ಗೌರಿ, ಕಲ್ಬುರ್ಗಿ ಹತ್ಯೆ ಪ್ರಕರಣಕ್ಕೆ ಸದ್ಯದಲ್ಲೇ ತಾರ್ಕಿಕ ಅಂತ್ಯ : ಎಂಬಿ ಪಾಟೀಲ
ಬೆಂಗಳೂರು, ಜನವರಿ 2 : ಅಪರಾಧ ಪ್ರಕರಣಗಳನ್ನು ತಹಬದಿಗೆ ತರುವುದು, ಮಾದಕ ವಸ್ತುಗಳ ನಿಯಂತ್ರಣ ಹಾಗೂ ನಗರದಲ್ಲಿನ ಸಂಚಾರ ದಟ್ಟಣೆಯನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ನಡೆದ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಗೃಹ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಬುಧವಾರ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳೊಂದಿಗೆ ಇಲಾಖೆ ಸಮಸ್ಯೆಗಳು ಹಾಗೂ ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಗೃಹ ಸಚಿವರು ಮಾತುಕತೆಯ ವಿವರ ನೀಡಿದರು.
ಅಪರಾಧ ಪ್ರಕರಣಗಳನ್ನು ತಡೆಗಟ್ಟುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಲಾಖೆಗೆ ಸಂಬಂಧಿಸಿದ ಕೆಲವು ಯೋಜನೆಗಳು ಆರ್ಥಿಕ ಇಲಾಖೆಯಲ್ಲಿ ಬಾಕಿ ಇವೆ ಹಾಗೂ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳಿಗೆ ವಸತಿ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಅವರ ಜೀವನ ಮಟ್ಟ ಸುಧಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಗೌರಿ ಲಂಕೇಶ್ ಹಾಗೂ ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆಗಳು ನಡೆಯುತ್ತಿದ್ದು, ಎರಡೂ ಪ್ರಕರಣಗಳು ಬೇಗ ತಾರ್ಕಿಕ ಅಂತ್ಯಕ್ಕೆ ಬರುವ ವಿಶ್ವಾಸ ಇದೆ. ತನಿಖಾಧಿಕಾರಿಗಳು ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಅಕ್ರಮ ವಲಸಿಗರೆಂದು ರಾಜ್ಯದಲ್ಲಿ 113 ಜನರನ್ನು ಈಗಾಗಲೇ ಗುರುತಿಸಲಾಗಿದೆ. ಅಕ್ರಮ ವಲಸಿಗರ ಬಗ್ಗೆ ನಿಗಾವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಪರಾಧಿಗಳನ್ನು ಯಾವುದೇ ಜಾತಿ ಧರ್ಮದವರೆಂದು ಗುರುತಿಸುವುದು ಸರಿಯಲ್ಲ ಎಂದು ಪಾಟೀಲರು ನುಡಿದರು.
ಪೊಲೀಸ್ ಸಿಬ್ಬಂದಿಗಳ ಜೀವನ ಮಟ್ಟ ಸುಧಾರಿಸುವ ಸಂಬಂಧ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು. ಔರಾದ್‍ಕರ್ ವರದಿ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ವರದಿ ತರಿಸಿ ನೋಡುತ್ತೇನೆ, ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಇಂದು ಇಲಾಖೆಯ ಕೆಲವು ವಿಭಾಗಗಳ ಬಗ್ಗೆ ಮಾತ್ರ ಮಾಹಿತಿ ಪಡೆಯಲಾಗಿದ್ದು, ಮುಂದಿನ ವಾರ ಉಳಿದ ವಿಭಾಗಗಳ ಬಗ್ಗೆಯೂ ಮಾಹಿತಿ ಪಡೆದು, ಇಲಾಖೆಯ ಒಟ್ಟಾರೆ ಪ್ರಗತಿಯ ಬಗ್ಗೆ ಮಾಹಿತಿ ಒದಗಿಸಲಾಗುವುದು. ಇಲಾಖೆಯಲ್ಲಿ ಉತ್ತಮ ಅಧಿಕಾರಿಗಳಿದ್ದಾರೆ, ಅವರನ್ನು ಗುರುತಿಸಿ ಪ್ರೋತ್ಸಾಹಿಸಬೇಕಾಗಿದೆ ಎಂದು ಇದೆ ಸಂದರ್ಭದಲ್ಲಿ ತಿಳಿಸಿದರು.












Click it and Unblock the Notifications