Karnataka Weather: ರಾಜ್ಯದಲ್ಲಿ ಕೈಕೊಟ್ಟ ಮುಂಗಾರು, ಈ ಜಿಲ್ಲೆಗಳಿಗೆ ಮುಂದಿನ ಐದು ದಿನ ಮಳೆ ಮುನ್ಸೂಚನೆ
Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಕೈಕೊಟ್ಟಿದ್ದು, ಒಣಹವೆ ಮುಂದುವರೆದಿದೆ. ಕೆಲವೇ ಕೆಲವು ಪ್ರವೇಶಗಳಲ್ಲಿ ಮಾತ್ರ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಅಲ್ಲಲ್ಲಿ ವರುಣ ಆರ್ಭಟಿಸುತ್ತಿದ್ದಾನೆ. ಹಾಗೆಯೇ ಮುಂದಿನ ಐದು ದಿನ ಕೆಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನ ಶನಿವಾರ (ಜೂನ್ 27) ಬೆಳಗ್ಗೆಯಿಂದಲೇ ರಣಬಿಸಿಲು ಮುಂದುವರೆದಿದೆ. ನಗರದ ಹಲವೆಡೆ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಮಂದಿನ ಐದು ದಿನ ಮಳೆ ಮುನ್ಸೂಚನೆ
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಹಾಗೂ ಉತ್ತರ ಒಳನಾಡಿದ ಕೆಲ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರಲಿದೆ ಎಂದು ತಿಳಿಸಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಕರವಾಳಿ ಭಾಗದ ಉತ್ತರ ಕನ್ನಡ, ಉತ್ತರ ಒಳನಾಡಿದ ಬಾಗಲಕೋಟೆ, ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ?
ಕರಾವಳಿ ಜಿಲ್ಲೆ ಉತ್ತರ ಕನ್ನಡದ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಲ್ಲಿ ಭಾಗಗಳಲ್ಲಿ ಸಾಧಾರಣ ಮಳೆ ಸುರಿಯುವ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಸೂಚನೆ ನೀಡಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗಾಳಿಯ ವೇಗ ಕೂಡ ಹೆಚ್ಚಿರಲಿದೆ. ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದ್ದು, ಗಂಟೆಗೆ 30-40 ಕಿಲೋ ಮೀಟರ್ ವೇಗದಲ್ಲಿ ಗಳಿ ಬೀಸುವ ಸಾಧ್ಯತೆಯಿದೆ. ಇನ್ನೂ ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಸಹ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸ್ಥಳಗಳಲ್ಲಿ ಸಾಧಾರಣ ಮಳೆ ಬೀಳಲಿದ್ದು, ಗಾಳಿ ವೇಗ ಗಂಟೆಗೆ 30-40 ಕಿಲೋ ಮೀಟರ್ ಇರಲಿದ ಎಂದು ತಿಳಿಸಿದೆ.
ಸಾಮಾನ್ಯವಾಗಿ ಜೂನ್ ತಿಂಗಳ ಆರಂಭದಲ್ಲೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ ಆಗುತ್ತಿತ್ತು. ಈ ಬಾರಿ ಮುಂಗಾರು ಎಂಟ್ರಿ ಕೊಟ್ಟರೂ ಸಹ ಊಹಿಸಲಾದ ವಾಡಿಕೆ ಮಳೆ ಇಲ್ಲದಂತಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದ್ದರೂ ಸಹ ಒಂದೆರಡು ಹನಿ ರೂಪದಲ್ಲಿ ಮಳೆ ಬಂದು ಮತ್ತೆ ಮಾಯವಾಗುತ್ತಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆದಿದ್ದು, ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಬಿರು ಬಿಸಿಲಿನಿಂದ ಬೇಸತ್ತಿರುವ ಜನ ಮುಂಗಾರು ಮಳೆ ಆರ್ಭಟ ಯಾವಾಗ ಶುರುವಾಗಲಿದೆ ಎಂದು ಮೋಡದ ಕಡೆ ಮುಖ ಮಾಡಿ ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಪ್ರಮುಖ ಜಲಾಶಯಗಳಲ್ಲೂ ಸಹ ನೀರಿನ ಪ್ರಮಾಣ ತಗ್ಗುತ್ತಲಿದ್ದು, ಮುಂದಿನ ದಿನಗಳಲ್ಲಿ ಹೀಗೆ ಆದರೆ ಪರಿಸ್ಥಿತಿ ಮತ್ತಷ್ಟು ಹದಗೆಡುವುದರಲ್ಲಿ ಯಾವುದೇ ಅನುಮಾನವಿಲ್ಲ












Click it and Unblock the Notifications