Kasturi Rangan Report: ಮಲೆನಾಡಿನ ಮನೆ ಮನೆಗೂ ರಕ್ಷಣೆ ಕೊಡುತ್ತೇವೆ ಎಂದಿದ್ಯಾಕೆ ಸಚಿವ ಮಧು ಬಂಗಾರಪ್ಪ
Kasturi Rangan Report: ಕಸ್ತೂರಿ ರಂಗನ್ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿದ್ದಾರೆ. ಮಲೆನಾಡಿನ ಜನರ ಬದುಕಿಗೆ ಧಕ್ಕೆಯನ್ನುಂಟು ಮಾಡುವ ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಲು ಅವಕಾಶ ನೀಡುವುದಿಲ್ಲ. ಮಲೆನಾಡಿನ ಮನೆ ಮನೆಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅಭಯ ನೀಡಿದ್ದಾರೆ. ಕಸ್ತೂರಿ ರಂಗನ್ ವರದಿ ರದ್ದುಪಡಿಸಿ ಮಲೆನಾಡು ಉಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ತೀರ್ಥಹಳ್ಳಿ ಘಟಕದ ವತಿಯಿಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಸೋಮವಾರ ನಡೆದ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ತೀರ್ಥಹಳ್ಳಿಯ ಬಿಂತಳದಿಂದ ಆರಂಭಗೊಂಡ ಪಾದಯಾತ್ರೆ ಪಟ್ಟಣದ ಶಾಂತವೇರಿ ಗೋಪಾಲಗೌಡ ರಂಗಮಂದಿರದವರೆಗೆ ಸಾಗಿತು. ಪಾದಯಾತ್ರೆಯುದ್ದಕ್ಕೂ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ನಾನು 2013ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದಾಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದರು. ಆಗ ಕಸ್ತೂರಿ ರಂಗನ್ ವರದಿ ಕುರಿತು ಸಚಿವ ಸಂಪುಟ ಉಪಸಮಿತಿ ರಚಿಸಲಾಗಿತ್ತು ಈ ಸಮಿತಿಯ ಶಿಫಾರಸಿನಂತೆ ವರದಿಯನ್ನು ಸಾರಾಸಗಟಾಗಿ ತಿರಸ್ಕರಿಸಲಾಗಿತ್ತು. ಕಸ್ತೂರಿ ರಂಗನ್ ವರದಿಯನ್ನು ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ವಿರೋಧಿಸುತ್ತಾ ಬಂದಿದೆ. ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.

ಇದು ಕೇವಲ ಒಂದು ಅಧಿಸೂಚನೆಯನ್ನು ವಿರೋಧಿಸುವ ಹೋರಾಟವಲ್ಲ. ಮಲೆನಾಡಿನ ನೆಲ, ಕೃಷಿ, ಬದುಕು ಹಾಗೂ ಭವಿಷ್ಯವನ್ನು ರಕ್ಷಿಸುವ ಸಂಕಲ್ಪದ ಹೋರಾಟವಾಗಿದೆ. ಪಶ್ಚಿಮ ಘಟ್ಟ ನಮ್ಮ ಹೆಮ್ಮೆ. ಪರಿಸರ ಸಂರಕ್ಷಣೆ ಅಗತ್ಯ. ಆದರೆ ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಪರಿಸರದೊಂದಿಗೇ ಬದುಕುತ್ತಿರುವ ಮಲೆನಾಡಿನ ಜನರನ್ನು ಸಂಕಷ್ಟಕ್ಕೆ ಸಿಲುಕಿಸುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದರು.
Kasturi Rangan Report: ರಾಘವೇಂದ್ರ, ಶೋಭಾ ಸಭೆಗೆ ಹೋಗಿದ್ದರೇ?
ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಇಂದು ಬಿಜೆಪಿಯವರು ಮಲೆನಾಡಿನ ರೈತರ ಪರವಾಗಿ ಮಾತನಾಡುತ್ತಿರುವುದಾಗಿ ಹೇಳುತ್ತಿದ್ದಾರೆ. ಆದರೆ 2016ರ ಆಗಸ್ಟ್ 11ರಂದು ಕೇಂದ್ರ ಸರ್ಕಾರ ಕರೆದಿದ್ದ ಅತ್ಯಂತ ಮಹತ್ವದ ಸಭೆಗೆ ಶಿವಮೊಗ್ಗದ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಅಂದಿನ ಉಡುಪಿ-ಚಿಕ್ಕಮಗಳೂರು ಸಂಸದೆಯಾಗಿದ್ದ ಶೋಭಾ ಕರಂದ್ಲಾಜೆ ಅವರು ಭಾಗವಹಿಸಿದ್ದರೇ? ಎಂದು ಪ್ರಶ್ನಿಸಿದ ಅವರು, ಈಗ ಬಿಜೆಪಿಯವರು ಈ ವಿಚಾರದಲ್ಲಿ ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತಿದ್ದಾರೆ ಎಂದು ಟೀಕಿಸಿದರು.
