Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ಕುರಿತು ಅಪ್‌ಡೇಟ್ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು, ಮಾರ್ಚ್ 03: ಕಳೆದ ಮೂರು ತಿಂಗಳಿನಿಂದ ಗ್ರಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಬಂದಿಲ್ಲ ಎಂದು ರಾಜ್ಯದ ಮಹಿಳೆಯರು ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದೀಗ ಗೃಹ ಲಕ್ಷ್ಮಿ ಹಣ ಯೋಜನೆಯ ಹಣ ಬಿಡುಗಡೆ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರತಿಕ್ರಿಯಿಸಿದ್ದು, ಶೀಘ್ರ ಮಹಿಳೆಯರ ಖಾತೆಗೆ ಎರಡು ತಿಂಗಳ ಹಣ ಹಾಕುತ್ತೇವೆ ಎಂದು ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಫಲಾನುಭವಿಗಳಿಗೆ ಗೃಹಲಕ್ಷ್ಮಿ ಹಣ ವಿಳಂಬ ಆಗಿರುವ ಕುರಿತು ಹಣ ಹಾಕೋದು ಸ್ವಲ್ಪ ವಿಳಂಬವಾಗಿತ್ತು. ಈಗ ಎಲ್ಲವೂ ಸರಿಯಾಗಿದೆ. ಬಾಕಿ ಇರುವ ಎರಡು ತಿಂಗಳ ಹಣವನ್ನು ಈಗ ಬ್ಯಾಂಕ್ ಖಾತೆಗೆ ಹಾಕುತ್ತೇವೆ. ಯಾವುದೇ ಫಿಲ್ಟರ್ ನಾವು ಮಾಡುತ್ತಿಲ್ಲ ಎಲ್ಲರಿಗೂ ಕೂಡ ಹಣ ಸಿಗುತ್ತದೆ. ಯಾವುದೇ ಗೊಂದಲ ಬೇಡ ಗ್ಯಾರಂಟಿಗಳನ್ನು ಮುಂದುವರಿಸುತ್ತೇವೆ.ಯಾವುದೇ ಕಾರಣಕ್ಕೂ ಐದು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಬೆಂಗಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಮಾತ್ರ ಗೃಹಲಕ್ಷ್ಮೀ ಹಣ ಹಾಕಲಾಗುತ್ತದೆ ಎಂಬುದು ಶುದ್ಧ ಸುಳ್ಳು. ಇದು ಆಧಾರರಹಿತ ಆರೋಪ ಎಂದರು.
ಜಿಎಸ್ಟಿ, ಜಿಎಸ್ಟಿಯೇತರ, ಆದಾಯ ತೆರಿಗೆ...ಹೀಗೆ ಫಲಾನುಭವಿಗಳನ್ನು ವಿಂಗಡಿಸಲಾಗಿದೆ. ಈಗಾಗಲೇ ನವೆಂಬರ್, ಡಿಸೆಂಬರ್ ತಿಂಗಳ ಬಿಲ್ ಆಗಿದ್ದು, ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ ಎಂದು ತಿಳಿಸಿದರು. ಇದು ಚುನಾವಣೆಗೋಸ್ಕರ ಮಾಡಿರುವ ಯೋಜನೆಗಳಲ್ಲ. ಚುನಾವಣೆ ಮುಗಿದ ಬಳಿಕವೂ ಯೋಜನೆಗಳು ಮುಂದುವರಿದಿವೆ. ಗೃಹಲಕ್ಷ್ಮೀ ಯೋಜನೆ ನಿರಂತರವಾಗಿ ಮುಂದುವರಿಯಲಿದೆ. ಕಾಂಗ್ರೆಸ್ ಸರ್ಕಾರ ಇರುವವರೆಗೂ ಗೃಹಲಕ್ಷ್ಮೀ ಯೋಜನೆ ಇರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ರಾಜ್ಯದಲ್ಲಿ ನಾಲ್ಕು ವರ್ಷಗಳ ಕಾಲ ಬಿಜೆಪಿಯವರು ಏನೆಲ್ಲ ಮಾಡಿದ್ದರೆನ್ನವುದು ಎಲ್ಲರಿಗೂ ಗೊತ್ತಿದೆ. ರಾಜ್ಯಪಾಲರ ಭಾಷಣವನ್ನು ಟೀಕಿಸುವುದಕ್ಕೂ ಮುನ್ನ ಬಿಜೆಪಿಯವರು ಮೊದಲು ಕನ್ನಡಿಯಲ್ಲಿ ತಮ್ಮ ಮುಖ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿಕಾರಿದ್ದಾರೆ.
