KSRTC ನೌಕರರಿಗೆ ಸಿಹಿ ಸುದ್ದಿ: ಪರಿಹಾರ ಮೊತ್ತದಲ್ಲಿ ಭಾರೀ ಏರಿಕೆ, ವಂತಿಕೆ ಹಣ ಪರಿಷ್ಕರಿಸಿ ಆದೇಶ
ಬೆಂಗಳೂರು, ಅಕ್ಟೋಬರ್ 30: ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನೌಕರರಿಗೆ ಕುಟುಂಬ 'ಕಲ್ಯಾಣ ಯೋಜನೆಯ ಪರಿಹಾರ ಮೊತ್ತ'ವನ್ನು 03 ಲಕ್ಷ ರೂಪಾಯಿಯಿಂದ 10 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ ಎಂದು ನಿಗಮದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಯಲ್ಲಿ ಈಗಾಗಲೇ ಸೇವೆಯಲ್ಲಿರುವಾಗ ಸಿಬ್ಬಂದಿಗಳು ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ಅಪಘಾತ ವಿಮಾ ಪರಿಹಾರ ಯೋಜನೆಯಡಿ, 01 ಕೋಟಿ ರೂಪಾಯಿ ಮೊತ್ತದ ಆರ್ಥಿಕ ಪರಿಹಾರ ಒದಗಿಸಲಾಗುತ್ತಿದೆ. ಇಲ್ಲಿಯವರೆಗೆ 7 ಪ್ರಕರಣಗಳಲ್ಲಿ ಅಪಘಾತದಿಂದ ಮರಣ ಹೊಂದಿದ ನೌಕರರ ಅವಲಂಬಿತರಿಗೆ ತಲಾ ಒಂದು ಕೋಟಿ ರೂಪಾಯಿ ನೀಡಲಾಗಿದೆ.

ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ ನೌಕರರ ಕುಟುಂಬದವರಿಗೆ ಅಂದರೆ ಕ್ಯಾನ್ಸರ್, ಸ್ಟ್ರೋಕ್, ಹೃದಯಾಘಾತ, ಕಿಡ್ನಿ ವೈಫಲ್ಯ ಸೇರಿದಂತೆ ಇತರೆ ಖಾಯಿಲೆಗಳಿಂದ ಪ್ರತಿ ವರ್ಷ 100 ನೌಕರರು ಮರಣ ಹೊಂದುತ್ತಿದ್ದಾರೆ.
ಕುಟುಂಬಸ್ಥರಿಗೆ ಹೆಚ್ಚುವರಿ 7ಲಕ್ಷ ರೂ.ಸಿಗಲಿದೆ
ಹೀಗೆ ತಮ್ಮ ಸೇವಾವಧಿಯಲ್ಲಿ ಮರಣ ಹೊಂದುತ್ತಿರುವ ನೌಕರರ ಕುಟುಂಬದವರು ಅನುಭವಿಸುವ ಕಷ್ಟಗಳನ್ನು ಸರ್ಕಾರ ಗಮನಿಸಿದೆ. ನಿಗಮದಿಂದ ಮೃತರ ಕುಟುಂಬಕ್ಕೆ ನೆರವಾಗಲು 3 ಲಕ್ಷ ರೂಪಾಯಿ ನೀಡುತ್ತಿದ್ದ ಪರಿಹಾರ ಮೊತ್ತವನ್ನು ಹೆಚ್ಚಿಸುವ ಸದುದ್ದೇಶದಿಂದ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳಿಂದಲೂ ಸಹ ಬೇಡಿಕೆ ಬಂದ ಹಿನ್ನೆಲೆಯಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರವನ್ನು 3 ಲಕ್ಷದಿಂದ 10 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. ಇದರಿಂದ ಮೃತರ ಅವಲಂಬಿತರಿಗೆ 7 ಲಕ್ಷ ರೂಪಾಯಿಗೆ ಹೆಚ್ಚುವರಿ ಪರಿಹಾರ ಮೊತ್ತ ಲಭ್ಯವಾಗುತ್ತದೆ.
ಕಾರ್ಮಿಕರ ಜೀವ ಅಮೂಲ್ಯವಾದದ್ದು, ಜೀವಕ್ಕೆ ಯಾವುದೇ ರೀತಿಯಿಂದಲೂ ಬೆಲೆ ಕಟ್ಟಲಾಗುವುದಿಲ್ಲ. ಆದರೆ ನೌಕರರು ಮರಣ ಹೊಂದಿದ್ದಲ್ಲಿ, ಅವರ ಅವಲಂಬಿತರಿಗೆ ಆದಷ್ಟೂ ಆರ್ಥಿಕವಾಗಿ ಸಹಾಯ ಮಾಡುವುದು ನಿಗಮದ ಸದುದ್ದೇಶವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಂತಿಕೆ ಹಣ ಪರಿಷ್ಕರಿಸಿ ಆದೇಶ
ಸದರಿ ಯೋಜನೆಗೆ ನೌಕರರ ಮಾಸಿಕ ವಂತಿಕೆಯನ್ನು ಪ್ರಸ್ತುತ 100 ರೂಪಾಯಿಯಿಂದ 200 ರೂ.ಗಳಿಗೆ ಹಾಗೂ ನಿಗಮದ ವತಿಯಿಂದ ಪ್ರತಿ ನೌಕರರ ಪರವಾಗಿ ನೀಡಲಾಗುತ್ತಿರುವ 50 ರೂ.ಗಳ ವಂತಿಕೆಯನ್ನು ರೂ. 100 ಗಳಿಗೆ ಹೆಚ್ಚಿಸಿ, ಪರಿಷ್ಕರಿಸಲಾಗಿದೆ.
ಈ ಪರಿಷ್ಕೃತ ಆದೇಶವು ಇದೇ ನವೆಂಬರ್ 01ರಿಂದ ರಿಂದ ಜಾರಿಗೆ ಬರಲಿದೆ. ಈ ದಿನಾಂಕದ ನಂತರದಲ್ಲಿ ಉಂಟಾಗುವ ಮರಣ ಪ್ರಕರಣಗಳಿಗೆ ಈ ಯೋಜನೆಯು ಅನ್ವಯಿಸುತ್ತದೆ ಎಂದು ನಿಗಮ ತಿಳಿಸಿದೆ.












Click it and Unblock the Notifications