Breaking: ಸಿದ್ದರಾಮಯ್ಯ ಪರ ಸುದ್ದಿಗೋಷ್ಠಿಯಲ್ಲಿ ಹೃದಯಾಘಾತ: ಕುರುಬ ಸಂಘದ ಅಧ್ಯಕ್ಷ ಸಾವು
ಬೆಂಗಳೂರು, ಆಗಸ್ಟ್ 19: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರ ನಡೆ ಖಂಡಿಸಿ ಸಿಎಂ ಸಿದ್ದರಾಮಯ್ಯ ಪರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ತೀವ್ರ ಒತ್ತಾಯಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಹಾಗೂ ಇತರ ಕೆಲವು ಸಂಘಟನೆಗಳು ಸಿದ್ದರಾಮಯ್ಯ ಪರ ನಿಂತಿದ್ದು, ರಾಜ್ಯದ ಅನೇಕ ಕಡೆಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಸಂಘದ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಗುತ್ತಿತ್ತು. ಈ ವೇಳೆ ಕೋಲಾರ ಕುರುಬ ಸಂಘದ ಅಧ್ಯಕ್ಷ ಸಿ.ಕೆ.ರವಿಚಂದ್ರನ್ ಅವರಿಗೆ ಹೃದಯಾಘಾತವಾಗಿದ್ದು, ಮಾತನಾಡುತ್ತಲೇ ಕುಸಿದು ಬಿದ್ದಿದ್ದಾರೆ.
ಕೂಡಲೇ ಸಿ.ಕೆ.ರವಿಚಂದ್ರನ್ ಅವರನ್ನು ಹತ್ತಿರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪೋರ್ಟಿಸ್ ಆಸ್ಪತ್ರೆಗೆ ರವಾನಿಸಲಾಯಿತಾದರೂ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಕೋಲಾರ ಕುರುಬ ಸಂಘದ ಅಧ್ಯಕ್ಷ ಆಗಿದ್ದ ಸಿ.ಕೆ.ರವಿಚಂದ್ರನ್ ಅವರು ಕಾಂಗ್ರೆಸ್ ಕಾರ್ಯಕರ್ತ ಕೂಡ ಆಗಿದ್ದು, ಸಿದ್ದರಾಮಯ್ಯ ಪರ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಲು ಬೆಂಗಳೂರಿಗೆ ಆಗಮಿಸಿದ್ದರು ಎನ್ನಲಾಗಿದೆ.












Click it and Unblock the Notifications