KPS ಶಾಲೆಗಳಿಗೆ 2027ರಿಂದ ಉಚಿತ ಶಾಲಾ ವಾಹನ ಸೌಲಭ್ಯ: ಮಧು ಬಂಗಾರಪ್ಪ ಘೋಷಣೆ

ಸೊರಬ: ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಶೀಘ್ರದಲ್ಲೇ ತೆರೆಯಲಿದೆ. ಮುಂದಿನ ವರ್ಷದಿಂದ ಕನ್ನಡ ಮತ್ತು ಇಂಗ್ಲಿಷ್ ದ್ವಿಭಾಷಾ ನೀತಿ ಜಾರಿಗೊಳಿಸಲಿರುವ ರಾಜ್ಯ ಸರ್ಕಾರ ಅಗತ್ಯ ಅನುದಾನ ಮೀಸಲಿಟ್ಟಿದೆ. ವಿಶೇವೆಂದರೆ 2027ರಿಂದ ಕೆಪಿಎಸ್ ಶಾಲೆಗಳಿಗೆ ಉಚಿತ ಶಾಲಾವಾಹನಗಳು ಓಡಾಲಿವೆ. ಈ ಕುರಿತು ಖುದ್ದಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೇ ಮಾಹಿತಿ ನೀಡಿದ್ದಾರೆ.

ಭಾನುವಾರ ಸೊರಬ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಸಾಗರ ತಾಲ್ಲೂಕಿನ ತಾಳಗುಪ್ಪ ಹೋಬಳಿ ವ್ಯಾಪ್ತಿಯಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಇಂದು ಸುಮಾರು ₹2 ಕೋಟಿ ಅನುದಾನದಲ್ಲಿ ವಿವಿಧ ಗ್ರಾಮಗಳ ರಸ್ತೆ ಅಭಿವೃದ್ಧಿ ಮತ್ತು ವಿವಿಧ ಕಾಮಗಾರಿಗಳಿಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರೂ ಆದ ಶ್ರೀ ಮಧು ಬಂಗಾರಪ್ಪ ಅವರು ಶಂಕುಸ್ಥಾಪನೆ ನೆರವೇರಿಸಿದರು.

KPS Schools

ಕೆಪಿಎಸ್ ಶಾಲೆಗಳಿಗೆ ಉಚಿತ ಶಾಲಾ ವಾಹನ

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾರಿಗೆ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಿದರು. ನಾನು ಎಲ್ಲಿಗೆ ಹೋದರೂ ಸರ್ಕಾರಿ ಶಾಲಾ ಮಕ್ಕಳಿಗೆ ಬಸ್ ವ್ಯವಸ್ಥೆಯ ಸಮಸ್ಯೆ ಗಮನಕ್ಕೆ ಬರುತ್ತಿದೆ. ಇನ್ನು ಮುಂದೆ ಈ ಸಮಸ್ಯೆ ಇರಬಾರದು ಎಂಬ ಉದ್ದೇಶದಿಂದ ಮುಂದಿನ ವರ್ಷದಿಂದ ಕೆಪಿಎಸ್ ಶಾಲೆಗಳಿಗೆ ವಿಶೇಷ ಶಾಲಾ ವಾಹನಗಳ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲು ತೀರ್ಮಾನಿಸಿದ್ದೇವೆ ಎಂದು ಘೋಷಿಸಿದರು.

ನಿಮ್ಮ ಒಂದು ಮತ ನನಗೆ 1 ಕೋಟಿ 14 ಲಕ್ಷ ಮಕ್ಕಳ ಸೇವೆ ಮಾಡುವ ಭಾಗ್ಯ ಕಲ್ಪಿಸಿದೆ. ರಾಜ್ಯದಲ್ಲಿ 44 ಸಾವಿರ ಸರ್ಕಾರಿ ಶಾಲೆಗಳಿವೆ. ಮುಂದಿನ ದಿನಗಳಲ್ಲಿ 2,500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಿಸುವ ಗುರಿ ಹೊಂದಿದ್ದೇವೆ. ಮೊದಲ ಹಂತದಲ್ಲಿ 1,000 ಕೆಪಿಎಸ್ ಶಾಲೆಗಳು ನಿರ್ಮಾಣವಾಗಲಿವೆ ಎಂದರು.

₹4,500 ಕೋಟಿ ಅನುದಾನ

ಉದ್ದೇಶಿತ ಕೆಪಿಎಸ್ ಶಾಲೆಗಳ ನಿರ್ಮಾಣಕ್ಕೆ ಸರ್ಕಾರವು ₹4,500 ಕೋಟಿ ಅನುದಾನ ಮೀಸಲಿಟ್ಟಿದೆ. ಕೆಪಿಎಸ್ ಶಾಲೆಗಳು ರಾಜ್ಯದ ಮಾದರಿ ಶಾಲೆಗಳಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ನಮ್ಮ ನಾಯಕ ರಾಹುಲ್ ಗಾಂಧಿ ಅವರೂ ಕೆಪಿಎಸ್ ಶಾಲೆಗಳ ಪರಿಕಲ್ಪನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ" ಎಂದರು.

ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಪಿಯುಸಿ ಹಂತದವರೆಗೆ ಒಂದೇ ಕ್ಯಾಂಪಸ್‌ನಲ್ಲಿ ಶಿಕ್ಷಣ ಪಡೆಯುವ ವ್ಯವಸ್ಥೆ ಕಲ್ಪಿಸಲಾಗುವುದು. ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಕೆಪಿಎಸ್ ಶಾಲೆಗಳಲ್ಲಿ ನೀಡುವ ಗುರಿ ಇಟ್ಟುಕೊಂಡಿದ್ದೇವೆ ಎಂದು ತಿಳಿಸಿದರು.

31 ಸಾವಿರ ಶಿಕ್ಷಕರ ನೇಮಕಾತಿ

ಸಚಿವನಾದ ಬಳಿಕ ಹಿಂದಿನ ಬಿಜೆಪಿ ಸರ್ಕಾರ ಬಾಕಿ ಉಳಿಸಿದ್ದ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಿ ಶಿಕ್ಷಕರಿಗೆ ನೇಮಕಾತಿ ಆದೇಶ ನೀಡಿದ್ದೇನೆ. ಇದೀಗ 17,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಡಿಸೆಂಬರ್ ಒಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ನನ್ನ ಅವಧಿಯಲ್ಲಿ ಒಟ್ಟು 31 ಸಾವಿರ ಶಿಕ್ಷಕರ ನೇಮಕಾತಿ ಮಾಡಿದಂತಾಗಲಿದೆ ಎಂದು ವಿವರಿಸಿದರು.

ಯಾವೆಲ್ಲ ರಸ್ತೆಗಳ ಅಭಿವೃದ್ಧಿಗೆ ಒತ್ತು?

ತಾಳಗುಪ್ಪ ಹೋಬಳಿಯ ಶಿರವಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಳಿಪುರ ಗ್ರಾಮದ ಸಮುದಾಯ ಭವನದ ಮುಂಭಾಗದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವರು ಭೂಮಿಪೂಜೆ ನೆರವೇರಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅನುದಾನದಲ್ಲಿ ₹35 ಲಕ್ಷ ವೆಚ್ಚದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

ಅದೇ ರೀತಿ ಶಿರವಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂಕದೇವರಕೊಪ್ಪ ಗ್ರಾಮದ ಹೆದ್ದಾರಿ-69ರಿಂದ ಗುರಲಗುಂಜಿ ಮಾರ್ಗವಾಗಿ ನವುಲೆಮನೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ₹35 ಲಕ್ಷ ವೆಚ್ಚದಲ್ಲಿ ಸಚಿವ ಮಧು ಬಂಗಾರಪ್ಪ ಅವರು ಗುದ್ದಲಿಪೂಜೆ ನೆರವೇರಿಸಿದರು.

ಕಾನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಡೇಮನೆ ಗ್ರಾಮದ ಮೇಲಿಕೇರಿ ರಸ್ತೆ ಅಭಿವೃದ್ಧಿಗೆ ₹40 ಲಕ್ಷ ಹಾಗೂ ಕೆಲುವೆ ಗ್ರಾಮದ ಗುಡ್ಡೆಕೇರಿ ರಸ್ತೆ ಅಭಿವೃದ್ಧಿಗೆ ₹40 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಸಚಿವರು ಶಂಕುಸ್ಥಾಪನೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಸೈದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೈದೂರು ಪ್ರಾಥಮಿಕ ಪಶು ಚಿಕಿತ್ಸಾಲಯದ ನೂತನ ಕಟ್ಟಡ ನಿರ್ಮಾಣಕ್ಕೆ ₹50 ಲಕ್ಷ ವೆಚ್ಚದಲ್ಲಿ ಸಚಿವ ಮಾಡು ಬಂಗಾರಪ್ಪ ಅವರು ಭೂಮಿಪೂಜೆ ನೆರವೇರಿಸಿದರು.

ತಾಳಗುಪ್ಪ ಭಾಗದ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ

ಸುಂಕದೇವರಕೊಪ್ಪ ಗ್ರಾಮದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, "ನನ್ನ ಅನುದಾನವನ್ನು ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಬಳಸುತ್ತಿದ್ದೇನೆ. ಇತ್ತೀಚೆಗೆ ಸುರಿದ ಮಳೆಯಿಂದ ಹಲವು ಕಡೆ ರಸ್ತೆಗಳು ಹಾಳಾಗಿವೆ. ತಾಳಗುಪ್ಪ ಭಾಗದ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದೇನೆ" ಎಂದು ಹೇಳಿದರು.

ಸಾಗರ ಬರಪೀಡಿತ ತಾಲೂಕು ಘೋಷಣೆಗೆ ಮನವಿ

ಇದೇ ವೇಳೆ ಸಾಗರ ತಾಲ್ಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಸ್ಥಳೀಯರು ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು. ಸ್ಪಂದಿಸಿದ ಸಚಿವರು, ಸೋಮವಾರ ಸಾಗರದಲ್ಲಿ ಪ್ರಜಾಸೇವೆ ಕಾರ್ಯಕ್ರಮ ನಡೆಯಲಿದೆ. ಅಲ್ಲಿ ನಿಮ್ಮ ಸಾಗರ ಶಾಸಕರೂ ಇರಲಿದ್ದಾರೆ. ನಿಮ್ಮ ಮನವಿಯನ್ನು ಸಚಿವ ಸಂಪುಟ ಸಭೆಯ ಗಮನಕ್ಕೆ ತಂದು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಭರವಸೆ ಕೊಟ್ಟರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+