ಕೊಡಗು ಪ್ರವಾಹ : ಪರಿಸ್ಥಿತಿ ಮಾಹಿತಿ ಪಡೆದ ರಾಷ್ಟ್ರಪತಿಗಳು
ಬೆಂಗಳೂರು, ಆಗಸ್ಟ್ 19 : ಕೊಡಗು ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಬಗ್ಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ವಿವರ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಸಹ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ದೂರವಾಣಿ ಕರೆ ಮಾಡಿ ಕೊಡಗು ಜಿಲ್ಲೆಯ ಪರಿಸ್ಥಿತಿ ಕುರಿತು ಮಾಹಿತಿ ಪಡೆದರು. ರಾಷ್ಟ್ರಪತಿಗಳ ಕಳಕಳಿಗೆ ಮುಖ್ಯಮಂತ್ರಿಗಳು ಕೃತಜ್ಞತೆ ಸಲ್ಲಿಸಿದರು.

ಕೊಡಗು ಜಿಲ್ಲಾಡಳಿತವು ರಕ್ಷಣೆ ಹಾಗೂ ಪರಿಹಾರವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದೆ. ಸೇನಾ ಸಿಬ್ಬಂದಿ, ಎನ್.ಡಿ.ಆರ್.ಎಫ್. ಮತ್ತಿತರ ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು ಈವರೆಗೆ 3500 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.
ವೈಮಾನಿಕ ಸಮೀಕ್ಷೆ : ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಭಾನುವಾರ ಕೊಡಗಿನಲ್ಲಿ ಸುಮಾರು ಒಂದು ಗಂಟೆ 15 ನಿಮಿಷಗಳ ಕಾಲ ವೈಮಾನಿಕ ಸಮೀಕ್ಷೆ ನಡೆಸಿದರು. ಮೈಸೂರು ವಿಮಾನ ನಿಲ್ದಾಣದಿಂದ ಹೊರಟ ಅವರು ಸೋಮವಾರಪೇಟೆ, ಶುಂಠಿ ಕೊಪ್ಪ, ಮಾದಾಪುರ, ಮುಕ್ಕೋಡ್ಲು, ಹಾರಂಗಿ ಹಿನ್ನೀರು ಪ್ರದೇಶ, ಸಿದ್ದಾಪುರ, ಕುಶಾಲನಗರ ಸುತ್ತಮುತ್ತಲಿನ ಪ್ರದೇಶಗಳ ಸಮೀಕ್ಷೆ ನಡೆಸಿದರು.
ನಂತರ ಪಿರಿಯಾಪಟ್ಟಣ ಹೆಲಿಪ್ಯಾಡ್‌ನಲ್ಲಿ ಇಳಿದು ಮಡಿಕೇರಿಗೆ ತೆರಳಿದರು. ಮಾರ್ಗಮಧ್ಯದಲ್ಲಿ ಮಳೆಹಾನಿಗೆ ಒಳಗಾದ ಕೆಲವು ಸ್ಥಳ ಪರಿಶೀಲನೆ ನಡೆಸಿದರು.












Click it and Unblock the Notifications