Karnataka Rain : ಮೂರು ದಿನ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆ: ಕರಾವಳಿ ಕರ್ನಾಟಕ, ಉತ್ತರ ಕರ್ನಾಟಕ ಹವಾಮಾನ ವರದಿ
ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಮಳೆ ಆರ್ಭಟ ಶುರುವಾಗಿದೆ. ಮುಂದಿನ ಮೂರು ದಿನಗಳ ಕಾಲ ಕರ್ನಾಟಕ ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಚದುರಿದ ಮಳೆಯಾಗುತ್ತದೆ ಎಂದು ಮುನ್ಸೂಚನೆ ನೀಡಿದೆ.
ಗುರುವಾರ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೊಡಗೀಹಳ್ಳಿಯಲ್ಲಿ ಅತ್ಯಧಿಕ 131.5 ಮಿಮೀ ಮಳೆ ದಾಖಲಾಗಿದೆ ಎಂದು ತಿಳಿಸಿದೆ. ಬಿಬಿಎಂಪಿ ವ್ಯಾಪ್ತಿಯ ಕಾಟನ್‌ಪೇಟೆಯಲ್ಲಿ 58.5 ಮಿಮೀ ಮಳೆಯಾಗಿದೆ ಎಂದು ಮಾಹಿತಿ ನೀಡಿದೆ.

ಮುಂದಿನ ಮೂರು ದಿನಗಳ ಕಾಲ ಮೋಡ ಕವಿದ ವಾತಾವರಣ ಮುಂದಿಯರಲಿದ್ದು, ಬಿರುಗಾಳಿ ಸಹಿತ ಮಳೆಯಾಗಬಹುದು ಎಂದು ಹೇಳಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ತುಮಕೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಮಲೆನಾಡು ಭಾಗಗಳಲ್ಲಿ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬಿಜಾಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಗುಲ್ಬರ್ಗಾ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಮೇ 6ರಿಂದ ಸೈಕ್ಲೋನ್ ಮುನ್ಸೂಚನೆ
ಮೇ 6ರಿಂದ ರಾಜ್ಯದಲ್ಲಿ ಸೈಕ್ಲೋನ್ ಆರಂಭವಾಗುವ ಬಗ್ಗೆ ಕೂಡ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ 'ಮೋಚಾ' ಚಂಡಮಾರುತ ಸೃಷ್ಟಿಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದು ರಾಜ್ಯದ ಹಲವು ಭಾಗಗಳಲ್ಲಿ ಹವಾಮಾನ ಬದಲಾವಣೆಗೆ ಕಾರಣವಾಗಲಿದೆ.
ದಕ್ಷಿಣ ಒಳನಾಡು ಭಾಗದಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ನೀಡಲಾಗಿದೆ. ಅಲ್ಲದೆ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ತಾಪಮಾನದಲ್ಲಿ ಗಮನಾರ್ಹವಾಗಿ ಇಳಿಕೆಯಾಗಲಿದೆ. ಚಂಡಮಾರುತದ ಪರಿಣಾಮ ಗಾಳಿಯ ಆರ್ಭಟದ ಜತೆಗೆ ಗುಡುಗು-ಮಿಂಚು ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications