Karnataka Weather: ರಣಬಿಸಿಲಿನ ನಡುವೆಯೂ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
Karnataka Weather: ರಾಜ್ಯದಲ್ಲಿ ಈ ಬಾರಿ ಮುಂಗಾರು ಕೈಕೊಟ್ಟಿದ್ದು, ಕೆಲವೇ ಭಾಗಗಳಲ್ಲಿ ಮಾತ್ರ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಶನಿವಾರ (ಜೂನ್ 20) ನಗರದಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಇನ್ನು ಮುಂದಿನ ಮೂರು ದಿನ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಬೀಳುವ ಸಾಧ್ಯತೆಯಿದೆ ಅಂತಾ ತಿಳಿಸಿದೆ.

ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ
ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆ ನಗರದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಇಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಕರಾವಳಿ, ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳ ಹವಾಮಾನ
ಭಾನುವಾರ (ಜೂನ್ 21) ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಈ ಭಾಗಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಅವಧಿಯಲ್ಲಿ ಇಲ್ಲಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಯಾರೂ ಈ ದಿನಗಳಲ್ಲಿ ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ಕೊಪ್ಪಳ, ವಿಜಯಪುರ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಈ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಇದೇ ರೀತಿಯ ವಾತಾವರಣ ಇರಲಿದೆ ಎಂದು ಎಚ್ಚರಿಕೆ ನೀಡಿದೆ.












Click it and Unblock the Notifications