Kasturi Rangan Report: ಏಳನೇ ಬಾರಿ ಕರಡು ಅಧಿಸೂಚನೆ
ಕರ್ನಾಟಕ ಸರ್ಕಾರ ಕಸ್ತೂರಿ ರಂಗನ್ ವರದಿಯನ್ನು ಹಲವು ಬಾರಿ ಸ್ಪಷ್ಟವಾಗಿ ತಿರಸ್ಕರಿಸಿದೆ. ವಿಧಾನಸಭೆಯಲ್ಲಿಯೂ ವರದಿಯನ್ನು ತಿರಸ್ಕರಿಸುವ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ. ಆದರೂ ಕೇಂದ್ರದ ಬಿಜೆಪಿ ಸರ್ಕಾರ ಮತ್ತೆ ಮತ್ತೆ ಅಧಿಸೂಚನೆಗಳನ್ನು ಹೊರಡಿಸುತ್ತಿದೆ. ಇದೀಗ ಏಳನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ ಎಂದರು.
ಮೊದಲ ಆರು ಅಧಿಸೂಚನೆಗಳಲ್ಲಿ ತೀರ್ಥಹಳ್ಳಿ ತಾಲ್ಲೂಕಿನ 139 ಗ್ರಾಮಗಳನ್ನು ಸೇರಿಸಲಾಗಿತ್ತು. ಇದನ್ನು ತೀರ್ಥಹಳ್ಳಿಯ ಜನರು ಹಾಗೂ ರಾಜ್ಯ ಸರ್ಕಾರ ವಿರೋಧಿಸಿತ್ತು. ಆದರೆ ಇದೀಗ ಅಂತಿಮ ಅಧಿಸೂಚನೆಯ ಹೆಸರಿನಲ್ಲಿ ಗ್ರಾಮಗಳ ಸಂಖ್ಯೆಯನ್ನು 154ಕ್ಕೆ ಹೆಚ್ಚಿಸುವ ಪ್ರಯತ್ನ ನಡೆಯುತ್ತಿದೆ. ಸ್ಥಳೀಯ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಈ ವಿಚಾರದಲ್ಲಿ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ ಮಧು ಬಂಗಾರಪ್ಪ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಪಶ್ಚಿಮ ಘಟ್ಟದಲ್ಲಿ ಸಾವಿರಾರು ವರ್ಷಗಳಿಂದ ಜನರು ಬದುಕುತ್ತಿದ್ದಾರೆ. ಕೃಷಿ ಮಾಡುತ್ತಿದ್ದಾರೆ. ಅಡಕೆ, ಭತ್ತ, ಕಾಫಿ, ಮೆಣಸು ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ನಾವು ಪರಿಸರ ವಿರೋಧಿಗಳಲ್ಲ; ನಾವೇ ಪರಿಸರದ ಭಾಗ. ಪ್ರಕೃತಿಯೊಂದಿಗೆ ಬದುಕುತ್ತಿರುವವರು ನಮ್ಮ ಮಲೆನಾಡಿನ ರೈತರು ಎಂದರು. ಮಲೆನಾಡಿನ ರೈತರೊಂದಿಗೆ ಸರ್ಕಾರ ನಿಲ್ಲಲಿದೆ. ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮಕ್ಕೂ ಅವಕಾಶ ನೀಡುವುದಿಲ್ಲ. ಹೀಗಾಗಿ ಮಲೆನಾಡಿನ ರೈತರು ಆತಂಕಪಡಬಾರದು. ನಿಮ್ಮ ಜಮೀನು, ಕೃಷಿ ಮತ್ತು ಬದುಕಿನ ವಿಚಾರದಲ್ಲಿ ನಿಮ್ಮ ಸರ್ಕಾರ ನಿಮ್ಮ ಜೊತೆಗಿದೆ ಎಂದು ಭರವಸೆ ನೀಡಿದ್ದಾರೆ.
ವಿಶೇಷ ಅಧಿವೇಶನದಲ್ಲಿ ಸ್ಪಷ್ಟ ನಿಲುವು
ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಶೇಷ ಅಧಿವೇಶನ ಕರೆದಿರುವುದು ಮಹತ್ವದ ಬೆಳವಣಿಗೆಯಾಗಿದೆ. ಈ ಅಧಿವೇಶನದಲ್ಲಿ ಸರ್ಕಾರ ತನ್ನ ಸ್ಪಷ್ಟ ನಿಲುವನ್ನು ಮತ್ತೊಮ್ಮೆ ವ್ಯಕ್ತಪಡಿಸಲಿದೆ ಎಂದು ಹೇಳಿದರು.


Click it and Unblock the Notifications
