Karnataka Weather: ಏಪ್ರಿಲ್ 24ರವರೆಗೆ ಕರ್ನಾಟಕದ 25 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಬಿಸಿಲೂ ಹೆಚ್ಚು
ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲ ಝಳ ತೀವ್ರಗೊಂಡಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಇಡೀ ರಾಜ್ಯದಲ್ಲೇ ಕಲಬುರಗಿ ಜಿಲ್ಲೆಯು ಗರಿಷ್ಠ 43.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಿಸುವ ಮೂಲಕ ಅತ್ಯಂತ ಬಿಸಿಯಾದ ಪ್ರದೇಶವಾಗಿ ಹೊರಹೊಮ್ಮಿದೆ. ಉತ್ತರ ಒಳನಾಡಿನ ಹಲವೆಡೆ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗಿದ್ದು, ಜನಜೀವನದ ಮೇಲೆ ಪರಿಣಾಮ ಬೀರತೊಡಗಿದೆ. ಇದಲ್ಲದೆ ಏಪ್ರಿಲ್ 24ರವರೆಗೆ ಕರ್ನಾಟಕದ 25 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬೀದರ್, ಧಾರವಾಡ, ಕಲಬುರಗಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿ ಕಂಡುಬಂದಿದೆ. ಹಾಗೆಯೇ, ದಕ್ಷಿಣ ಒಳನಾಡಿನ ಬೆಂಗಳೂರಿನ ಹೆಚ್.ಎ.ಎಲ್, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು ನಗರ, ಚಿಂತಾಮಣಿ ಹಾಗೂ ಮೈಸೂರು ಭಾಗಗಳಲ್ಲಿ ಕೂಡ ವಾಡಿಕೆಗಿಂತ ಹೆಚ್ಚಿನ ಉಷ್ಣಾಂಶ ದಾಖಲಾಗಿದೆ. ರಾಜ್ಯದ ಹಲವೆಡೆ ತಾಪಮಾನವು 32.2ರಿಂದ 43.2 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ಕಂಡುಬಂದಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದ ಒಟ್ಟಾರೆ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಮಟ್ಟದ ಬದಲಾವಣೆಗಳಾಗಿಲ್ಲದಿದ್ದರೂ, ದಕ್ಷಿಣ ಮತ್ತು ಉತ್ತರ ಒಳನಾಡಿನ ಅನೇಕ ಕಡೆಗಳಲ್ಲಿ ಸಾಮಾನ್ಯಕ್ಕಿಂತ 1.6ರಿಂದ 3 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಏರಿಕೆಯಾಗಿದೆ.
ಎಲ್ಲೆಲ್ಲಿ ಮಳೆ?
ರಾಜ್ಯದ ಹವಾಮಾನದಲ್ಲಿ ಏರುಪೇರಾಗಿದ್ದು, ಕಳೆದ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಮತ್ತು ಒಳನಾಡಿನ ಆಯ್ದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯ ಸಿಂಚನವಾಗಿದ್ದರೆ, ಉತ್ತರ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾದ ವರದಿಯಾಗಿದೆ. ಈ ಮಳೆಯು ಬೇಸಿಗೆಯ ಬಿಸಿಯಿಂದ ಕಂಗೆಟ್ಟಿದ್ದ ಜನರಿಗೆ ತುಸು ತಂಪು ನೀಡಿದ್ದು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಹವಾಮಾನದಲ್ಲಿ ಬದಲಾವಣೆ ಕಂಡುಬಂದಿದೆ.
ಮಳೆ ಪ್ರಮಾಣದ ಬಗ್ಗೆ ನೋಡುವುದಾದರೆ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ರಾಜ್ಯದಲ್ಲೇ ಗರಿಷ್ಠ 2 ಸೆಂಟಿಮೀಟರ್ ಮಳೆಯಾಗಿದೆ. ಮಲೆನಾಡು ಭಾಗದ ಇತರ ಪ್ರಮುಖ ಪ್ರದೇಶಗಳಾದ ಕಳಸ, ಜಯಪುರ ಮತ್ತು ಕಡೂರುಗಳಲ್ಲಿ ತಲಾ 1 ಸೆಂಟಿಮೀಟರ್ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣದ ಸುತ್ತಮುತ್ತಲ ಪ್ರದೇಶಗಳಲ್ಲಿ 1 ಸೆಂಟಿಮೀಟರ್ ಮಳೆಯಾಗಿದೆ. ಇತ್ತ ಉತ್ತರ ಒಳನಾಡಿನ ಕೊಪ್ಪಳ ಜಿಲ್ಲೆಯ ಗಂಗಾವತಿ ಮತ್ತು ಕೊಪ್ಪಳ ನಗರ ಭಾಗದಲ್ಲೂ ತಲಾ 1 ಸೆಂಟಿಮೀಟರ್ ಮಳೆಯಾದ ವರದಿಯಾಗಿದೆ. ಹಾಸನ ಜಿಲ್ಲೆಯ ಬೇಲೂರು ಭಾಗದಲ್ಲೂ ಮಳೆಯ ಸಿಂಚನವಾಗಿದ್ದು, ಒಟ್ಟಾರೆಯಾಗಿ ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ವರುಣನ ಆಗಮನದ ಲಕ್ಷಣಗಳು ಕಂಡುಬಂದಿವೆ.
ಆಲಿಕಲ್ಲು ಮಳೆ ಸಾಧ್ಯತೆ
ಮುಂದಿನ ಕೆಲವು ದಿನಗಳ ಕಾಲ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬಾಗಲಕೋಟೆ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಈ ಭಾಗದ ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇರುವುದರಿಂದ ರೈತರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಸಹ ಭಾರಿ ಗಾಳಿ ಹಾಗೂ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಇನ್ನು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಬಳ್ಳಾರಿ, ವಿಜಯನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ವೇಗದ ಗಾಳಿ ಬೀಸಲಿದ್ದು, ಒಂದೆರಡು ಕಡೆ ಮಳೆಯಾಗುವ ಸಂಭವವಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ವಿಭಿನ್ನ ಹವಾಮಾನ ಕಂಡುಬರಲಿದೆ. ಇಲ್ಲಿನ ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದರೂ, ಒಟ್ಟಾರೆಯಾಗಿ ಹವಾಮಾನವು ಶುಷ್ಕವಾಗಿರಲಿದ್ದು, ಸೆಕೆ ಹೆಚ್ಚಿರಲಿದೆ. ಇದರಿಂದ ಕರಾವಳಿ ಭಾಗದ ಜನರಿಗೆ ಬಿಸಿಲಿನ ತಾಪದ ವಾತಾವರಣ ಇರಲಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಸೂರ್ಯನ ತಾಪ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಕಾಶವು ಪ್ರಮುಖವಾಗಿ ಸ್ಪಷ್ಟವಾಗಿರಲಿದ್ದು ಗರಿಷ್ಠ ತಾಪಮಾನವು ವಾಡಿಕೆಗಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಏಪ್ರಿಲ್ 19ರವರೆಗೆ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಇರಲಿದೆ. ರಾಜ್ಯದ ಗರಿಷ್ಠ ತಾಪಮಾನದಲ್ಲಿ ಮುಂದಿನ ಐದು ದಿನಗಳವರೆಗೆ ಯಾವುದೇ ದೊಡ್ಡ ಮಟ್ಟದ ಬದಲಾವಣೆಗಳಿಲ್ಲದಿದ್ದರೂ, ಬಿಸಿಲಿನ ತೀವ್ರತೆ ಮಾತ್ರ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ಮಲೆನಾಡು ಮತ್ತು ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದರೂ, ಬಯಲು ಸೀಮೆಯಲ್ಲಿ ಬಿಸಿ ಗಾಳಿಯ ಪ್ರಭಾವ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications