ಹವಾಮಾನ ಇಲಾಖೆ ಶುಭಸುದ್ದಿ: ಬೆಂಗಳೂರು ಸೇರಿ ರಾಜ್ಯದ ಈ ಭಾಗಗಳಲ್ಲಿ ಮುಂದಿನ 5 ದಿನ ಮುಂಗಾರು ಮಳೆ ಆರ್ಭಟ
Karnataka Monsoon Rains: ರಾಜ್ಯಕ್ಕೆ ಈಗಾಗಲೇ ಮುಂಗಾರು ಎಂಟ್ರಿ ಕೊಟ್ಟಿದೆ. ಆದರೆ ಹಲವು ಜಿಲ್ಲೆಗಳಲ್ಲಿ ಮಾತ್ರ ಮಳೆ ಮುಂದುವರೆದಿದ್ದು, ಇನ್ನೂ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಷ್ಟೇ ನಿರ್ಮಾಣವಾಗುತ್ತಿತ್ತು. ಈ ನಡುವೆ ಇದೀಗ ಹವಾಮಾನ ಇಲಾಖೆ ಶುಭಸುದ್ದಿ ನೀಡಿದ್ದು, ಮುಂದಿನ ಐದು ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆಗಳಲ್ಲಿ ವರುಣ ಆರ್ಭಟಿಸಲಿದ್ದಾನೆ ಎಂದು ಮುನ್ಸೂಚನೆ ಕೊಟ್ಟಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಭಾನುವಾರ (ಜೂನ್ 14) ಭಾರೀ ಮಳೆಯಾದ ಬಗ್ಗೆ ವರದಿಯಾಗಿದೆ. ಇನ್ನು ಸೋಮವಾರ (ಜೂನ್ 15) ಬೆಳಗ್ಗೆ ಬಿಸಿಲಿನ ವಾತಾವರಣ ಮುಂದುವರೆದಿದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆರಾಯನ ಆಗಮನ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ನಗರದಲ್ಲಿಂದು ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.

ಮುಂದಿನ 5 ದಿನಗಳವರೆಗೂ ಭಾರಿ ಮಳೆ
ಈಗಾಗಲೇ ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದೆ. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿರಲಿಲ್ಲ. ಇದರಿಂದಾಗಿ ನಾಡಿನ ಅನ್ನದಾತರು ಆತಂಕಕ್ಕೆ ಒಳಗಾಗಿದ್ದರು. ಆದರೆ ಇಂದಿನಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯಾವ್ಯಾವ ಜಿಲ್ಲೆಗಳಲ್ಲಿ ಮಳೆ?
ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ. ಮತ್ತೊಂದೆಡೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಕಲಬುರಗಿ, ಬೀದರ್, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ಕೊಪ್ಪಳ, ಯಾದಗಿರಿ, ರಾಯಚೂರು ಮತ್ತು ಹಾವೇರಿ ಭಾಗಗಳ ಹಲವೆಡೆ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಭಾಗಗಳಲ್ಲೂ ಇದೇ ರೀತಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ.
ಮೀನುಗಾರರಿಗೆ ಮಹತ್ವದ ಸೂಚನೆ
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆರಾಯ ಆರ್ಭಟ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಈ ಭಾಗಗಳಲ್ಲಿ ಮಳೆ ಮತ್ತಷ್ಟು ಚುರುಕು ಪಡೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಕಾರಣ ಕರಾವಳಿಯ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರದವರೆಗೆ ಯೆಲ್ಲೋ ಅಲರ್ಟ್ ನೀಡಿದೆ. ಅಲ್ಲದೆ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವುದರುಂದ ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆ ಮುಂದುವರಿದಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ ಮುಂದಿನ ಮೂರು ದಿನಗಳ ಹವಾಮಾನ ಹೀಗಿರಲಿದೆ. ಜೂನ್ 15ರಂದು ನಗರದಲ್ಲಿ ಭಾಗಶಃ ಬಿಸಿಲು ಮತ್ತು ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನವು 32°C ಆಸುಪಾಸಿನಲ್ಲಿ ದಾಖಲಾಗಬಹುದು ಎಂದು ತಿಳಿಸಿದೆ. ಒಟ್ಟಿನಲ್ಲಿ ಮುಂಗಾರು ಈಗ ಚುರುಕಾಗುತ್ತಿರುವ ಹಿನ್ನೆಲೆ ಬಿಸಿಲಿನಿಂದ ಬೇಸತ್ತಿದ್ದ ಜನರು ಮತ್ತು ರೈತರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಂತಾಗಿದೆ.
ರಾಜ್ಯದ ಮೇಲೆ ಎಲ್ ನಿನೊ ಪ್ರಭಾವ
ರಾಜ್ಯದಲ್ಲಿ ಮಳೆ ಕಡಿಮೆಯಾಗಿರುವ ಹಿನ್ನೆಲೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆ ರಾಜ್ಯದಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತವಾಗಿವೆ. ಭಾರತೀಯ ಹವಾಮಾನ ಇಲಾಖೆ ವರದಿ ಪ್ರಕಾರ, ಈ ವರ್ಷ ಮುಂಗಾರು ಮಳೆ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆಯಿದೆ. ಜೂನ್ ತಿಂಗಳಲ್ಲಿ ಮಳೆಯ ಕೊರತೆಗೆ ಎಲ್ ನಿನೋ ಕಾರಣವಾಗಲಿದೆ ಎಂದು ತಿಳಿಸಿದೆ.












Click it and Unblock the Notifications