ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿಯಿಂದ ಉಚ್ಛಾಟನೆ
ಬೆಂಗಳೂರು, ಮೇ 25: ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಉಡುಪಿ ಕ್ಷೇತ್ರದ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದೆ.
ಈ ಕುರಿತು ಶನಿವಾರ ಕರ್ನಾಟಕ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಮೇ 23ರಂದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಶಾಸಕ ರಘುಪತಿ ಭಟ್‌ಗೆ ಬಿಜೆಪಿ ನೋಟಿಸ್ ನೀಡಿತ್ತು.

ಆದೇಶದ ವಿವರ: ಉಚ್ಚಾಟನಾ ಆದೇಶ ಎಂಬ ವಿಷಯವನ್ನು ಆದೇಶ ಒಳಗೊಂಡಿದೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ.
ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು (6) ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.
ಟಿಕೆಟ್ ಕೈತಪ್ಪಿತ್ತು: ಬಿಜೆಪಿ ನಾಯಕ, ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷ ಶಿವಮೊಗ್ಗದ ಖ್ಯಾತ ವೈದ್ಯ ಧನಂಜಯ ಸರ್ಜಿ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿತು.
ಟಿಕೆಟ್ ಕೈತಪ್ಪಿದ ಕಾರಣ ರಘುಪತಿ ಭಟ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ನಾಮಪತ್ರವನ್ನು ವಾಪಸ್ ಪಡೆಯದೇ ಚುನಾವಣಾ ಕಣದಲ್ಲಿ ಮುಂದುವರೆದಿದ್ದರು. ಆದ್ದರಿಂದ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜ್ ಪಾಟೀಲ್ ರಘುಪತಿ ಭಟ್‌ಗೆ ನೋಟಿಸ್ ನೀಡಿದ್ದರು. ಎರಡು ದಿನದ ಒಳಗಾಗಿ ಬಿಜೆಪಿ ಶಿಸ್ತು ಸಮಿತಿಯ ಮುಂದೆ ಸ್ಪಷ್ಟೀಕರಣ ನೀಡಬೇಕೆಂದು ನೋಟೀಸ್‌ನಲ್ಲಿ ತಿಳಿಸಿದ್ದರು.
ನೈಋತ್ಯ ಪದವೀಧರ ಕ್ಷೇತ್ರದ ವ್ಯಾಪ್ತಿಗೆ ಶಿವಮೊಗ್ಗ, ದಾವಣಗೆರೆ (ಹೊನ್ನಾಳಿ, ಚನ್ನಗಿರಿ) ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳು ಸೇರುತ್ತವೆ. ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಂಡಾಯ ಅಭ್ಯರ್ಥಿಯಾದ ಅವರಿಗೆ ಬಿಜೆಪಿಯ ಉಚ್ಛಾಟಿತ ನಾಯಕ, ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಬೆಂಬಲ ನೀಡಿದ್ದರು.
2023ರ ವಿಧಾನಸಭೆ ಚುನಾವಣೆ ಟಿಕೆಟ್ ಕೈತಪ್ಪಿದ ಬಳಿಕ ಬಿಜೆಪಿಯನ್ನು ಬಿಡುವುದಿಲ್ಲ. ನಾನು ಸತ್ತ ಮೇಲೆ ದೇಹದ ಮೇಲೆ ಬಿಜೆಪಿ ಬಾವುಟ ಇರಬೇಕು ಎಂದು ರಘುಪತಿ ಭಟ್ ಹೇಳಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಸ್ತುವಾರಿಯಾಗಿ ನೇಮಿಸಿತ್ತು. ಪಕ್ಷದ ಪರವಾಗಿ ಸಕ್ರಿಯವಾಗಿ ಕೆಲಸ ಮಾಡಿದ್ದರು.
ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಹಾಲಿ ಶಾಸಕರಲ್ಲಿ ರಘುಪತಿ ಭಟ್ ಒಬ್ಬರು. 2018ರ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದಲ್ಲಿ ಅವರು ಜಯಗಳಿಸಿದ್ದರು. ಆದರೆ 2023ರಲ್ಲಿ ಯಶ್‌ಪಾಲ್ ಎ. ಸುವರ್ಣರನ್ನು ಬಿಜೆಪಿ ಅಭ್ಯರ್ಥಿ ಮಾಡಿತ್ತು, ಅವರು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.
ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜನಾಥ. ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ. ರಘುಪತಿ ಭಟ್ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಕ್ಷೇತ್ರದಲ್ಲಿ 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಕ್ಷೇತ್ರದಲ್ಲಿ (ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಕೊಡಗು, ಶಿವಮೊಗ್ಗ ಮತ್ತು ಉಡುಪಿ) ಒಟ್ಟು 108 ಮತಗಟ್ಟೆಗಳಿದ್ದು, ಒಟ್ಟು 85089 ಮತದಾರರು ಇದ್ದಾರೆ. 43,720 ಪುರುಷ ಮತದಾರರು, 41,368 ಮಹಿಳಾ ಮತದಾರರು ಹಾಗೂ ಒಬ್ಬರು ಇತರೆ ಮತದಾರರು. ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ.












Click it and Unblock the Notifications