ಅಕ್ರಮ ಡಿನೋಟಿಫೈ ಪ್ರಕರಣದಲ್ಲಿ ಯಡಿಯೂರಪ್ಪಗೆ ಸುಪ್ರೀಂಕೋರ್ಟ್ ರಿಲೀಫ್
ನವದೆಹಲಿ, ಜುಲೈ 23: ಅಕ್ರಮ ಡಿನೋಟಿಷಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಅವರ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.
ಕಳೆದ 2006-07ರ ಅವಧಿಯಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ವರ್ತೂರು-ವೈಟ್‌ಫೈಲ್ಡ್ ಐಟಿ ಕಾರಿಡಾರ್‌ನಲ್ಲಿ ಐಟಿ ಯೋಜನೆಗಾಗಿ ಸ್ವಾಧೀನಪಡಿಸಿಕೊಂಡ ಎಕರೆಗಟ್ಟಲೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪಕ್ಕೆ ಸಂಬಂಧಿಸಿದ ಕ್ರಿಮಿನಲ್ ಪ್ರಕ್ರಿಯೆಗಳನ್ನು ಎದುರಿಸುತ್ತಿದ್ದಾರೆ.
ಅಕ್ರಮವಾಗಿ ಭೂಮಿ ಡಿನೋಟಿಫೈ ಮಾಡಿದ್ದಕ್ಕೆ ಸಂಬಂಧಿಸಿದಂತೆ ವಾಸುದೇವ ರೆಡ್ಡಿ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನ ಮೇರೆಗೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಡಿಸೆಂಬರ್ 21, 2015 ರಂದು ಎಫ್‌ಐಆರ್ ದಾಖಲಿಸಿದ್ದರು.

ಅಕ್ರಮ ಡಿನೋಟಿಫಿಕೇಷನ್ ಪ್ರಕರಣದ ಹಿನ್ನೆಲೆ:
ಐ.ಟಿ. ಕಾರಿಡಾರ್ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡಿದ್ದ ಭೂಮಿಯ ಪೈಕಿ 15 ಎಕರೆ 30 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪ ಮಾಜಿ ಸಿಎಂ ಬಿಎಸ್ ವೈ ಮೇಲಿದೆ. ಈ ಪ್ರಕರಣದಲ್ಲಿ ಮೂಲ ದೂರುದಾರರಾದ ವಾಸುದೇವ ರೆಡ್ಡಿ, ಮಾಜಿ ಸಚಿವ ಆರ್ .ವಿ. ದೇಶಪಾಂಡೆ, ಯಡಿಯೂರಪ್ಪ ಸೇರಿದಂತೆ ಹತ್ತು ಮಂದಿಯ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು. 2015ರಲ್ಲಿ ಹೈಕೋರ್ಟ್ ದೇಶಪಾಂಡೆ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿತ್ತು. ಉಳಿದ ಎಂಟು ಜನರ ವಿರುದ್ಧದ ದೂರನ್ನು ವಿಚಾರಣಾ ನ್ಯಾಯಾಲಯ ರದ್ದುಗೊಳಿಸಿತ್ತು. ಆದರೆ ಎರಡನೇ ಆರೋಪಿಯಾಗಿರುವ ಯುಡಿಯೂರಪ್ಪ ವಿರುದ್ಧದ ಪ್ರಕರಣ ಹಾಗೆಯೇ ಇದೆ.













Click it and Unblock the Notifications