Karnataka Weather: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
ಬೆಂಗಳೂರು, ಮಾರ್ಚ್ 29: ಭಾರತೀಯ ಹವಾಮಾನ ಇಲಾಖೆ ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲದ ಹವಾಮಾನ ಮುನ್ಸೂಚನೆಯನ್ನು ನೀಡಿದೆ. ರಾಜ್ಯದಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದ್ದು, ನೆತ್ತಿ ಸುಡುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಏಪ್ರಿಲ್ ತಿಂಗಳಿನಲ್ಲಿ ರಾಜ್ಯದಲ್ಲಿ ಉಷ್ಣ ಅಲೆ ಬೀಸಲಿದೆ ಎಂದು ಹೇಳಿದ್ದು, ಬಿಸಿಲಿನ ತಾಪ ಇನ್ನಷ್ಟು ಹೆಚ್ಚಾಗಲಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಆಧರಿಸಿ ರಾಜ್ಯದ ಮುಂದಿನ 5 ದಿನದ ಹವಾಮಾನ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಮಾರ್ಚ್ 30 ರಿಂದ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹೇಳಿದೆ.

ಗಾಳಿಯ ವೇಗ ಗಂಟೆಗೆ 40-50 ಕಿ. ಮೀ. ತಲುಪುವ ಸಾದ್ಯತೆಯಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಾರ್ಚ್ 31ರಿಂದ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಆಲಿಕಲ್ಲು ಮಳೆ ಎಚ್ಚರಿಕೆ: ಮಾರ್ಚ್ 31 ರಂದು ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮತ್ತು ಏಪ್ರಿಲ್ 1ರಂದು ಉತ್ತರ ಒಳನಾಡಿನ ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಕಲಬುರಗಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಾರ್ಚ್ ತಿಂಗಳಿನಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿತ್ತು. ಇದರಿಂದಾಗಿ ಬಿಸಿಗಾಳಿ ಬೀಸಿತ್ತು. ಆದರೆ ಉತ್ತರ ಕರ್ನಾಟಕ ಭಾಗದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಇಂತಹ ಬಿಸಿಗಾಳಿಯ ಅನುಭವವಾಗಿತ್ತು.
ಆದರೆ ಬೇರೆ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 35 ರಿಂದ 38 ಡಿಗ್ರಿ ಸೆಲ್ಸಿಯಸ್ ಅಸುಪಾಸಿನಲ್ಲಿತ್ತು. ಆದರೆ ಏಪ್ರಿಲ್‌ನಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಳವಾಗಲಿದೆ ಎಂದು ಅಂದಾಜಿಸಲಾಗಿದೆ. ಇದರಿಂದಾಗಿ ರಾಜ್ಯದ ಶೇ 90ರಷ್ಟು ಪ್ರದೇಶದಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾದರೆ ಬಿಸಿಗಾಳಿ ಬೀಸಲಿದೆ.
ಈ ತಿಂಗಳಿನಲ್ಲಿ ಕಲಬುರಗಿ, ರಾಯಚೂರು, ವಿಜಯಪುರ, ಬೀದರ್, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ. ಆದರೆ ಏಪ್ರಿಲ್‌ನಲ್ಲಿ ಈ ಜಿಲ್ಲೆಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್ ದಾಟುವ ಸಾಧ್ಯತೆ ಇದೆ.
ಅಲ್ಲದೇ ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು, ಕೋಲಾರ, ಹಾಸನ ಸೇರಿ ದಕ್ಷಿಣ ಕರ್ನಾಟಕ ವ್ಯಾಪ್ತಿಯ ಪ್ರದೇಶಗಳಲ್ಲಿ 34 ರಿಂದ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಮತ್ತು ಕರಾವಳಿ ಭಾಗದಲ್ಲಿ 33 ರಿಂದ 35 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.












Click it and Unblock the Notifications