ಕಸ್ತೂರಿ ರಂಗನ್ ವರದಿ: 7ನೇ ಬಾರಿ ಕೇಂದ್ರದಿಂದ ಅಧಿಸೂಚನೆ! ಮಲೆನಾಡಿಗರ ಪರ ಎನ್ನುವ ಬಿಜೆಪಿಗರು ಸುಮ್ಮನಿರುವುದೇ?
ಶಿವಮೊಗ್ಗ: ಪಶ್ಚಿಮ ಘಟ್ಟಗಳ ರಕ್ಷಣೆ ನಮ್ಮ ಕರ್ತವ್ಯವಾಗಿದೆ. ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ರಾಜ್ಯದ ಬಿಜೆಪಿ ನಾಯಕರು ದೊಡ್ಡ ಮಾತುಗಳನ್ನು ಆಡುತ್ತಾರೆ. ಮಲೆನಾಡಿನ ರೈತರ ಪರವಾಗಿ ನಾವಿದ್ದೇವೆ ಎಂದು ಹೇಳುತ್ತಾರೆ. ಇತ್ತ ಕೇಂದ್ರ ಸರ್ಕಾರ ಒಂದರ ನಂತರ ಒಂದರಂತೆ ಈ ವರದಿಯ ಜಾರಿಗೆ ಬಗ್ಗೆ ಕರಡು ಅಧಿಸೂಚನೆ ಹೊರಡಿಸುತ್ತಿರುವುದು ಏಕೆ? ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಶ್ನಿಸಿದ್ದಾರೆ.
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲೆನಾಡಿಗರು ಹಾಗೂ ಕಸ್ತೂರಿ ರಂಗನ್ ವರದಿ ಕುರಿತು ಕೇಂದ್ರ ಬಿಜೆಪಿ ನಿಲು ಸ್ಪಷ್ಟವಾಗಬೇಕು. ಪಶ್ಚಿಮ ಘಟ್ಟ ನಮ್ಮ ಹೆಮ್ಮೆ, ನಮ್ಮ ಸಂಪತ್ತು. ಅದನ್ನು ರಕ್ಷಿಸಬೇಕೆಂಬುದರಲ್ಲಿ ಎರಡನೇ ಮಾತಿಲ್ಲ. ಆದರೆ ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಪರಿಸರದೊಂದಿಗೆ ಬದುಕುತ್ತಿರುವ ಮಲೆನಾಡಿನ ಜನರನ್ನೇ ಸಂಕಷ್ಟಕ್ಕೆ ಸಿಲುಕಿಸುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಖಡಕ್ ಎಚ್ಚರಿಕೆ ನೀಡಿದರು.

ಮಲೆನಾಡಿನ ರೈತರ ಪರವಾಗಿ ಇರುವುದಾಗಿ ಬಿಜೆಪಿ ನಾಯಕರು ಹೇಳುತ್ತಾರೆ. ಕಸ್ತೂರಿ ರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಈ ವರದಿಯ ಜಾರಿಗೆ ಸಂಬಂಧ ಅಧಿಸೂಚನೆ ಹೊರಡಿಸಿದ್ದು ಏಕೆ ಎಂದು ಪಕ್ಷದ ಕೇಂದ್ರ ನಾಯಕರನ್ನು ಪ್ರಶ್ನಿಸುವ ಧೈರ್ಯ ಇವರಿಲ್ಲ ಎಂದು ರಾಜ್ಯ ಬಿಜೆಪಿ ನಾಯಕರನ್ನು ಟೀಕಿಸಿದರು.
2014ರ ಆಗಸ್ಟ್ 27ರಂದು ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಸುಪ್ರೀಂ ಕೋರ್ಟ್ನ ಹಸಿರು ನ್ಯಾಯಾಧಿಕರಣಕ್ಕೆ ಅಫಿಡವಿಟ್ ಸಲ್ಲಿಸಿದ್ದು ಏಕೆ? ಇಂದು ಮಲೆನಾಡಿನ ಜನರ ಮುಂದೆ ಮೊಸಳೆ ಕಣ್ಣೀರು ಹಾಕುವವರು ಅಂದು ಏಕೆ ಮಾತನಾಡಲಿಲ್ಲ ಎಂದು ಪ್ರಶ್ನಿಸಿದರು.
