ಲೋಕಸಭೆ ಚುನಾವಣೆ; ಕೆಪಿಸಿಸಿ ಪ್ರಚಾರ ಸಮಿತಿ ರಚನೆ
ಬೆಂಗಳೂರು, ಮಾರ್ಚ್ 24: ಲೋಕಸಭೆ ಚುನಾವಣೆ 2024 ವೇಳಾಪಟ್ಟಿ ಘೋಷಣೆಯಾಗಿದೆ. ಕರ್ನಾಟಕದ 28 ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್.
ಎಐಸಿಸಿ ರಾಜ್ಯದಲ್ಲಿ ಚುನಾವಣಾ ಪ್ರಚಾರವನ್ನು ನಡೆಸಲು ಚುನಾವಣಾ ಪ್ರಚಾರ ಸಮಿತಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಈ ಸಮಿತಿಯ ಅಧ್ಯಕ್ಷರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಚುನಾವಣಾ ಪ್ರಚಾರ ಸಮಿತಿಗೆ ರಾಜ್ಯಸಭಾ ಸದಸ್ಯ ಡಾ. ಎಲ್. ಹನುಂತಯ್ಯ ಸಮಿತಿಯ ಸಹ-ಅಧ್ಯಕ್ಷರು. ಶಿವಾಜಿನಗರದ ಶಾಸಕ ರಿಜ್ವಾನ್ ಅರ್ಷದ್ ಉಪಾಧ್ಯಕ್ಷರು.
ಅಲ್ಲದೇ ಕಾಂಗ್ರೆಸ್ ಪಕ್ಷ ಎಐಸಿಸಿ ಮಟ್ಟದಲ್ಲಿ ಚುನಾವಣಾ ಪ್ರಚಾರದ ಸಮನ್ವಯ ಸಾಧಿಸಲು ಇಬ್ಬರು ಸದಸ್ಯರ ಸಮಿತಿ ರಚನೆ ಮಾಡಿದೆ. ಈ ಸಮಿತಿಯಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಮನೀಶ್ ಚಾತ್ರಾ ಇದ್ದಾರೆ.
ಕಾಂಗ್ರೆಸ್ ದಕ್ಷಿಣ ಭಾರತದಲ್ಲಿ ಅಧಿಕಾರದಲ್ಲಿರುವ ರಾಜ್ಯಗಳು ಕರ್ನಾಟಕ, ತೆಲಂಗಾಣ ಮಾತ್ರ. ಆದ್ದರಿಂದ ಎರಡೂ ರಾಜ್ಯಗಳಲ್ಲಿ ಅತಿ ಹೆಚ್ಚಿನ ಸೀಟುಗಳನ್ನು ಗೆಲ್ಲಬೇಕು ಎಂಬುದು ಪಕ್ಷದ ಲೆಕ್ಕಾಚಾರವಾಗಿದೆ. ಆದ್ದರಿಂದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಸಹ ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಲಿದ್ದಾರೆ. ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಶೀಘ್ರವೇ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಲಿದೆ.
ಮಲ್ಲಿಕಾರ್ಜುನ ಖರ್ಗೆಗೆ ಸವಾಲು: 2024ರ ಲೋಕಸಭೆ ಚುನಾವಣೆ ಕರ್ನಾಟಕದ ಕಲಬುರಗಿ ಮೂಲದ ಮಲ್ಲಿಕಾರ್ಜುನ ಖರ್ಗೆಗೆ ಬಹುದೊಡ್ಡ ಸವಾಲು. ತಮ್ಮ ತವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದು 28 ಕ್ಷೇತ್ರಗಳ ಪೈಕಿ 20 + ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಪಕ್ಷಕ್ಕೆ ಕೊಡುಗೆ ನೀಡಬೇಕಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 28 ಕ್ಷೇತ್ರಗಳ ಪೈಕಿ ಕೇವಲ ಒಂದು (ಬೆಂಗಳೂರು ಗ್ರಾಮಾಂತರ) ಗೆದ್ದು ಭಾರೀ ಮುಖಭಂಗ ಅನುಭವಿಸಿತ್ತು. ಆದರೆ ಈ ಸಲ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಆದ್ದರಿಂದ ವಿಧಾನಸಭೆ ಚುನಾವಣೆ ಮುಗಿದ ಕೂಡಲೇ ಪಕ್ಷ ಲೋಕಸಭೆ ಚುನಾವಣೆ ತಯಾರಿ ಆರಂಭಿಸಿದೆ.
ಸಚಿವರಿಗೆ ವಿವಿಧ ಕ್ಷೇತ್ರಗಳ ಉಸ್ತುವಾರಿಯನ್ನು ಹಂಚಿದೆ. ಅಲ್ಲದೇ ಹಲವು ಸಚಿವರ ಮಕ್ಕಳಿಗೆ ಟಿಕೆಟ್ ನೀಡಿ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಿಕೊಂಡು ಬನ್ನಿ ಎಂದು ಟಾಸ್ಕ್ ನೀಡಿದೆ. ಆದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್‌ನ ಪ್ರಚಾರ ಅಬ್ಬರದಿಂದ ಕೂಡಿರುವ ನಿರೀಕ್ಷೆ ಇದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತು ಸಚಿವರು ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ. ಚುನಾವಣಾ ಆಯೋಗ ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣೆ ನಡೆಸುತ್ತಿರುವುದು ನಾಯಕರಿಗೆ ಪ್ರಚಾರ ನಡೆಸಲು ಸಹ ಅನುಕೂಲ ಮಾಡಿಕೊಟ್ಟಿದೆ.
ಮೊದಲ ಹಂತದಲ್ಲಿ ಏಪ್ರಿಲ್ 26ರಂದು 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 2ನೇ ಹಂತದಲ್ಲಿ ಉಳಿದ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಆದರೆ ಚುನಾವಣಾ ಫಲಿತಾಂಶ ಪ್ರಕಟವಾಗುವುದು ಜೂನ್ 4ರಂದು.
ಕಾಂಗ್ರೆಸ್ ನಾಯಕ ಕರ್ನಾಟಕದ ಪಕ್ಕದ ಕೇರಳದ ವಯನಾಡಿನಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಕರ್ನಾಟಕ, ತೆಲಂಗಾಣದಲ್ಲಿ ಕಾಂಗ್ರೆಸ್ ಆಡಳಿತವಿದೆ. ಆದ್ದರಿಂದ ದಕ್ಷಿಣ ಭಾರತದಿಂದ ಹೆಚ್ಚು ಸೀಟುಗಳನ್ನು ಕಾಂಗ್ರೆಸ್ ಗೆಲ್ಲಬೇಕಿದೆ.
ಈಗಾಗಲೇ ಪಕ್ಷ ಚುನಾವಣಾ ಪ್ರಚಾರದ ರೂಪುರೇಷೆ ತಯಾರು ಮಾಡಿದೆ. ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಈಗಾಗಲೇ ಅಭ್ಯರ್ಥಿಗಳು ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ರಾಜ್ಯ ಮಟ್ಟದ ನಾಯಕರು ಇನ್ನೂ ಚುನಾವಣಾ ಪ್ರಚಾರವನ್ನು ಆರಂಭಿಸಿಲ್ಲ.












Click it and Unblock the Notifications