ರಾಜ್ಯದ ಪ್ರಮುಖ ಯೋಜನೆಗೆ ಭೂಸ್ವಾಧೀನ ಅಪ್ಡೇಟ್ಸ್ ಕೊಟ್ಟ ಡಿ.ಕೆ ಶಿವಕುಮಾರ್
ರಾಜ್ಯದ ಪ್ರಮುಖ ಯೋಜನೆಯೊಂದರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಹತ್ವದ ಅಪ್ಡೇಟ್ಸ್ ನೀಡಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಯಾವ ಯೋಜನೆಯ ಬಗ್ಗೆ ಮಾತನಾಡಿದ್ದಾರೆ, ಭೂಸ್ವಾಧೀನದ ಬಗ್ಗೆ ಅವರು ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.
ಕರ್ನಾಟಕದ ಮಹತ್ವದ ಯೋಜನೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ವಿಧಾನ ಮಂಡಲ ಅಧಿವೇಶನದಲ್ಲಿ ಮಹತ್ವದ ಅಪ್ಡೇಟ್ಸ್ ಕೊಟ್ಟಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಬದ್ಧವಾಗಿದ್ದೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರವಾಗಿ ಸಿದ್ದರಾಮಯ್ಯ ಅವರು ಹಾಗೂ ನಾವು ಚರ್ಚೆ ಮಾಡಿ ಭೂ ಪರಿಹಾರದ ಬಗ್ಗೆ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದೇವೆ.
ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಆಗಿದ್ದ ಭೂ ಪರಿಹಾರ ತೀರ್ಮಾನವನ್ನ ಮಾರ್ಪಾಡು ಮಾಡಿ ಒಂದು ಹಂತಕ್ಕೆ ತಂದಿದ್ದೇವೆ. ಈ ಯೋಜನೆ ಪೂರ್ಣಗೊಳಿಸಲು ನಾವು ಬದ್ಧರಾಗಿದ್ದೇವೆ. ವರ್ಷಕ್ಕೆ 15-20 ಸಾವಿರ ಕೋಟಿ ನೀಡಬೇಕು, ಮುಂದಿನ ಮೂರ್ನಾಲ್ಕು ವರ್ಷದಲ್ಲಿ ಭೂಸ್ವಾಧೀನ ಪೂರ್ಣಗೊಳಿಸಬೇಕು ಎಂದು ಹೊರಟಿದ್ದೇವೆ. ಕೆಲವು ಕಡೆ ಕೆಲಸವನ್ನೂ ಪ್ರಾರಂಭ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
110 ಕೋಟಿ ವೆಚ್ಚದಲ್ಲಿ ಹೇಮಾವತಿ ನಾಲೆಗಳ ಅಭಿವೃದ್ಧಿ
110 ಕೋಟಿ ಅಂದಾಜು ವೆಚ್ಚದಲ್ಲಿ ಹೇಮಾವತಿ ಎಡದಂಡೆಯ ವಿತರಣಾ ನಾಲೆಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಆದಷ್ಟು ಬೇಗ ಈ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು. ವಿತರಣಾ ನಾಲೆ 33ಕ್ಕೆ 10 ಕೋಟಿ ರೂಪಾಯಿ, 34 ರಿಂದ 40ರವರೆಗಿನ ನಾಲೆಗಳಿಗೆ 5 ಕೋಟಿ ರೂಪಾಯಿ ನೀಡಲಾಗಿದೆ.
ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಎಡದಂಡೆ ನಾಲ ವಿಭಾಗದಲ್ಲಿ ಒಟ್ಟು 14 ವಿತರಣಾ ನಾಲೆಗಳಲ್ಲಿ ಎಂಟು ನಾಲೆಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಆರು ನಾಲೆಗಳು ಬಾಕಿಯಿವೆ. ಇಲ್ಲಿ ಒಂದಷ್ಟು ಹಳೇ ನಾಲೆಗಳಿವೆ. ಇವುಗಳ ಬಗ್ಗೆ ವರದಿ ತರಿಸಿಕೊಂಡಿದ್ದೇನೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಘಟಪ್ರಭಾ ಕಾಲುವೆಗಳ ಅಭಿವೃದ್ಧಿಗೆ 1,722 ಕೋಟಿ ಯೋಜನೆ; ಅನುದಾನಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ ಇನ್ನು ಘಟಪ್ರಭಾ ಬಲ ಹಾಗೂ ಎಡ ದಂಡೆ ಕಾಲುವೆಗಳ ಅಭಿವೃದ್ಧಿಗೆ 1722 ಕೋಟಿ ಯೋಜನೆ ತಯಾರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ. ಇದಕ್ಕೆ ಒಪ್ಪಿಗೆ ಸಿಕ್ಕರೆ ಕೇಂದ್ರ ಸರ್ಕಾರದ 60%, ರಾಜ್ಯ ಸರ್ಕಾರದ 40% ವೆಚ್ಚದ ಸಹಭಾಗಿತ್ವದಲ್ಲಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದಿದ್ದಾರೆ.
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ- 3ರ ಅನುಷ್ಠಾನಕ್ಕೆ ಮಹಾರಾಷ್ಟ್ರ, ಆಂಧ್ರ ಅಡ್ಡಗಾಲು
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ- 3ರ ಅನುಷ್ಠಾನಕ್ಕೆ 2013 ರಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸದೆ ಬಾಕಿ ಉಳಿಸಿಕೊಂಡಿದೆ. ಮೊದಲನೇ ಬಾರಿಗೆ ಮಹಾರಾಷ್ಟ್ರ ಎರಡನೇ ಬಾರಿಗೆ ಆಂಧ್ರ ಪ್ರದೇಶದ ಅಡ್ಡಗಾಲು ಹಾಕಿವೆ. ಕೇಂದ್ರದಿಂದ ಈ ಯೋಜನೆಗೆ ಅಧಿಸೂಚನೆ ಸಿಕ್ಕರೆ, ಕೂಡಲೇ ಸಾಲ ಮಾಡಿ ಈ ಯೋಜನೆ ಪೂರ್ಣಗೊಳಿಸಲಾಗುವುದು. ಕೇಂದ್ರ ಸಚಿವರಾದ ಸೋಮಣ್ಣ ಅವರ ಜೊತೆ ಮೂರು ಬಾರಿ ಕೇ೦ದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿದ್ದೇವೆ ಎಂದೂ ಅವರು ಹೇಳಿದ್ದಾರೆ.












Click it and Unblock the Notifications