ಸೋಮವಾರ ಆರಂಭಗೊಂಡ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಮಾಡಿದ ರಾಜ್ಯಪಾಲರ ಭಾಷಣದ ಬಗ್ಗೆ ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿಯವರ ಆಡಳಿತವನ್ನು ರಾಜ್ಯದ ಜನರು ನೋಡಿದ್ದಾರೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಎಷ್ಟು ಜನರಿಗೆ ತಲುಪಿವೆ ಎನ್ನುವುದನ್ನು ಅವರು ಮೊದಲು ಅವಲೋಕನ ಮಾಡಿಕೊಳ್ಳಲಿ ಎಂದು ಅವರು ತಿರುಗೇಟು ನೀಡಿದರು.
ಸಚಿವರ ವಿರುದ್ಧ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಬಳಸಿದ ಅಶ್ಲೀಲ ಪದ ಪ್ರಯೋಗ ಪ್ರಕರಣವನ್ನು ಎಥಿಕ್ಸ್ ಕಮಿಟಿಗೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ನಾನು ಇಂದು ಬೆಂಗಳೂರಿಗೆ ಬಂದಿದ್ದು, ನಿಮಗೆ (ಮಾಧ್ಯಮ) ಎಷ್ಟು ಮಾಹಿತಿ ಇದೆಯೋ, ಅಷ್ಟೇ ಮಾಹಿತಿ ನನಗೂ ಇದೆ. ಎಥಿಕ್ಸ್ ಕಮಿಟಿಗೆ ನೀಡಿರುವ ವಿಚಾರ ನನಗೆ ಗೊತ್ತಿಲ್ಲ ಎಂದು ಹೇಳಿದರು.
ನಾನು ಆಸ್ಪತ್ರೆಯಲ್ಲಿದ್ದಾಗ ಸಭಾಪತಿ ಬಸವರಾಜ ಹೊರಟ್ಟಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಆ ವೇಳೆಯಲ್ಲೂ ಪ್ರಕರಣದ ಬಗ್ಗೆ ಏನೂ ಮಾತನಾಡಲಿಲ್ಲ. ಈ ರೀತಿ ಯಾರಿಗೂ ಆಗಬಾರದೆನ್ನುವುದೇ ನನ್ನ ಕಳಕಳಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಶಾಲೆಯ ಶಿಕ್ಷಕನೋರ್ವ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ವರದಿ ಗಮನಕ್ಕೆ ಬಂದಿದ್ದು, ಖಂಡಿತವಾಗಿ ಸರ್ಕಾರವು ಮಕ್ಕಳ ಹಾಗೂ ಪೋಷಕರ ಪರ ನಿಲ್ಲುತ್ತದೆ. ಲೈಂಗಿಕ ದೌರ್ಜನ್ಯ ಪಿಡುಗನ್ನು ಬೇರು ಸಮೇತ ಕಿತ್ತೊಗೆಯಬೇಕಿದೆ. ಈ ಪ್ರಕರಣದಲ್ಲಿ ದೂರು ದಾಖಲಾಗಿರುವ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಅವರನ್ನು ಪೊಲೀಸ್ ಠಾಣೆಗೆ ಕಳುಹಿಸಿ ವರದಿ ತರಿಸಿಕೊಳ್ಳಲಾಗುವುದು. ಈ ಬಗ್ಗೆ ದೂರು ದಾಖಲಿಸಿಕೊಳ್ಳುವಂತೆಯೂ ತಿಳಿಸಿರುವುದಾಗಿ ಹೇಳಿದರು.












Click it and Unblock the Notifications