮಳೆ

ರಾಜ್ಯದಲ್ಲಿ ಮುಂಗಾರು ಆರ್ಭಟ ಸದ್ಯಕ್ಕೆ ಕ್ಷೀಣಿಸಿದೆ. ಈ ನಡುವೆಯೂ ಶನಿವಾರ ದಕ್ಷಿಣ ಹಾಗೂ ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿಯ ಕೆಲವು ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಿದೆ. ಮಲೆನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿದಿದ್ದರೆ, ಕೊಡಗು ಜಿಲ್ಲೆಯ ಮಡಿಕೇರಿ ಸೇರಿದಂತೆ ಹಲವೆಡೆ ಬಿಟ್ಟು ಬಿಟ್ಟು ಭಾರಿ ಮಳೆಯಾಗುತ್ತಿದೆ. ಶನಿವಾರ ಮುಂಜಾನೆ ಹಾಗೂ ಮಧ್ಯಾಹ್ನದ ವೇಳೆಗೆ ಮಡಿಕೇರಿಯಲ್ಲಿ ಜೋರು ಮಳೆ ಸುರಿದಿದ್ದು, ಕಳೆದ ಮೂರು ದಿನಗಳಿಂದ ಇಲ್ಲಿ ಇದೇ ವಾತಾವರಣ ಇದೆ. ಉಳಿದಂತೆ ಚಾಮರಾಜನಗರ, ರಾಮನಗರ, ಮಂಡ್ಯ ಮೈಸೂರು, ಬಳ್ಳಾರಿಯ ಕೆಲವೆಡೆ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

ಒಟ್ಟಿನಲ್ಲಿ ಹೇಳುವುದಾದರೆ ಮುಂದಿನ ದಿನಗಳಲ್ಲಿ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರಲಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+