ಪಂಚಮಸಾಲಿ ಮೀಸಲಾತಿ ಹೋರಾಟ ಹಿನ್ನೆಲೆ ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ!
ಬೆಂಗಳೂರು, ಫೆ. 21: ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಧಾನಸೌಧದ ಸುತ್ತಲೂ ನಿಷೇಧಾಜ್ಞೆ ಜಾರಿ ಮಾಡಿದೆ. ಈ ಕುರಿತು ಆದೇಶ ಮಾಡಿರುವ ಬೆಂಗಳೂರು ಮಹಾನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ವಿಧಾನಸೌಧದ ಸುತ್ತಲೂ 2 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಇಂದು (ಫೆ.21) ಬೆಳಗ್ಗೆ 6 ಗಂಟೆಯಿಂದ ನಾಳೆ (ಫೆ.22) ಮಧ್ಯರಾತ್ರಿ 12 ಗಂಟೆಯವರೆಗೆ ಸೆಕ್ಷನ್ 144ನ್ನು ಜಾರಿ ಮಾಡಿದ್ದಾರೆ.
ಲಿಂಗಾಯತ ಪಂಚಮಸಾಲಿ ಸುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ಸೌಲಭ್ಯ ಘೋಷಣೆಗೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಧಾನಸೌಧ ಹಾಗೂ ಅದರ ಸುತ್ತಮುತ್ತಲಿನ 2 ಕಿಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಕಮಲ್ ಪಂತ್ ಆದೇಶದಲ್ಲಿ ತಿಳಿಸಿದ್ದಾರೆ.
ವಿಧಾನಸೌಧದ ಸುತ್ತಮುತ್ತಲಿನ ಪ್ರದೇಶದಲ್ಲಿ ರಾಜಭವನ, ಹೈಕೋರ್ಟ್, ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಛೇರಿಗಳು ಹಾಗೂ ಆಸ್ಪತ್ರೆಗಳಿವೆ. ಪಾದಯಾತ್ರೆ ಸಂದರ್ಭದಲ್ಲಿ ಕೆಲವು ಕಿಡಗೇಡಿಗಳು ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟವನ್ನುಂಟು ಮಾಡಬಹುದು. ಜೊತೆಗೆ ಕಾನೂನು ಸುವ್ಯವಸ್ಥೆಗೆ ಭಂಗವನ್ನುಂಟು ಮಾಡಬಹುದಾದ ಸಂಭವವಿದೆ ಎಂದು ಗುಪ್ತ ಮಾಹಿತಿಯಿಂದ ತಿಳಿದು ಬಂದಿದೆ. ಹೀಗಾಗಿ ವಿಧಾನಸೌಧದ ಸುತ್ತಮುತ್ತಲಿನ 2 ಕಿಮೀ ಪ್ರದೇಶದಲ್ಲಿ ಸೆಕ್ಷನ್ 144 (1)ರಂತೆ ನಿಷೇಧಾಜ್ಞೆ ಜಾರಿಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.