ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಯಾರಿಗೆ ಲಾಭ? ಕರ್ನಾಟಕದ ಮೇಲೆ ಇದರ ಪರಿಣಾಮವೇನು? ವಿವರ, ವಿಶ್ಲೇಷಣೆ
ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಅಧಿಕೃತವಾಗಿ ಘೋಷಣೆಯಾಗಿದೆ. ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಈ ಘೋಷಣೆ ಹೊರಬಿದ್ದಿದೆ. ಇವೆರಡೂ ಪಕ್ಷಗಳ ಮೈತ್ರಿ ಕರ್ನಾಟಕ ರಾಜಕಾರಣದ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.
2024 ರ ಲೋಕಸಭೆ ಚುನಾವಣೆಗೆ ಕೇವಲ ಆರು ತಿಂಗಳು ಇವೆ. ಈ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳು ಮೈತ್ರಿ ಮಾತುಕತೆ ನಡೆಸಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಲು ನಿರ್ಧರಿಸಿವೆ. ಆದರೆ, ಇನ್ನೂ ಸೀಟು ಹಂಚಿಕೆ ಕುರಿತು ಯಾವುದೇ ನಿರ್ಧಾರಕ್ಕೆ ಬಂದಿಲ್ಲವೆಂದು ನಾಯಕರು ತಿಳಿಸಿದ್ದಾರೆ.

ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಮುಖಭಂಗ ಅನುಭವಿಸಿವೆ. ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಅಶ್ವಮೇಧವನ್ನು ಕಟ್ಟಿಹಾಕಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮೈತ್ರಿ ನಿರ್ಧಾರಕ್ಕೆ ಬಂದಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ
ಜಾತಿ ಸಮೀಕರಣ
ಕರ್ನಾಟಕದ ಎರಡು ಪ್ರಬಲ ಸಮುದಾಯಗಳು ಬಿಜೆಪಿ ಹಾಗೂ ಜೆಡಿಎಸ್ ಪರ ನಿಂತಿವೆ. ಲಿಂಗಾಯತರು ಬಿಜೆಪಿಗೆ ಬೆಂಬಲಿಸಿದರೆ, ಒಕ್ಕಲಿಗರು ಜೆಡಿಎಸ್ ಪರ ಇದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಒಂದು ವೇಳೆ, ಇವೆರಡು ಸಮುದಾಯಗಳು ಎನ್‌ಡಿಎ ಮೈತ್ರಿಕೂಟವನ್ನು ಬೆಂಬಲಿಸಿದರೆ ಬಿಜೆಪಿ ಹಾಗೂ ಜೆಡಿಎಸ್‌ಗೆ ಲಾಭವಾಗಲಿದೆ ಎಂಬ ವಾದಗಳು ಕೇಳಿಬಂದಿವೆ.
ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಪ್ರಾಬಲ್ಯವಿದ್ದರೆ, ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ( ಉತ್ತರ ಕರ್ನಾಟಕ ) ಲಿಂಗಾಯತರ ಪ್ರಭಾವವಿದೆ. ಹಳೇ ಮೈಸೂರು ಜಿಲ್ಲೆಗಳಲ್ಲಿ ಜೆಡಿಎಸ್‌ಗೆ ಹೆಚ್ಚು ಮತಗಳು ಲಭ್ಯವಾಗಿದ್ದರೆ, ಉತ್ತರ ಕರ್ನಾಟಕದಲ್ಲಿ ಬಿಜೆಪಿ ಪ್ರಾಬಲ್ಯ ಹೊಂದಿದೆ. ಈ ಮೈತ್ರಿಯಿಂದ ಕರ್ನಾಟಕದ ಎರಡು ಪ್ರಬಲ ಪ್ರಾಂತ್ಯಗಳನ್ನು ತಮ್ಮತ್ತ ಸೆಳೆಯುವುದು ಎನ್‌ಡಿಎ ಮೈತ್ರಿಕೂಟದ ಉದ್ದೇಶವಾಗಿದೆ.
ಜೆಡಿಎಸ್‌ಗೆ ಲಾಭ?
ಮಂಡ್ಯ, ಮೈಸೂರು, ತುಮಕೂರು, ಹಾಸನ ಹಾಗೂ ಕೋಲಾರ ಲೋಕಸಭೆ ಕ್ಷೇತ್ರಗಳಿಗೆ ಜೆಡಿಎಸ್ ಬೇಡಿಕೆ ಇಡಬಹುದು. ಆದರೆ, ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅವರು ಸದಸ್ಯರಾಗಿದ್ದಾರೆ. ಮೈಸೂರು, ತುಮಕೂರು ಹಾಗೂ ಕೋಲಾರದಲ್ಲಿ ಬಿಜೆಪಿಯ ಸಂಸದರಿದ್ದಾರೆ. ಹಾಸನದಲ್ಲಿ ಮಾತ್ರ ಜೆಡಿಎಸ್‌ನ ಸಂಸದರು ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನೋಡುವುದಾದರೆ, ಸೀಟು ಹಂಚಿಕೆ ವಿಚಾರದಲ್ಲಿ ಎರಡೂ ಪಕ್ಷಗಳ ಮುಂದಿನ ನಡೆ ಏನು ಎಂಬುದು ಯಕ್ಷಪ್ರಶ್ನೆಯಾಗಿ ಉಳಿದುಕೊಂಡಿದೆ.
ಪ್ರಸ್ತುತ ಕರ್ನಾಟಕದಲ್ಲಿ 28 ಲೋಕಸಭಾ ಸೀಟುಗಳ ಪೈಕಿ 25 ಸೀಟುಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಜೆಡಿಎಸ್ ಕೇವಲ ಒಂದು ಸ್ಥಾನದಲ್ಲಿ ಜಯಗಳಿಸಿದೆ. ಸೀಟು ಹಂಚಿಕೆ ಬಗ್ಗೆ ತೀರ್ಮಾನ ಆಗಿಲ್ಲದಿದ್ದರೂ, ಜೆಡಿಎಸ್ ಐದು ಸ್ಥಾನಗಳಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಆದರೆ, ಈ ಐದು ಕ್ಷೇತ್ರಗಳಲ್ಲಿ ಬಿಜೆಪಿ ಜಯಸಾಧಿಸಿರುವ ನಾಲ್ಕು ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಬೇಕಾಗುತ್ತದೆ. ಇದರಿಂದ ಬಿಜೆಪಿಗೆ ಹಿನ್ನಡೆಯಾಗಲಿದೆಯೇ ಹೊರತು ಜೆಡಿಎಸ್‌ಗೆ ಅಲ್ಲವೆಂಬುದು ರಾಜಕೀಯ ಪಂಡಿತರ ಅಭಿಪ್ರಾಯವಾಗಿದೆ.












Click it and Unblock the Notifications