Lok Sabha Election 2024: ಬಿಜೆಪಿ ವಿರುದ್ಧ ಪ್ರಚಾರ ನಡೆಸಲಿದೆ ಕರ್ನಾಟಕ ರಾಜ್ಯ ರೈತ ಸಂಘ
ಬೆಂಗಳೂರು, ಮಾರ್ಚ್ 23: ರಾಜ್ಯದ ಆಡಳಿತರೂಢ ಕಾಂಗ್ರೆಸ್ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಂದೂಗೂಡಿದ್ದು ಲೋಕಸಭಾ ಚುನಾವಣೆಯಲ್ಲಿ ಸೋಲಿಸುವ ಪಣ ತೊಟ್ಟಿವೆ. ಆದರೆ, ಪಕ್ಷದೊಳಗಿನ ಬಂಡಾಯಗಳು, ಮೈತ್ರಿ ಬಗೆಗಿನ ಅಸಮಾಧಾನಗಳು ಎರಡೂ ಪಕ್ಷದಲ್ಲೂ ಕಾಣಿಸಿಕೊಂಡಿದೆ. ಇದರ ಬೆನ್ನಲ್ಲೇ ರಾಜ್ಯ ರೈತ ಸಂಘ ಕೂಡ ಬಿಜೆಪಿ ವಿರುದ್ಧ ತಿರುಗಿ ಬಿದ್ದಿದೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ರೈತ ಸಂಘಟನೆಯು ಬಿಜೆಪಿ ವಿರುದ್ಧ ಪ್ರಚಾರ ನಡೆಸಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ (ಕೆಆರ್‌ಆರ್‌ಎಸ್) ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಬಡಗಲಪುರ ನಾಗೇಂದ್ರ, "ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದ್ವಿಗುಣಗೊಳಿಸುವ, ಬೆಲೆ ಏರಿಕೆಯ ಭರವಸೆಯೊಂದಿಗೆ ಬಿಜೆಪಿ ನೇತೃತ್ವದ ಎನ್‌ಡಿಎ 10 ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ 10 ವರ್ಷಗಳ ಕಾಲ ರೈತರು ಮತ್ತು ಕಾರ್ಮಿಕ ವಿರೋಧಿ ನೀತಿಗಳನ್ನು ಹೊರತಂದಿದೆ" ಎಂದು ಆರೋಪಿಸಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯು ಕಾರ್ಮಿಕ ವರ್ಗ ಮತ್ತು ರೈತರಿಗೆ ಮಹತ್ವದ್ದಾಗಿದೆ. ಹೀಗಾಗಿ ಕರ್ನಾಟಕ ರಾಜ್ಯ ರೈತ ಸಂಘದ (ಕೆಆರ್‌ಆರ್‌ಎಸ್) ಬಿಜೆಪಿಯನ್ನು ತೊಲಗಿಸಿ ರೈತ ಸಮುದಾಯವನ್ನು ಉಳಿಸುವ ಅಭಿಯಾನವನ್ನು ಪ್ರಾರಂಭಿಸುತ್ತದೆ ಎಂದು ಬಡಗಲಪುರ ನಾಗೇಂದ್ರ ಹೇಳಿದ್ದಾರೆ.
10 ವರ್ಷಗಳಲ್ಲಿ 1 ಲಕ್ಷಕ್ಕೂ ಹೆಚ್ಚು ರೈತರ ಆತ್ಮಹತ್ಯೆ
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಆಡಳಿತದಲ್ಲಿ ರೈತರ ಆತ್ಮಹತ್ಯೆ ಹೆಚ್ಚಿದೆ. ಕಳೆದ 10 ವರ್ಷಗಳಲ್ಲಿ 1 ಲಕ್ಷಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಆರ್‌ಆರ್‌ಎಸ್ ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರದ ''ರೈತ ವಿರೋಧಿ'' ನೀತಿಗಳನ್ನು ತೋರಿಸುವ ಕರಪತ್ರಗಳು ಮತ್ತು ಭಿತ್ತಿಪತ್ರಗಳನ್ನು ಹಂಚಲಿದೆ ಎಂದು ಬಡಗಲಪುರ ನಾಗೇಂದ್ರ ಮಾಹಿತಿ ನೀಡಿದ್ದಾರೆ.

ಪ್ರಧಾನಿ ಮೋದಿ ಅವರು ರೈತರ ಪ್ರತಿಭಟನೆಯಿಂದ ಮೂರು ವಿವಾದಿತ ಕೃಷಿ ಕಾನೂನುಗಳನ್ನು ಹಿಂಪಡೆದರೂ, ಕೃಷಿಗೆ ಕನಿಷ್ಠ ಬೆಂಬಲ ಬೆಲೆ ಮಾಡುವ ಕಾನೂನು ಜಾರಿಗೊಳಿಸುವುದು ಸೇರಿದಂತೆ ಇತರ ರೈತರ ಬೇಡಿಕೆಗಳನ್ನು ಈಡೇರಿಸಲು ಏನೂ ಮಾಡಲಿಲ್ಲ. 2022 ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಮೋದಿ ಭರವಸೆ ನೀಡಿದ್ದರು. ಆದರೆ, ಉತ್ಪಾದನಾ ವೆಚ್ಚ ದ್ವಿಗುಣಗೊಂಡಿದೆ ಎಂದು ಬಡಗಲಪುರ ನಾಗೇಂದ್ರ ಆರೋಪಿಸಿದ್ದಾರೆ.
ರೈತರಿಗಾಗಿ ಏನು ಮಾಡದ ಅವರು, ಕೈಗಾರಿಕೋದ್ಯಮಿಗಳ 20 ಲಕ್ಷ ಕೋಟಿಗೂ ಹೆಚ್ಚು ಸಾಲ ಮನ್ನಾ ಮಾಡಿದೆ. ಆರ್ಥಿಕ ಸಂಕಷ್ಟದಿಂದ ಪಾರಾಗಲು ರೈತರ ಸಾಲ ಮನ್ನಾ ಘೋಷಣೆ ಮಾಡುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಬಿಜೆಪಿ ವಿರುದ್ಧ ಪ್ರಚಾರ ಮಾಡುತ್ತದೆ. ಆದರೆ ಯಾವುದೇ ನಿರ್ದಿಷ್ಟ ರಾಜಕೀಯ ಪಕ್ಷಕ್ಕೆ ಮತ ಹಾಕುವಂತೆ ರೈತರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುವುದಿಲ್ಲ. ಕೆಆರ್‌ಆರ್‌ಎಸ್ ಈ ಪ್ರಚಾರಕ್ಕೆ ಸಾಮಾಜಿಕ ಮಾಧ್ಯಮವನ್ನು ಸಹ ಬಳಸಿಕೊಳ್ಳುತ್ತದೆ ಎಂದು ಬಡಗಲಪುರ ನಾಗೇಂದ್ರ ಮಾಹಿತಿ ನೀಡಿದ್ದಾರೆ.












Click it and Unblock the Notifications