ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ ಬಂಗಾರದ ಕೆಲಸ ಎಂದಿದ್ಯಾಕೆ ಸಚಿವ ಮಧು ಬಂಗಾರಪ್ಪ ?
ದೇವನಹಳ್ಳಿ: ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಸ್ಥಾಪನೆ ನನ್ನ ಪ್ರಕಾರ ಬಂಗಾರದ ಕೆಲಸ. ಒಂದೇ ಕ್ಯಾಂಪಸ್‌ನಲ್ಲಿ ಮಕ್ಕಳಿಗೆ ಎಲ್‌ಕೆಜಿಯಿಂದ ಪಿಯುಸಿವರೆಗೆ ಸತತ 14 ವರ್ಷಗಳ ಕಾಲ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಿದಂತಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.
ಮುಂದುವರಿದು ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳ ಫಲಿತಾಂಶ ಸುಧಾರಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ "ಮಿಷನ್ 60+' ಕಾರ್ಯಕ್ರಮದಡಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ವಿಷಯ ಸಂಪನ್ಮೂಲ ಶಿಕ್ಷಕರ ಕಾರ್ಯಾಗಾರವನ್ನು ದೇವನಹಳ್ಳಿಯ ಆಕಾಶ್ ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ಇಂದು ಉದ್ಘಾಟಿಸಿ ಅವರು ಮಾತನಾಡಿದ್ದಾರೆ.

ಕಳೆದ ವರ್ಷದಿಂದ ಮಿಷನ್ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಕಳೆದ ಸಾಲಿನಲ್ಲಿ ಮಿಷನ್ 40+ ಗುರಿ ಸಾಧಿಸಲಾಗಿದೆ. ಈ ಬಾರಿ ಬೆಂಗಳೂರು ನಗರಕ್ಕೆ ಹತ್ತಿರದಲ್ಲಿರುವ ಈ ಮೂರು ಜಿಲ್ಲೆಗಳು ಕನಿಷ್ಠ 70+ ಫಲಿತಾಂಶದ ಗುರಿ ತಲುಪುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಮಿಷನ್ 60+ ಅನ್ನು ಸವಾಲಾಗಿ ಸ್ವೀಕರಿಸಿ, ಮಕ್ಕಳ ಕಲಿಕೆಯಲ್ಲಿ ಸಕಾರಾತ್ಮಕ ಬದಲಾವಣೆ ತರಬೇಕು ಎಂದು ಶಿಕ್ಷಕರಿಗೆ ಕರೆ ನೀಡಿದರು.
ಮಕ್ಕಳ ಭವಿಷ್ಯ ರೂಪಿಸುವ ಮಹತ್ವದ ಜವಾಬ್ದಾರಿ ಶಿಕ್ಷಕರ ಮೇಲಿದೆ. ಪ್ರತಿಯೊಂದು ಮಗುವನ್ನೂ ಶಿಕ್ಷಣದ ಮೂಲಕ ಯಶಸ್ಸಿನ ದಡ ಸೇರಿಸುವ ಹೊಣೆಗಾರಿಕೆ ನಿಮ್ಮದಾಗಿದೆ. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು. ಹಿಂದೆ ನಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅಕ್ಷರ ಯೋಜನೆ ಜಾರಿಗೆ ತಂದು, ಮಕ್ಕಳಿಗೆ ಪ್ರತಿನಿತ್ಯ ಒಂದು ರೂಪಾಯಿ ಪ್ರೋತ್ಸಾಹಧನ ನೀಡುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಳಕ್ಕೆ ಕಾರಣರಾಗಿದ್ದರು ಎಂದು ಸ್ಮರಿಸಿದರು.
ಸರ್ಕಾರಿ ಶಾಲೆಗಳಲ್ಲಿ ಅತ್ಯುತ್ತಮ ಶಿಕ್ಷಕರಿದ್ದಾರೆ. ಪ್ರತಿಯೊಂದು ಮಗುವೂ ತನ್ನದೇ ಆದ ಕನಸುಗಳನ್ನು ಹೊಂದಿರುತ್ತದೆ. ಆ ಕನಸುಗಳಿಗೆ ಶಕ್ತಿ ತುಂಬಿ, ಅವುಗಳನ್ನು ನನಸಾಗಿಸುವ ದಿಕ್ಕಿನಲ್ಲಿ ಶಿಕ್ಷಕರು ಶ್ರಮಿಸಬೇಕು. ಶಿಕ್ಷಕರ ಪರಿಶ್ರಮ ಮಕ್ಕಳ ಭವಿಷ್ಯದಲ್ಲಿ ಪ್ರತಿಫಲಿಸಬೇಕು. ಮಕ್ಕಳ ಹಿತಾಸಕ್ತಿಗೆ ಯಾವುದೇ ಧಕ್ಕೆಯಾಗುವುದನ್ನು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮಕ್ಕಳ ಪೌಷ್ಟಿಕಾಂಶದ ಮಟ್ಟ ಸುಧಾರಿಸುವ ಉದ್ದೇಶದಿಂದ ಅಜೀಂ ಪ್ರೇಮ್‌ಜಿ ಅವರು ಸುಮಾರು 1,500 ಕೋಟಿ ರೂಪಾಯಿ ನೆರವು ನೀಡುತ್ತಿದ್ದಾರೆ. ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯವನ್ನೂ ಕಲ್ಪಿಸಲಾಗಿದ್ದು, ಗ್ರಾಮೀಣ ಭಾಗದ ಶಾಲೆಗಳಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ. ಇಂತಹ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಒತ್ತು ನೀಡಬೇಕು ಎಂದು ತಿಳಿಸಿದರು.
ಮಿಷನ್ 60+ ಅಭಿಯಾನ
ಮಿಷನ್ 60+ ಕೇವಲ ಪರೀಕ್ಷಾ ಫಲಿತಾಂಶ ಸುಧಾರಿಸುವ ಕಾರ್ಯಕ್ರಮವಾಗದೆ, ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ಮತ್ತು ಅವರ ಭವಿಷ್ಯ ರೂಪಿಸುವ ಆಂದೋಲನವಾಗಬೇಕು. ಶಿಕ್ಷಕರು ಇದನ್ನು ಸವಾಲಾಗಿ ಸ್ವೀಕರಿಸಿ, ಉತ್ತಮ ಫಲಿತಾಂಶ ಸಾಧಿಸಲು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಶ್ಮಿ ಮಹೇಶ್, ಆಕಾಶ್ ಮೆಡಿಕಲ್ ಕಾಲೇಜಿನ ಅಧ್ಯಕ್ಷ ಅಮರ್, ನಿರ್ದೇಶಕ ಮುನಿರಾಜು, ಇಲಾಖೆಯ ವಿವಿಧ ಅಧಿಕಾರಿಗಳಾದ ಕೆ. ವೆಂಕಟೇಶ್, ಸುದೀಪ್, ಹನುಮಂತರಾಯ, ಲಿಂಗರಾಜು, ಫಂಡರಿನಾಥ್, ಅನಿತಾ ನಾಜೀರ್ ಸೇರಿದಂತೆ ಹಲವರು ಇದ್ದರು.





Click it and Unblock the Notifications
