ಸರ್ಕಾರದ ಮೊದಲ ವಿಕೆಟ್ ಪತನ; ʼಎರಡನೇ ವಿಕೆಟ್ ಸಿದ್ದರಾಮಯ್ಯʼ
ಬೆಂಗಳೂರು, ಜೂನ್ 18: ಸಿದ್ದರಾಮಯ್ಯನವರು ಮಾನಮರ್ಯಾದೆ ಇಲ್ಲದ ಕಾಂಗ್ರೆಸ್ಸಿಗೆ ಸೇರಿದವರು. ಸಿದ್ರಾಮಣ್ಣ ನುಂಗಣ್ಣ ಎಂದರಲ್ಲದೆ, ವಾಲ್ಮೀಕಿ ನಿಗಮಕ್ಕೆ ಸೇರಿದ 187 ಕೋಟಿ ನುಂಗಿದ ನಾಗೇಂದ್ರರ ವಿಕೆಟ್ ಪತನವಾಗಿದೆ. ಈಗ ಎರಡನೇ ವಿಕೆಟ್ ಸಿದ್ದರಾಮಯ್ಯನವರದು ಎಂದು ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ತಿಳಿಸಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಗ್ಯಾರಂಟಿಗೆ ಸಂಬಂಧಿಸಿ ಖಜಾನೆಯಿಂದಲೇ ಹಣ ನೀಡುತ್ತಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿಯವರು, ಕಾಂಗ್ರೆಸ್ ಪಕ್ಷದಿಂದ ಹಣ ಕೊಡುತ್ತಿಲ್ಲ. ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯನ್ನ ಇಳಿಸಬೇಕು ಎಂದು ಹೇಳಿದರು. ಸಿದ್ದರಾಮಯ್ಯನವರಿಗೆ ಎರಡು ನಾಲಿಗೆ. ಹಿಂದೆ ಅವರು ವಿರೋಧ ಪಕ್ಷದಲ್ಲಿದ್ದಾಗ ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯನ್ನು ಖಂಡಿಸಿದ್ದರು.

ಇನ್ನೂ ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ಪೆಟ್ರೋಲ್ ಬೆಲೆ ಲೀಟರ್‍ಗೆ 3 ರೂ, ಡೀಸೆಲ್ ಬೆಲೆ 3.5 ರೂ ಹೆಚ್ಚಳದ ಅವಿವೇಕದ ಮತ್ತು ಜನವಿರೋಧಿ ನಿರ್ಧಾರವನ್ನು ಕಾಂಗ್ರೆಸ್ ಸರಕಾರ ಕೈಗೊಂಡಿದೆ. ಏರಿಸಿದ ದರ ಹಿಂಪಡೆಯುವವರೆಗೆ ಬಿಜೆಪಿ ಹೋರಾಟ ಮಾಡಲಿದೆ ಎಂದು ತಿಳಿಸಿದರು.
ನಾವು ವಿಪಕ್ಷವಾಗಿ ಜನರ ಪರವಾಗಿ ಧ್ವನಿ ಎತ್ತಬೇಕಿದೆ. ರಾಜ್ಯದ ರೈತರು, ಬಡವರು, ಜನಸಾಮಾನ್ಯರಿಗೆ ನ್ಯಾಯ ಕೊಡಿಸುವ ಕೆಲಸವನ್ನು ನಾವು- ನೀವೆಲ್ಲರೂ ಸೇರಿ ಮಾಡಬೇಕಿದೆ ಎಂದು ತಿಳಿಸಿದರು. ಜನವಿರೋಧಿ ಸರಕಾರ ಮತ್ತು ಜನವಿರೋಧಿ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಹೋರಾಟ ಕೈಗೆತ್ತಿಕೊಂಡಿದೆ ಎಂದು ತಿಳಿಸಿದರು.