ಅಧಿಸೂಚನೆಯನ್ನು ಕರ್ನಾಟಕ ತಿರಸ್ಕರಿಸಿದೆ
ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಯನ್ನು ನಾವು ಆರು ಬಾರಿಯೂ ಸ್ಪಷ್ಟವಾಗಿ ತಿರಸ್ಕರಿಸಿದ್ದೇವೆ. ರಾಜ್ಯ ವಿಧಾನಸಭೆಯಲ್ಲಿಯೂ ವರದಿಯನ್ನು ತಿರಸ್ಕರಿಸುವ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ. ಹೀಗಿದ್ದರೂ ಕೇಂದ್ರದ ಬಿಜೆಪಿ ಸರ್ಕಾರ ಮತ್ತೆ ಮತ್ತೆ ಕರಡು ಅಧಿಸೂಚನೆಗಳನ್ನು ಹೊರಡಿಸುತ್ತಿದೆ. ಇದೀಗ ಏಳನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿರುವುದು ಯಾವ ನ್ಯಾಯ ಎಂದು ಕೇಂದ್ರದ ವಿರುದ್ಧ ಕಿಡಿ ಕಾರಿದರು.
ಕೇಂದ್ರ ಸರ್ಕಾರದ ಈ ಕ್ರಮವನ್ನು ರಾಜ್ಯ ಸರ್ಕಾರ ಸ್ಪಷ್ಟವಾಗಿ ವಿರೋಧಿಸಿದೆ. ಈ ಸಂಬಂಧ ಚರ್ಚಿಸಲೆಂದೇ ಸಿಎಂ ಡಿಕೆ ಶಿವಕುಮಾರ್ ಅವರು ವಿಶೇಷ ಅಧಿವೇಶನ ಕರೆಯಲಿದ್ದಾರೆ. ಯಾವ ಕಾರಣಕ್ಕೂ ಈ ವರದಿ ಜಾರಿಗೆ ಅವಕಾಶ ನೀಡಬಾರದು, ಬಿಜೆಪಿಯವರು, ಕೇಂದ್ರ ಸರ್ಕಾರದವರು ಏನು ಬೇಕಾದರೂ ಮಾಡಿಕೊಳ್ಳಲಿ, ಇದಕ್ಕೆ ನಾವೇ ಬೇಕಾದರೂ ನ್ಯಾಯಾಲಯಕ್ಕೆ ಹೋಗಿ ಮಲೆನಾಡಿನ ಜನರನ್ನು ರಕ್ಷಿಸೋಣ ಎಂದು ಅವರು ಕರೆ ಕೊಟ್ಟರು.
ಬಿಜೆಪಿ ಸಂಸದರು ಮಾಡುತ್ತಿರುವುದೇನು?
ಕಸ್ತೂರಿ ರಂಗನ್ ವರದಿ ಕುರಿತು 2016ರ ಆಗಸ್ಟ್ 11ರಂದು ಕೇಂದ್ರ ಸರ್ಕಾರ ಕರೆದಿದ್ದ ಮಹತ್ವದ ಸಭೆಗೆ ಶಿವಮೊಗ್ಗದ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಅಂದಿನ ಉಡುಪಿ-ಚಿಕ್ಕಮಗಳೂರು ಸಂಸದೆಯಾಗಿದ್ದ ಶೋಭಾ ಕರಂದ್ಲಾಜೆ ಅವರು ಭಾಗವಹಿಸಿರಲಿಲ್ಲ. ಮಲೆನಾಡಿನ ಎರಡು ಪ್ರಮುಖ ಜಿಲ್ಲೆಗಳ ಜನರ ಬದುಕಿನ ಮೇಲೆ ಪರಿಣಾಮ ಬೀರುವ ಇಂತಹ ಮಹತ್ವದ ವಿಚಾರದ ಸಭೆಗೆ ಸಂಸದರು ಗೈರಾಗಿದ್ದೇಕೆ? ಸಭೆಗೆ ಹೋಗದೆ ಬೇಜವಾಬ್ದಾರಿಯಿಂದ ನಡೆದುಕೊಂಡರೆ, ಮಲೆನಾಡಿನ ಜನರ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುವವರಾದರೂ ಯಾರು? ಎಂದು ಕಿಡಿ ಕಾರಿದರು.
