CM Siddaramaiah: ಸಿಎಲ್ಪಿ ನಾಯಕನಾಗಿ ಸಿದ್ದರಾಮಯ್ಯ ಆಯ್ಕೆ; ಡಿಕೆಶಿಯಿಂದಲೇ ಹೆಸರು ಘೋಷಣೆ
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳೊಂದಿಗೆ ಪೂರ್ಣ ಬಹುಮತ ಗಳಿಸಿರುವ ಕಾಂಗ್ರೆಸ್ ಪಕ್ಷ, ಭಾನುವಾರ, ಮೇ 20ರಂದು ನೂತನ ಸರ್ಕಾರ ರಚಿಸಲಿದೆ. ಸಿದ್ದರಾಮಯ್ಯ ಅವರನ್ನು ಅಧಿಕೃತವಾಗಿ ಸಿಎಂ ಎಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಘೋಷಣೆ ಮಾಡಲಾಗಿದೆ.
ಗುರುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಖುದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೇ ಹೆಸರು ಘೋಷಣೆ ಮಾಡುವ ಮೂಲಕ ಪಕ್ಷದಲ್ಲಿ ಒಗ್ಗಟ್ಟು ಮೂಡಿಸುವ ಪ್ರಯತ್ನವೂ ನಡೆಯಿತು.

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದರು. ಬಳಿಕ ಸಿದ್ದರಾಮಯ್ಯನವರ ಕೈ ಕುಲುಕಿ ಹೂಗುಚ್ಚ ನೀಡಿ ಅಭಿನಂದಿಸಿದರು.
ಅನಂತರ ಡಿ.ಕೆ. ಶಿವಕುಮಾರ್ ಅವರನ್ನು ಉಪ ಮುಖ್ಯಮಂತ್ರಿ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಈ ಮೂಲಕ ನಾವು ಒಗ್ಗಟ್ಟಾಗಿದ್ದೇವೆ ಎಂಬ ಸಂದೇಶವನ್ನು ರಾಜ್ಯಕ್ಕೆ ನೀಡಿದರು. ಇದಕ್ಕೂ ಮುನ್ನ ಶಾಸಕಾಂಗ ಸಭೆ ಆರಂಭವಾದಾಗ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ದೂರ ದೂರ ಕುಳಿತಿದ್ದರು.
ಈ ವೇಳೆ ಮೊದಲು ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, "ರಾಜ್ಯದಲ್ಲಿ ಸರ್ಕಾರ ತರುವಲ್ಲಿ ಟೀಂ ಕಾಂಗ್ರೆಸ್ ದೊಡ್ಡ ಪಾತ್ರ ವಹಿಸಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಸಮರ್ಥವಾಗಿ ಮುನ್ನಡೆಸಿದ್ದಾರೆ. ಇದು ದೊಡ್ಡ ಮಟ್ಟದ ಗೆಲುವು. ಕರ್ನಾಟಕದ ಜನ, ನಮ್ಮ ಕಾರ್ಯಕರ್ತರನ್ನು ಮರೆಯದಿರಿ. ಸಿದ್ದರಾಮಯ್ಯ ಸಿಎಂ, ಡಿ.ಕೆ. ಶಿವಕುಮಾರ್ ಡಿಸಿಎಂ ಎಂದು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಿದೆ. ಸರ್ವಾನುಮತದಿಂದ ಆಯ್ಕೆ ಮಾಡೋಣ," ಎಂದು ನೂತನ ಶಾಸಕರಲ್ಲಿ ವಿನಂತಿಸಿದರು.

ಆ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಮಂಡಿಸಿದರು. ಇದಕ್ಕೆ ಎಲ್ಲ ಶಾಸಕರು ಅನುಮೋದನೆ ಮಾಡಿದರು. ಕೇವಲ 25 ನಿಮಿಷಗಳಲ್ಲಿ ಸಭೆ ಮುಕ್ತಾಯವಾಯಿತು.
ಶಾಸಕಾಂಗ ಪಕ್ಷದ ಸಭೆಯಲ್ಲಿ ಎಐಸಿಸಿ ವೀಕ್ಷಕರಾದ ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಹಿರಿಯ ಶಾಸಕರಾದ ಆರ್‌ವಿ ದೇಶಪಾಂಡೆ, ಶಿವಾನಂದ ಪಾಟೀಲ್, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ ಸೇರಿದಂತೆ ಬಹುತೇಕ ಎಲ್ಲ ಶಾಸಕರು ಹಾಜರಿದ್ದರು.












Click it and Unblock the Notifications