Lok Sabha Election 2024: ಕರಡಿ ಸಂಗಣ್ಣ ಜೊತೆ ಬಿಜೆಪಿ ನಾಯಕರ ಸಂಧಾನ ಸಭೆ ಯಶಸ್ವಿ
ಬೆಂಗಳೂರು, ಮಾರ್ಚ್ 31: ಟಿಕೆಟ್ ಹಂಚಿಕೆ ಬಳಿಕ ಬಿಜೆಪಿಯಲ್ಲಿ ತೀವ್ರ ಅಸಮಾಧಾನ ಹೆಚ್ಚಾಗಿದ್ದು, ಪಕ್ಷದಲ್ಲಿ ಬಂಡಾಯದ ಬಿಸಿ ಹೊಗೆಯಾಡುತ್ತಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಎರಡು ಬಾರಿ ಗೆಲುವು ಸಾಧಿಸುವ ಮೂಲಕ ಕ್ಷೇತ್ರದಲ್ಲಿ ಹಿಡಿತ ಸಾಧಿಸಿದ್ದ ಕರಡಿ ಸಂಗಣ್ಣ ಅವರಿಗೆ ಈ ಬಾರಿ ಟಿಕೆಟ್ ಕೈ ತಪ್ಪಿದ್ದು, ಇದರಿಂದಾಗಿ ತೀವ್ರ ಅಸಮಾಧಾನಗೊಂಡಿದ್ದರು.
ಇದೀಗ ಬಿಜೆಪಿ ರಾಜ್ಯ ನಾಯಕರು ಕರಡಿ ಸಂಗಣ್ಣ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲು ಕರಡಿ ಸಂಗಣ್ಣ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.

ಕೊಪ್ಪಳ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಭದ್ರಕೋಟೆ ಮಾಡಿದ್ದ ಹಾಲಿ ಸಂಸದ ಕರಡಿ ಸಂಗಣ್ಣ ಈ ಬಾರಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಕನಸಿನಲ್ಲಿದ್ದರು. ಆದರೆ ಈ ಬಾರಿ ಬಿಜೆಪಿ ಹೊಸ ಮುಖಗಳಿಗೆ ಹೆಚ್ಚು ಮಣೆ ಹಾಕಿದ್ದು, ಪ್ರತಾಪ್ ಸಿಂಹ, ಡಿ.ವಿ ಸದಾನಂದ ಗೌಡ ಸೇರಿದಂತೆ ಅನೇಕ ಹಾಲಿ ಸಂಸದರಿಗೆ ಈ ಬಾರಿ ಕೋಕ್ ನೀಡಲಾಗಿದೆ.
ಈ ಬಾರಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಡಾ. ಬಸವರಾಜ ಕ್ಯಾವಟೂರ್‌ಗೆ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಅವಕಾಶ ನೀಡಿದೆ. ಇದರಿಂದ ಕರಡಿ ಸಂಗಣ್ಣ ಪಕ್ಷದ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದರು. ಹೀಗಾಗಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಪಕ್ಷೇತರವಾಗಿ ಚುನಾವಣಾ ಕಣಕ್ಕಿಳಿಯಲು ಮುಂದಾಗಿದ್ದರು. ಹೀಗಾಗಿ ರಾಜ್ಯ ಬಿಜೆಪಿ ನಾಯಕರು ಕರಡಿ ಸಂಗಣ್ಣ ಅವರನ್ನು ಭೇಟಿಯಾಗಿ ಮನವೊಲಿಸುವ ಯತ್ನ ಮಾಡಿದ್ದರು.
ಇನ್ನು ಈ ಹಿಂದೆ ವಿಧಾನಸಭೆಯಲ್ಲಿ ಬಿಜೆಪಿ ಮುಖ್ಯ ಸಚೇತಕರಾಗಿರುವ ಜಿಲ್ಲೆಯ ಶಾಸಕ ದೊಡ್ಡನಗೌಡ ಪಾಟೀಲ್, ಜಿಲ್ಲಾ ಬಿಜೆಪಿ ಅಧ್ಯಕ್ಷ ನವೀಳ್ ಗುಳಗಣ್ಣವರ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಕರಡಿ ಸಂಗಣ್ಣ ಮನೆಗೆ ಭೇಟಿ ನೀಡಿ, ಸಂಗಣ್ಣ ಅವರ ಜೊತೆ ಮಾತುಕತೆ ನಡೆಸಿದ್ದರು. ಶನಿವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಮತ್ತು ಮಾಜಿ ಶಾಸಕ ಬಸವರಾಜ ದಡೇಸೂಗೂರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಉಪಸ್ಥಿತಿಯಲ್ಲಿ ಸಂಧಾನ ಸಭೆ ನಡೆಸಲಾಗಿದ್ದು, ಕರಡಿ ಸಂಗಣ್ಣ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.












Click it and Unblock the Notifications