ಗ್ರಾಮಗಳ ಸಂಖ್ಯೆ 154ಕ್ಕೆ ಏರಿಕೆ!
ಕೇಂದ್ರ ಸರ್ಕಾರ ಈ ಹಿಂದೆ ಹೊರಡಿಸಿದ್ದ ಆರು ಅಧಿಸೂಚನೆಗಳಲ್ಲಿ ತೀರ್ಥಹಳ್ಳಿ ತಾಲ್ಲೂಕಿನ 139 ಗ್ರಾಮಗಳಿವೆ ಎಂದು ಪಟ್ಟಿ ನೀಡಲಾಗಿತ್ತು. ತೀರ್ಥಹಳ್ಳಿಯ ಜನರು ಹಾಗೂ ಕರ್ನಾಟಕ ಸರ್ಕಾರ ವಿರೋಧಿಸಿತ್ತು. ಆದರೆ ಇದೀಗ ಅಂತಿಮ ಅಧಿಸೂಚನೆಯ ಹೆಸರಿನಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಗ್ರಾಮಗಳ ಸಂಖ್ಯೆ 154ಕ್ಕೆ ಹೆಚ್ಚಿಸಲಾಗಿದೆ. ಇದರ ಕುರಿತು ಸ್ಥಳೀಯ ಶಾಸಕ ಆರಗ ಜ್ಞಾನೇಂದ್ರ ಅವರು ಏನು ಹೇಳುತ್ತಾರೆ? ಎಂದು ಕೇಳಿದರು.
ಮಲೆನಾಡಿನ ನೆಲ, ಕೃಷಿ, ಬದುಕು ಮತ್ತು ನಮ್ಮ ಭವಿಷ್ಯವನ್ನು ರಕ್ಷಿಸಿಕೊಳ್ಳುವ ಸಂಕಲ್ಪಮಾಡಿ, ಕಸ್ತೂರಿ ರಂಗನ್ ವರದಿ ಜಾರಿಯ ವಿರುದ್ಧ ನಾವು ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಈ ಸಂಬಂಧ ಈಗ ತೀರ್ಥಹಳ್ಳಿಯಲ್ಲಿ ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಮಲೆನಾಡಿಗರು ಪ್ರಕೃತಿಯ ಶತ್ರುಗಳಲ್ಲ
ಪಶ್ಚಿಮ ಘಟ್ಟದಲ್ಲಿ ಸಾವಿರಾರು ವರ್ಷಗಳಿಂದ ಜನರು ಬದುಕುತ್ತಿದ್ದಾರೆ. ಅವರು ಕೃಷಿ ಮಾಡುತ್ತಿದ್ದಾರೆ. ಅಡಿಕೆ, ಭತ್ತ, ಕಾಫಿ, ಮೆಣಸು ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಅವರ ಬದುಕು ಮತ್ತು ಪರಿಸರ ಪರಸ್ಪರ ವಿರೋಧಿಗಳಲ್ಲ. ಮಲೆನಾಡಿನ ಜನರು ಪ್ರಕೃತಿಯ ಶತ್ರುಗಳಲ್ಲ. ಅವರೇ ಪ್ರಕೃತಿಯೊಂದಿಗೆ ಬದುಕುತ್ತಿರುವವರು ಎಂದು ತಿಳಿಸಿದರು.