ಲೋಕಸಭಾ ಚುನಾವಣೆಯಲ್ಲಿ 18ರಿಂದ 20 ಸ್ಥಾನ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದ ಕಾಂಗ್ರೆಸ್ ಮುಖಂಡರು ಫಲಿತಾಂಶ ಬಂದ ಬಳಿಕ ಹತಾಶರಾಗಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಶಾಸಕರೇ ಗ್ಯಾರಂಟಿ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ ಎಂದ ಅವರು, ವಿರೋಧ ಪಕ್ಷದಲ್ಲಿ ಇದ್ದಾಗ ಸಿದ್ದರಾಮಯ್ಯನವರಿಗೆ ಇದ್ದ ಜನಪರ ಕಾಳಜಿ ಮುಖ್ಯಮಂತ್ರಿಗಳಾದ ಬಳಿಕ ಎಲ್ಲಿ ಕಳೆದುಹೋಗಿದೆ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಸರಕಾರಕ್ಕೆ ಕಳೆದ ಒಂದು ವರ್ಷದ ಅಧಿಕಾರದಲ್ಲಿ ಒಂದೇ ಒಂದು ರೂಪಾಯಿಯನ್ನೂ ಅಭಿವೃದ್ಧಿಗೆ ಕೊಡಲು ಸಾಧ್ಯವಾಗಿಲ್ಲ ಎಂದು ಆಕ್ಷೇಪಿಸಿದರು. ಮುದ್ದೇಬಿಹಾಳದ ಕಾಂಗ್ರೆಸ್ ಶಾಸಕ ನಾಡಗೌಡರು ಅಭಿವೃದ್ಧಿ ಕಾರ್ಯ ಸ್ಥಗಿತವಾದ ಕುರಿತು ಹೇಳಿಕೆ ಕೊಟ್ಟಿದ್ದಾರೆ. ತಾವು ಕ್ಷೇತ್ರದಲ್ಲಿ ತಲೆ ಎತ್ತಿ ಓಡಾಡಲೂ ಆಗದ ಸ್ಥಿತಿ ಎಂದು ಗಮನ ಸೆಳೆದಿದ್ದಾರೆ; ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲೂ ಸಿದ್ಧ ಎಂದು ಹೇಳಿರುವುದಾಗಿ ಗಮನ ಸೆಳೆದರು. ರಸ್ತೆ, ಶಾಲೆಗಳ ಅಭಿವೃದ್ಧಿ, ಆಸ್ಪತ್ರೆಗಳ ವಿಚಾರದಲ್ಲೂ ಅಭಿವೃದ್ಧಿ ಎಂಬುದು ಕನಸಾಗಿದೆ.
ಬಿಜೆಪಿ ಸರಕಾರ ಇದ್ದಾಗ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವಾಗ ರಾಜ್ಯದಲ್ಲಿ ಕಂದಾಯ ಮಿಗತೆ ಇತ್ತು. ಹೆಚ್ಚು ಸಾಲಗಳೂ ಇರಲಿಲ್ಲ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದ ಒಂದೇ ಒಂದು ವರ್ಷದಲ್ಲಿ ಕರ್ನಾಟಕ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ರಾಜ್ಯ ದಿವಾಳಿ ಅಂಚಿಗೆ ಹೋಗಿದೆ. ಹಾಗಿದ್ದರೆ ಯಾವ ಪುರುಷಾರ್ಥಕ್ಕೆ ಆಡಳಿತ ನಡೆಸುತ್ತಿದ್ದೀರಿ ಎಂದು ಪ್ರಶ್ನಿಸಿದರು.
ಬೆಲೆ ಏರಿಕೆ, ಹಣದುಬ್ಬರದ ಕುರಿತು ತಿಳಿದಿದ್ದರೂ ಅನುಭವಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಲೋಕಸಭಾ ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ಈ ಜನವಿರೋಧಿ ನಿರ್ಧಾರ ಮಾಡಿದ್ದು, ಇದು ಅಕ್ಷಮ್ಯ ಅಪರಾಧ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.












Click it and Unblock the Notifications