ಕಾಂಗ್ರೆಸ್ ಶಾಸಕ ಭೀಮಾ ನಾಯಕ್‌ಗೆ ಶೋಕಾಸ್ ನೋಟಿಸ್
ಬೆಂಗಳೂರು, ಜೂನ್ 28 : ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಭೀಮಾ ನಾಯಕ್ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಶೋಕಾಸ್ ನೋಟಿಸ್ ಜಾರಿಗೊಳಿಸಿದೆ. ಸಚಿವರ ವಿರುದ್ಧ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ನೋಟಿಸ್ ಕೊಡಲಾಗಿದೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಅವರು ಪಕ್ಷ ವಿರೋಧಿ ಚಟುವಟಿಕೆಯ ಹಿನ್ನಲೆಯಲ್ಲಿ ಭೀಮಾ ನಾಯಕ್ ಅವರಿಗೆ ನೋಟಿಸ್ ನೀಡಿದ್ದಾರೆ. ಒಂದು ವಾರದಲ್ಲಿ ಉತ್ತರ ನೀಡದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
'ಮುಜರಾಯಿ ಸಚಿವ ಪರಮೇಶ್ವರ ನಾಯ್ಕ್ ಅವರು ಕಮಿಷನ್ ದಂಧೆ ನಡೆಸುತ್ತಿದ್ದಾರೆ. ಅವರು ನಾಲಾಯಕ್' ಎಂದು ಶಾಸಕ ಭೀಮಾ ನಾಯಕ್ ಅವರು ಟೀಕಿಸಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ನೋಟಿಸ್ ಜಾರಿಗೊಳಿಸಲಾಗಿದೆ.

ನಿಮ್ಮ ನಡವಳಿಕ ಪಕ್ಷ ವಿರೋಧಿಯಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಪಕ್ಷದ ತತ್ವ-ಸಿದ್ಧಾಂತಕ್ಕೆ ವಿರುದ್ಧವಾಗಿ ಬಹಿರಂಗ ಹೇಳಿಕೆ ನೀಡಿದ್ದು, ನಿಮ್ಮ ವಿರುದ್ಧ ಶಿಸ್ತು ಕ್ರಮಮವನ್ನು ಏಕೆ ಕೈಗೊಳ್ಳಬಾರದು ಎಂದು ನೋಟಿಸ್‌ನಲ್ಲಿ ಪ್ರಶ್ನಿಸಲಾಗಿದೆ.
ಶಾಸಕ ಭೀಮಾ ನಾಯಕ್ ಅವರು ಹಗರಿಬೊಮ್ಮನಹಳ್ಳಿಯ ಮಾಲವಿ ಜಲಾಶಯದ ಕಾಮಗಾರಿ ಬಗ್ಗೆ ಮಾತನಾಡುತ್ತಾ, 'ಸಚಿವ ಪರಮೇಶ್ವರ ನಾಯ್ಕ್ ಅವರು ಜಲಾಶಯ ಕಾಮಗಾರಿಗೆ ಅಡ್ಡಿ ಪಡಿಸುತ್ತಿದ್ದಾರೆ. ಅವರು ಕಮಿಷನ್ ಧಂಧೆ ನಡೆಸುತ್ತಿದ್ದಾರೆ' ಎಂದು ಆರೋಪಿಸಿದ್ದರು.











Click it and Unblock the Notifications