ಉಪಗ್ರಹ ಆಧಾರಿತ ನೈಸರ್ಗಿಕ ಭೂದೃಶ್ಯ ಹಾಗೂ ಸಾಂಸ್ಕೃತಿಕ ಭೂದೃಶ್ಯದ ಆಧಾರದ ಮೇಲೆ ಪ್ರದೇಶಗಳನ್ನು ಗುರುತಿಸುವಾಗ ಅಲ್ಲಿನ ಜನರ ಬದುಕು, ಕೃಷಿ ಹಾಗೂ ಜೀವನ ವಿಧಾನವನ್ನು ಸಮರ್ಪಕವಾಗಿ ಪರಿಗಣಿಸಲಾಗಿದೆಯೇ ಎಂಬ ಪ್ರಶ್ನೆ ಇದೆ. ಯಾವುದೇ ಸಮಿತಿ ಗ್ರಾಮಗಳಿಗೆ ತೆರಳಿ ಜನರ ಅಭಿಪ್ರಾಯ ಪಡೆದಿರುವ ಮಾಹಿತಿ ಇಲ್ಲ. ಕನಿಷ್ಠ ತಾಲ್ಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸ್ಥಳೀಯ ವಾಸ್ತವಾಂಶಗಳನ್ನು ಪರಿಶೀಲಿಸಲಾಗಿದೆಯೇ ಎಂಬುದೂ ಸ್ಪಷ್ಟವಾಗಿಲ್ಲ. ಕಚೇರಿಯಲ್ಲಿ ಕುಳಿತು ನಕ್ಷೆ ನೋಡಿ ಮಲೆನಾಡಿನ ಬದುಕನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ತಂದೆ ಬಂಗಾರಪ್ಪ ಅವರು ಕಾವೇರಿ ನೀರು ವಿಚಾರವಾಗಿ ವಿಶೇಷ ಅಧಿವೇಶನ ಕರೆದಿದ್ದರು. ಇಂದು ನಾನು ಬಂಗಾರಪ್ಪ ಅವರ ಶಿಷ್ಯ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅವರದ್ದೇ ಹಾದಿಯಲ್ಲಿ ನಡೆದು ಕಸ್ತೂರಿ ರಂಗನ್ ವಿಚಾರವಾಗಿ ವಿಶೇಷ ಅಧಿವೇಶನ ಕರೆದಿದ್ದು ಎಂದರು.
ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಕೆಲಸ ಮಾಡಿದ್ದು ನನ್ನ ಭಾಗ್ಯ. ನಮ್ಮ ತಂದೆಯವರ ಕೈಯಲ್ಲಿ ಸಚಿವರಾಗಿ ಡಿ.ಕೆ. ಶಿವಕುಮಾರ್ ಅವರು ಕೆಲಸ ಮಾಡಿದ್ದರು. ಇಂದು ನಾನು ಡಿ.ಕೆ. ಶಿವಕುಮಾರ್ ಅವರ ಅಡಿಯಲ್ಲಿ ಕೆಲಸ ಮಾಡುತ್ತಿರುವುದು ಹೆಮ್ಮೆಯ ಸಂಗತಿ
ಶಿಕ್ಷಕರು 'Tr.' ಬಳಸುವುದಕ್ಕೆ ಟೀಕೆ ಸರಿಯಲ್ಲ
ರಾಜ್ಯದ ಎಲ್ಲಾ ಶಿಕ್ಷಕರು ತಮ್ಮ ಹೆಸರಿನ ಹಿಂದೆ ಹೆಮ್ಮೆಯಿಂದ 'Tr.' (Teacher) ಎಂಬ ಪೂರ್ವಪ್ರತ್ಯಯವನ್ನು ಬಳಸಲು ಅಧಿಕೃತವಾಗಿ ಅನುಮತಿ ನೀಡಲಾಗಿದೆ. ಶಿಕ್ಷಕರಿಗೆ ಗೌರವ ಸೂಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಇದನ್ನು ಟೀಕಿಸುವುದು ಸರಿಯಲ್ಲ ಎಂದು ಮಧು ಬಂಗಾರಪ್ಪ ಹೇಳಿದರು.
ಇಲಾಖೆ ಈ ಗೌರವ ನೀಡುವ ಸಂಬಂಧ ಈಗಾಗಲೇ ಆದೇಶ ಹೊರಡಿಸಿದೆ. ಪ್ರೊಫೆಸರ್ ಗಳಿಗೆ ಗೌರವ ಇದೆ. ಜ್ಞಾನವನ್ನು ಧಾರೆ ಎರೆಯುವ ಶಿಕ್ಷಕರಿಗೂ ನಾವು ಈ ಗೌರವ ನೀಡಬೇಕೆಂದು ಈ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.


Click it and Unblock the Notifications
