CET Exam 2025: ಸಿಇಟಿ ಪರೀಕ್ಷೆ-2025 ವೇಳಾಪಟ್ಟಿ ಪ್ರಕಟಿಸಿದ ಕೆಇಎ
ಬೆಂಗಳೂರು, ಜನವರಿ 16: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)-2025ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪರೀಕ್ಷೆ ಬರೆಯಲು ಬಯಸುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಜನವರಿ 23 ರಿಂದ ಫೆಬ್ರವರಿ 21ರ ತನಕ ಅರ್ಜಿ ಸಲ್ಲಿಕೆ ಮಾಡಿ ನೋಂದಣಿ ಮಾಡಿಕೊಳ್ಳಬಹುದು. ಇಂಜಿನಿಯರಿಂಗ್, ಪಶು ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಗುರುವಾರ ಸಿಇಟಿ-2025ರ ವೇಳಾಪಟ್ಟಿಯನ್ನು ಘೋಷಣೆ ಮಾಡಿದರು. 2025ನೇ ಸಾಲಿನ ಸಿಇಟಿ ಪರೀಕ್ಷೆ ಏಪ್ರಿಲ್ 16, 17ರಂದು ನಡೆಯಲಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.

ಪರೀಕ್ಷೆ ವೇಳಾಪಟ್ಟಿ
* ಏಪ್ರಿಲ್ 16ರಂದು ಬೆಳಗ್ಗೆ 10.30ಕ್ಕೆ ಭೌತವಿಜ್ಞಾನ, ಮಧ್ಯಾಹ್ನ 2.30ಕ್ಕೆ ರಸಾಯನ ವಿಜ್ಞಾನ
* ಏಪ್ರಿಲ್ 17ರಂದು ಬೆಳಗ್ಗೆ ಗಣಿತ, ಮಧ್ಯಾಹ್ನ ಜೀವ ವಿಜ್ಞಾನ
* ಏಪ್ರಿಲ್ 18ರಂದು ಹೊರನಾಡು, ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ
ಸಚಿವ ಡಾ. ಎಂ. ಸಿ. ಸುಧಾಕರ್ ಯೋಗ ಮತ್ತು ನ್ಯಾಚುರೋಪತಿ, ಬಿ-ಫಾರ್ಮ ಮತ್ತು ಫಾರ್ಮ-ಡಿ, ಕೃಷಿ ವಿಜ್ಞಾನ ಕೋರ್ಸ್ ಮತ್ತು ಬಿಎಸ್‌ಸಿ (ನರ್ಸಿಂಗ್) ಕೋರ್ಸ್‌ಗಳ ಪ್ರವೇಶಕ್ಕೂ ಸಿಇಟಿ ಪರೀಕ್ಷೆಯ ಅಂಕಗಳನ್ನು ಪರಿಗಣಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸಿಇಟಿ ಪರೀಕ್ಷೆಗೆ ಅರ್ಜಿಯು ಸಾಮಾನ್ಯವಾಗಿರುತ್ತದೆ. ಆದ್ದರಿಂದ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಪ್ರವೇಶಾತಿಗೂ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಾಯಿಸಿಕೊಂಡು ಅರ್ಜಿ ಶುಲ್ಕ ಪಾವತಿ ಮಾಡಬೇಕು. ಆರ್ಕಿಟೆಕ್ಚರ್, ಬಿಪಿಟಿ, ಬಿಪಿಒ, ಬಿಎಸ್‌ಸಿ ಅಲೈಡ್, ಹೆಲ್ತ್‌ಸೈನ್ಸ್ ಕೋರ್ಸ್‌ಗಳ ಪ್ರವೇಶಾತಿಗೆ ಸಹ ಇದೇ ಅರ್ಜಿ ಅನ್ವಯವಾಗಲಿದೆ ಎಂದು ಕೆಇಎ ಹೇಳಿದೆ.
ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡುವ ವಿಧಾನದಲ್ಲಿ ಈ ಬಾರಿ ಹಲವು ಬದಲಾವಣೆ ಮಾಡಲಾಗಿದೆ. ಯಾರ ಅರ್ಜಿಯನ್ನು ಇನ್ಯಾರೋ ಭರ್ತಿ ಮಾಡಲಾಗದು. ಲಾಗಿನ್ ಮಾಡುವಾಗ ಅಭ್ಯರ್ಥಿಗಳು ಮೊಬೈಲ್ ನಂಬರ್ ನಮೂದಿಸಿ, ಒಟಿಪಿ ಹಾಕಿದ ಬಳಿಕವೇ ಅರ್ಜಿ ಭರ್ತಿ ಮಾಡಲು ಅವಕಾಶ ನೀಡಲಾಗುತ್ತದೆ.
ಒಬ್ಬ ಅಭ್ಯರ್ಥಿ ಒಂದು ಮೊಬೈಲ್ ಸಂಖ್ಯೆಯನ್ನು ಮಾತ್ರ ಉಪಯೋಗಿಸಬಹುದು. ಮೊಬೈಲ್ ಸಂಖ್ಯೆ ಬದಲಾವಣೆಯನ್ನು ಯಾವುದೇ ಹಂತದಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅಭ್ಯರ್ಥಿಗಳು ನೀಡುವ ಜಾತಿ/ ಆದಾಯ/ 371 (ಜೆ) ಸಂಖ್ಯೆಯ ಆಧಾರದ ಮೇಲೆ ಮೀಸಲಾತಿ ವಿವರಗಳನ್ನು ನೀಡಲಾಗುತ್ತದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲಾ ಪಿಯುಸಿ ಕಾಲೇಜುಗಳಿಗೆ ಲಾಗಿನ್ ನೀಡಿ ಅಭ್ಯರ್ಥಿಗಳಿಂದ ಭರ್ತಿ ಮಾಡಿದ ಅರ್ಜಿಗಳನ್ನು ಪರಿಶೀಲಿಸಲು ಸೂಚಿಸಿದೆ. ಕಾಲೇಜಿನವರು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಿವರಗಳನ್ನು ಪಡೆದು ಪರಿಶೀಲನೆ ಮಾಡಲು ತಂತ್ರಾಂಶವನ್ನು ಸಿದ್ಧಗೊಳಿಸಲಾಗಿದೆ. ಅಭ್ಯರ್ಥಿಗಳು ಬಿಇಒ ಕಛೇರಿಗೆ ಭೇಟಿ ನೀಡುವ ಅವಶ್ಯಕತೆ ಇರುವುದಿಲ್ಲ.
ಎನ್‌ಸಿಸಿ, ಕ್ರೀಡೆ, ಸೈನಿಕ, ಮಾಜಿ ಸೈನಿಕ ಸೇರಿದಂತೆ ವಿಶೇಷ ವರ್ಗಗಳ ಅಡಿ ಮೀಸಲಾತಿ ಬಯಸುವ ಅಭ್ಯರ್ಥಿಗಳು ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಕೆಇಎನಲ್ಲಿ ಖುದ್ದಾಗಿ ಸಲ್ಲಿಸಲು ಪ್ರತ್ಯೇಕವಾಗಿ ಪರೀಕ್ಷೆ ದಿನಾಂಕಗಳನ್ನು ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.











Click it and Unblock the Notifications